ಮೂಡಬಿದ್ರೆ-ಕಾರ್ಕಳ ಹೆದ್ದಾರಿಯಲ್ಲಿ ಖಾಸಗಿ ಬಸ್ ಪಲ್ಟಿ, ಸ್ಕೂಟರ್ ಸವಾರ ಗಂಭೀರ, ಹಲವರಿಗೆ ಗಾಯ

ಮೂಡುಬಿದಿರೆ: ಕಾರ್ಕಳದಿಂದ ಮೂಡುಬಿದಿರೆ ಕಡೆಗೆ ಸಂಚರಿಸುತ್ತಿದ್ದ ‘ವಿಶಾಲ್’ ಖಾಸಗಿ ಬಸ್ ಬನ್ನಡ್ಕದ ಸೋನ್ಸ್ ಫಾರ್ಮ್ ಮುಂಭಾಗದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ಶನಿವಾರ ಸಂಭವಿಸಿದೆ.

ಅಪಘಾತದ ವೇಳೆ ಬಸ್ ಸ್ಕೂಟಿಗೆ ಡಿಕ್ಕಿ ಹೊಡೆದ ಪರಿಣಾಮ ಸ್ಕೂಟಿ ಸವಾರ ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಲಾಗಿದೆ. ಬಸ್ಸಿನಲ್ಲಿದ್ದ ಹಲವು ಪ್ರಯಾಣಿಕರು ಸಹ ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ.

ಘಟನೆಯ ಬಳಿಕ ಸ್ಥಳದಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಸ್ಥಳೀಯರು ಹಾಗೂ ಸಾರ್ವಜನಿಕರು ಗಾಯಾಳುಗಳ ರಕ್ಷಣೆಗೆ ಧಾವಿಸಿ ಆಸ್ಪತ್ರೆಗೆ ಸಾಗಿಸಲು ನೆರವಾದರು.

ಇದೇ ವೇಳೆ, ಈ ಭಾಗದಲ್ಲಿ ಹೆದ್ದಾರಿ ಇಲಾಖೆಯ ನಿರ್ಲಕ್ಷ್ಯವೇ ಅಪಘಾತಕ್ಕೆ ಪ್ರಮುಖ ಕಾರಣ ಎಂದು ಸ್ಥಳೀಯರು ಆರೋಪಿಸಿದ್ದಾರೆ. ರಸ್ತೆ ಕಾಮಗಾರಿ ನಡೆಯುತ್ತಿರುವ ನಡುವೆಯೇ ಸೂಕ್ತ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳದೆ ಏಕಮುಖ (ಒನ್ ವೇ) ಸಂಚಾರಕ್ಕೆ ಅವಕಾಶ ಮಾಡಿಕೊಟ್ಟಿರುವುದರಿಂದ ವಾಹನ ಸವಾರರು ಸಂಕಷ್ಟ ಅನುಭವಿಸುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.