ಉಡುಪಿ: ರಾಜ್ಯ ಕಡಲ ಮೀನುಗಾರಿಕೆ ನಿಯಂತ್ರಣ ಕಾಯ್ದೆ ಅನ್ವಯ ಜಿಲ್ಲೆಯ ಕರಾವಳಿಯಲ್ಲಿ ಯಾವುದೇ ಬಲೆ ಹಾಗೂ ಸಾಧನಗಳನ್ನು ಉಪಯೋಗಿಸಿ ಮೀನುಗಾರಿಕೆಗಾಗಿ ಯಾಂತ್ರೀಕೃತ ದೋಣಿ ಮತ್ತು 10 ಅಶ್ವಶಕ್ತಿ (ಹೆಚ್.ಪಿ) ಸಾಮರ್ಥ್ಯಕ್ಕಿಂತ ಮೇಲ್ಪಟ್ಟ ಇನ್ಬೋರ್ಡ್ ಅಥವಾ ಔಟ್ಬೋರ್ಡ್ ಯಂತ್ರಗಳನ್ನು ಅಳವಡಿಸಿರುವ ಸಾಂಪ್ರದಾಯಿಕ ದೋಣಿಗಳ ಮೂಲಕ ಕೈಗೊಳ್ಳುವ ಮೀನುಗಾರಿಕೆ ಚಟುವಟಿಕೆಯನ್ನು ಜೂನ್ 1 ರಿಂದ ಜುಲೈ 31 ರ ವರೆಗೆ ಒಟ್ಟು 61 ದಿನಗಳ ಕಾಲ ನಿಷೇಧಿಸಲಾಗಿರುತ್ತದೆ.
ದೋಣಿಯನ್ನು ಸಾಗಿಸುವ ಉದ್ದೇಶಕ್ಕಾಗಿ 10 ಅಶ್ವಶಕ್ತಿಯ ವರೆಗಿನ ಸಾಮರ್ಥ್ಯದ ಮೋಟರೀಕೃತ ದೋಣಿ ಹಾಗೂ ಸಾಂಪ್ರದಾಯಿಕ ನಾಡದೋಣಿಗಳು ಕರಾವಳಿ ಮೀನುಗಾರಿಕೆಯನ್ನು ಕೈಗೊಳ್ಳಲು ಅನುಮತಿ ನೀಡಲಾಗಿರುತ್ತದೆ.
ಈ ಆದೇಶವನ್ನು ಉಲ್ಲಂಘಿಸುವ ಮೀನುಗಾರಿಕಾ ದೋಣಿಗಳು ಮತ್ತು ಮೀನುಗಾರರು ಕಡಲ ಮೀನುಗಾರಿಕೆ ಕಾಯ್ದೆ 1986 ರ ಅನ್ವಯ ವಿಧಿಸಲಾಗಿರುವ ದಂಡನೆಗಳಿಗೆ ಹೊಣೆಯಾಗುವುದಲ್ಲದೇ, ಒಂದು ವರ್ಷದ ಅವಧಿಗೆ ಡೆಲಿವರಿ ಪಾಯಿಂಟ್ನಲ್ಲಿ ರಾಜ್ಯ ಮಾರಾಟ ಕರ ರಹಿತ ಡೀಸಿಲ್ ಪಡೆಯಲು ಅನರ್ಹರಾಗುತ್ತಾರೆ. ಆದ್ದರಿಂದ ಕರಾವಳಿ ಪ್ರದೇಶದ ಮೀನುಗಾರರು ಈ ಆದೇಶವನ್ನು ಪಾಲಿಸುವಂತೆ ಮೀನುಗಾರಿಕಾ ಇಲಾಖೆಯ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.