ಅ. 30ರಿಂದ ಕರಾವಳಿ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ: ಹವಾಮಾನ ಇಲಾಖೆ

ಬೆಂಗಳೂರು: ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದ ಪರಿಣಾಮ ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಐದು ದಿನಗಳವರೆಗೆ ಮಳೆಯಾಗುವ ಸೂಚನೆ ಇತ್ತು. ಅದರ ಪ್ರಭಾವ ತಗ್ಗಿರುವುದರಿಂದ ಮಳೆ ದಿಢೀರ್ ತಗ್ಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಆದರೆ, ಅ.29ರಿಂದ ದಕ್ಷಿಣ ಒಳನಾಡಿನಲ್ಲಿ ಮತ್ತೆ ಮಳೆ ಹೆಚ್ಚಾಗುವ ಸಾಧ್ಯತೆ ಇದ್ದು, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ಚಾಮರಾಜನಗರ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ‘ಯೆಲ್ಲೊ ಅಲರ್ಟ್‌’ ಘೋಷಿಸಲಾಗಿದೆ.

ಕರಾವಳಿಯ ಉಡುಪಿ, ಉತ್ತರ ಕನ್ನಡ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಇದೇ 30ರಿಂದ ಮಳೆಯಾಗುವ ನಿರೀಕ್ಷೆ ಇದೆ. ಉಳಿದ ಜಿಲ್ಲೆಗಳಲ್ಲಿ ಗುಡುಗು, ಸಿಡಿಲು ಹೆಚ್ಚಾಗಿ ಇರಲಿದ್ದು, ಕೆಲವೆಡೆ ಸಾಧಾರಣವಾದ ಮಳೆಯಾಗಬಹುದು. ಉತ್ತರ ಒಳನಾಡಿನಲ್ಲಿ ಒಣಹವೆ ಮುಂದುವರಿಯಲಿದೆ.