ಬೆಂಗಳೂರು: ಕನ್ನಡ ರಾಜ್ಯೋತ್ಸವದ ನಿಮಿತ್ತ ರಾಜ್ಯ ಸರ್ಕಾರದಿಂದ ಕೊಡ ಮಾಡುವ ರಾಜ್ಯೋತ್ಸವ ಪ್ರಶಸ್ತಿಗೆ ಈ ಬಾರಿ ಕಲೆ, ಸಾಹಿತ್ಯ, ವಿಜ್ಞಾನ, ಸಿನಿಮಾ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ 68 ಸಾಧಕರಿಗೆ ಮತ್ತು 10 ಸಂಘ ಸಂಸ್ಥೆಗಳಿಗೆ ರಾಜ್ಯೋತ್ಸವ ಪ್ರಶಸ್ತಿ ನೀಡಲು ತೀರ್ಮಾನ ಮಾಡಲಾಗಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಶಿವರಾಜ್ ಎಸ್. ತಂಗಡಗಿ ತಿಳಿಸಿದ್ದಾರೆ. ಈ ಬಾರಿಯ ರಾಜ್ಯೋತ್ಸವ ಪ್ರಶಸ್ತಿಗೆ ವಿವಿಧ ಕ್ಷೇತ್ರಗಳಲ್ಲಿನ 68 ಮಂದಿ ಸಾಧಕರು ಆಯ್ಕೆ ಆಗಿದ್ದಾರೆ. ಇವರ ಜೊತೆಗೆ 10 ಸಂಘ ಸಂಸ್ಥೆಗಳನ್ನು ಕೂಡ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.
ಪ್ರಕಟಗೊಂಡ ರಾಜ್ಯೋತ್ಸವ ಪ್ರಶಸ್ತಿ ಪಟ್ಟಿಯಲ್ಲಿ 100 ವರ್ಷ ದಾಟಿದ ದಾವಣಗೆರೆ ಹಾಗೂ ಉತ್ತರ ಕನ್ನಡ ಜಿಲ್ಲೆಯ ಇಬ್ಬರು ಶತಾಯುಷಿ, 13 ಮಹಿಳೆಯರು, 54 ಪುರುಷರು ಹಾಗೂ ಓರ್ವ ಮಂಗಳಮುಖಿ ಇದ್ದಾರೆ. ಪ್ರಶಸ್ತಿ ಪಡೆದವರಿಗೆ 5 ಲಕ್ಷ ನಗದು ಹಾಗೂ 25 ಗ್ರಾಂ ಚಿನ್ನದ ಪದಕ ನೀಡಲಾಗುವುದು ಎಂದು ಸಚಿವ ತಂಗಡಗಿ ತಿಳಿಸಿದರು.ಇಂದು ಬಿಡುಗಡೆ ಆಗಿರುವ ರಾಜ್ಯೋತ್ಸವ ಪ್ರಶಸ್ತಿ ಪಟ್ಟಿಯಲ್ಲಿ ಇಸ್ರೋ ಅಧ್ಯಕ್ಷ ಸೋಮನಾಥ್, ನಿವೃತ್ತ ನ್ಯಾಯಮೂರ್ತಿ ಗೋಪಾಲಗೌಡ, ಹುಚ್ಚಮ್ಮ, ಹಿರಿಯ ನಟರಾದ ಡಿಂಗ್ರಿ ನಾಗರಾಜ್, ಬ್ಯಾಂಕ್ ಜನಾರ್ದನ ಸೇರಿ 68 ಜನ ಸಾಧಕರು ಪ್ರಶಸ್ತಿಗೆ ಆಯ್ಕೆ ಆಗಿದ್ದಾರೆ.