ಟೆಲ್ ಅವಿವ್: ನೂರಾರು ಪ್ರಯಾಣಿಕರ ಜೀವ ಉಳಿಸಿದ ಭಾರತೀಯ ಪೈಲಟ್ ಕ್ಯಾಪ್ಟನ್ ಸ್ಮಿತ್ ಮಚ್ಚರ್ ಅವರಿಗೆ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅಧಿಕೃತ ಆಹ್ವಾನ ನೀಡಿದ್ದಾರೆ.
2027ರ ಮೇ ತಿಂಗಳಲ್ಲಿ ನಡೆಯಲಿರುವ ಇಸ್ರೇಲ್‌ನ ಸ್ವಾತಂತ್ರ್ಯ ದಿನಾಚರಣೆಯ ಉದ್ಘಾಟನಾ ಸಮಾರಂಭದಲ್ಲಿ ಜ್ಯೋತಿ ಬೆಳಗಿಸಲು ಕ್ಯಾಪ್ಟನ್ ಸ್ಮಿತ್ ಮಚ್ಚರ್ ಅವರನ್ನು ಆಹ್ವಾನಿಸಲಾಗಿದೆ. ಸಾಂಪ್ರದಾಯಿಕವಾಗಿ ಇಸ್ರೇಲಿ ನಾಗರಿಕರಿಗೆ ಮಾತ್ರ ಸೀಮಿತವಾಗಿದ್ದ ಈ ಗೌರವವನ್ನು ಭಾರತೀಯರಿಗೆ ನೀಡುತ್ತಿರುವುದು ವಿಶೇಷವಾಗಿದೆ.
ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕ್ಯಾಪ್ಟನ್ ಸ್ಮಿತ್ ಅವರೊಂದಿಗೆ ದೂರವಾಣಿ ಮೂಲಕ ಮಾತನಾಡಿದ ನೆತನ್ಯಾಹು, ಭಾರತ ಮತ್ತು ಇಸ್ರೇಲ್‌ನ ಧೈರ್ಯಶಾಲಿ ಜನರ ನಿಜವಾದ ಹೀರೋ ಸ್ಮಿತ್ ಎಂದು ಕೊಂಡಾಡಿದ್ದಾರೆ. ಅಲ್ಲದೆ, ಇಡೀ ಜಗತ್ತಿನ ಹೀರೋ ಕೂಡ ನೀವೇ ಎಂದು ಶ್ಲಾಘಿಸಿದ್ದಾರೆ. ಈ ಸಂಭಾಷಣೆಯ ವಿಡಿಯೊವನ್ನು ನೆತನ್ಯಾಹು ಅವರ ಕಚೇರಿ ಬಿಡುಗಡೆ ಮಾಡಿದೆ.















