ಉಡುಪಿ: 75 ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ರಾಜ್ಯದಾದ್ಯಂತ ಸ್ವಾತಂತ್ರ್ಯ ಸಂಗ್ರಾಮದ ನೆನಪುಗಳನ್ನು
ಮೆಲುಕು ಹಾಕುವ ‘ಅಮೃತ ಭಾರತಿಗೆ ಕನ್ನಡದ ಆರತಿ’ ಕಾರ್ಯಕ್ರಮವು ಆಂದೋಲನದ ರೀತಿ ನಡೆಯಲಿದೆ ಎಂದು ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಸುನಿಲ್ ಕುಮಾರ್ ಹೇಳಿದರು.
ಅವರು ಮಂಗಳವಾರದಂದು ನಗರದ ಜಿಲ್ಲಾ ಪಂಚಾಯತ್‌ನ ಡಾ. ವಿ.ಎಸ್ ಆಚಾರ್ಯ ಸಭಾಂಗಣದಲ್ಲಿ 75 ನೇ ಸ್ವಾತಂತ್ರ್ಯ ಸಂಗ್ರಾಮದ ಅಂಗವಾಗಿ ನಡೆಯಲಿರುವ ಅಮೃತ ಭಾರತಿಗೆ ಕನ್ನಡದ ಆರತಿ ಕಾರ್ಯಕ್ರಮದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು.
ನಮ್ಮ ದೇಶಕ್ಕೆ ಸ್ವಾತಂತ್ರ್ಯ ದೊರಕಿಸಿಕೊಡಲು ಅನೇಕ ಮಹಾನ್ ನಾಯಕರು ತಮ್ಮ ಜೀವವನ್ನೇ ತ್ಯಾಗ ಮಾಡಿ,
ಹೋರಾಟವನ್ನು ನಡೆಸಿದ್ದಾರೆ. ಇಂತಹ ಹೋರಾಟಗಾರರ ಜೀವನ ಕಥೆ, ಹೋರಾಟದ ವಿವಿಧ ಹಂತಗಳು ಸೇರಿದಂತೆ, ಸ್ವಾತಂತ್ರ್ಯ ಹೋರಾಟಕ್ಕೆ ಕನ್ನಡಿಗರ ಕೊಡುಗೆಯನ್ನು ಇಂದಿನ ಯುವಜನರಿಗೆ, ಸಾರ್ವಜನಿಕರಿಗೆ ಹಾಗೂ ಹೊರರಾಜ್ಯದವರಿಗೆ ತಿಳಿಸುವ ಉದ್ದೇಶದಿಂದ ಕಾರ್ಯಕ್ರಮವನ್ನು ವಿಭಿನ್ನವಾಗಿ ಹಮ್ಮಿಕೊಳ್ಳಲಾಗಿದೆ.
ಮೇ 28 ರಂದು ಬೆಳಗ್ಗೆ 10.30 ಕ್ಕೆ ಉಡುಪಿಯ ಅಜ್ಜರಕಾಡಿನಲ್ಲಿ ಹಾಗೂ ಕುಂದಾಪುರದ ಬಸ್ರೂರಿನಲ್ಲಿ ಕಾರ್ಯಕ್ರಮ ನಡೆಯಲಿದ್ದು, ಇದು ಸರಕಾರಿ ಕಾರ್ಯಕ್ರಮವಾಗದೇ ಜನಪರ ಕಾರ್ಯಕ್ರಮವಾಗಬೇಕು, ಯುವಕ ಸಂಘಗಳು, ಸಾಮಾಜಿಕ ಸಂಘಟನೆಗಳು, ಕನ್ನಡಪರ ಸಂಘಟನೆಗಳು, ವಿದ್ಯಾರ್ಥಿಗಳು ಸೇರಿದಂತೆ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು.
ಈ ಕಾರ್ಯಕ್ರಮದ ಯಶಸ್ಸಿಗೆ ತಾಲೂಕು ಮಟ್ಟದಲ್ಲಿ ಸಮಿತಿ ಸಭೆಗಳನ್ನು ವಿವಿಧ ಸಂಘಟನೆಗಳ ಪದಾಧಿಕಾರಿಗಳೊಂದಿಗೆ ನಡೆಸಿ, ಕಾರ್ಯಕ್ರಮದ ಯಶಸ್ವಿಗೆ ರೂಪುರೇಷೆಗಳನ್ನು ಸಿದ್ಧಪಡಿಸಿ, ಅರ್ಥ ಪೂರ್ಣವಾಗಿ ದೊಡ್ಡ ರೀತಿಯಲ್ಲಿ ಕಾರ್ಯಕ್ರಮ ಆಯೋಜಿಸಬೇಕು.
ಈಗಾಗಲೇ ರಾಜ್ಯದಲ್ಲಿ ಸ್ವಾತಂತ್ರ್ಯ ಹೋರಾಟ ನಡೆದ 75 ಸ್ಥಳಗಳ ಕುರಿತ ಪುಸ್ತಕ ಬಿಡುಗಡೆ ಮಾಡಲಾಗಿದೆ ಎಂದ ಅವರು, ಆಗಸ್ಟ್ 9 ರಿಂದ 15 ರ ವರೆಗೆ ಪ್ರತಿ ಮನೆಯ ಮೇಲೆ ರಾಷ್ಟ್ರಧ್ವಜ ಹಾರಿಸಲಾಗುವುದು.
ಜೂನ್ 15 ರಿಂದ 30 ರ ವರೆಗೆ “ಹೋರಾಟ ನೆಲದಲ್ಲಿ ಒಂದು ದಿನ” ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಸ್ವಾತಂತ್ರ್ಯ ಹೋರಾಟ ನಡೆದ ಆಯ್ದ 15 ಸ್ಥಳಗಳಲ್ಲಿ 15 ದಿನ ಕಾರ್ಯಕ್ರಮ ನಡೆಯಲಿದ್ದು, ಆ ಸ್ಥಳದ ಕುರಿತು ಉಪನ್ಯಾಸ ಪ್ರದರ್ಶನ, ಸಾಕ್ಷ್ಯಚಿತ್ರ ಪ್ರದರ್ಶನ ನಡೆಯಲಿದೆ. ಈ ಬಗ್ಗೆ ಹೆಚ್ಚಿನ ಪ್ರಚಾರ ನೀಡಬೇಕು.
ಅಮೃತ ಭಾರತಿಗೆ ಕನ್ನಡದ ಆರತಿ ಶೀರ್ಷಿಕೆಯಡಿ 4 ಕಂದಾಯ ವಿಭಾಗಗಳಿಂದ ರಥಯಾತ್ರೆ ಸಂಚರಿಸಲಿದೆ. ಗಣ್ಯರು, ಸಚಿವರು, ಜನಪ್ರತಿನಿಧಿಗಳು, ಸಾರ್ವಜನಿಕರು ಹಾಗೂ ವಿವಿಧ ಸಂಘ-ಸಂಸ್ಥೆಗಳು ಇದರಲ್ಲಿ ಪಾಲ್ಗೊಳ್ಳಲಿದ್ದಾರೆ. ರಥಯಾತ್ರೆಯ ಪೂರ್ವಭಾವಿಯಾಗಿ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ವಿವಿಧ ರೀತಿಯ ಸ್ಪರ್ಧಾ ಕಾರ್ಯಕ್ರಮಗಳು ನಡೆಯಲಿವೆ.
ರಥಯಾತ್ರೆ ತಂಗುವ ಸ್ಥಳಗಳಲ್ಲಿ ವೇದಿಕೆ ಕಾರ್ಯಕ್ರಮ ನಡೆಯಲಿದ್ದು, ಕಾರ್ಯಕ್ರಮದಲ್ಲಿ ಉಪನ್ಯಾಸ, ಸ್ವಾತಂತ್ರ್ಯ ಹೋರಾಟವನ್ನು ನೆನಪಿಸುವ ಸಾಂಸ್ಕೃತಿಕ ಕಾರ್ಯಕ್ರಮಗಳು, ಸಾಕ್ಷ್ಯಚಿತ್ರ ಪ್ರದರ್ಶನ ನಡೆಯಲಿವೆ ಎಂದು ಮಾಹಿತಿ ನೀಡಿದರು.
ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ, ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್. ವಿಷ್ಣುವರ್ಧನ್, ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಕಿರಣ್ ಫಡ್ನೇಕರ್, ವಿವಿಧ ಸಂಘ-ಸಂಸ್ಥೆಯ ಪದಾಧಿಕಾರಿಗಳು, ವಿವಿಧ ತಾಲೂಕುಗಳ ತಹಶೀಲ್ದಾರ್‌ಗಳು, ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿಗಳು, ಜಿಲ್ಲಾ ಮಟ್ಟದ
ಅನುಷ್ಠಾನಾಧಿಕಾರಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.