ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಆರೋಪಿ ಪ್ರದೂಷ್ ಅವರನ್ನು ಮಾಫಿ ಸಾಕ್ಷಿಯಾಗಿ (Pardon Witness) ದಾಖಲಿಸುವ ಪ್ರಕ್ರಿಯೆಗೆ ಸೆಪ್ಟೆಂಬರ್ 28ರಂದು ದಿನಾಂಕ ನಿಗದಿಯಾಗಿದೆ.
ಪ್ರದೂಷ್ ಅವರನ್ನು ಮಾಫಿ ಸಾಕ್ಷಿಯಾಗಿ ಪರಿಗಣಿಸುವುದನ್ನು ಪ್ರಶ್ನಿಸಿ ನಟ ದರ್ಶನ್ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದರು. ಆದರೆ ಹೈಕೋರ್ಟ್ ಅರ್ಜಿಯನ್ನು ವಜಾಗೊಳಿಸಿದ ಬಳಿಕ, ಮಾಫಿ ಸಾಕ್ಷಿಯ ಹೇಳಿಕೆ ದಾಖಲಿಸಲು 59ನೇ ಸೆಷನ್ಸ್ ನ್ಯಾಯಾಲಯ ದಿನಾಂಕ ನಿಗದಿಪಡಿಸಿದೆ.
ಈ ಹಿನ್ನೆಲೆಯಲ್ಲಿ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಲು ನಿರ್ಧರಿಸಿರುವುದಾಗಿ ದರ್ಶನ್ ಪರ ವಕೀಲರು ವಿಚಾರಣಾ ನ್ಯಾಯಾಲಯಕ್ಕೆ ತಿಳಿಸಿದ್ದಾರೆ.
ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸುವ ಹಿನ್ನೆಲೆಯಲ್ಲಿ ಪ್ರದೂಷ್ ಅವರ ಮಾಫಿ ಸಾಕ್ಷಿ ಹೇಳಿಕೆ ದಾಖಲಿಸುವ ಪ್ರಕ್ರಿಯೆಯನ್ನು ಮುಂದೂಡಬೇಕು ಎಂದು ದರ್ಶನ್ ಪರ ವಕೀಲರು ಮನವಿ ಮಾಡಿದರು. ಆದರೆ ಈ ಮನವಿಯನ್ನು ನ್ಯಾಯಾಲಯ ತಿರಸ್ಕರಿಸಿದೆ.
ಸುಪ್ರೀಂ ಕೋರ್ಟ್ ವಿಚಾರಣೆಗೆ ಸಮಯ ನಿಗದಿ ಮಾಡಿದೆ ಎಂಬ ಕಾರಣಕ್ಕೆ ವಿಚಾರಣಾ ನ್ಯಾಯಾಲಯದ ಪ್ರಕ್ರಿಯೆಯನ್ನು ಮುಂದೂಡಲು ಸಾಧ್ಯವಿಲ್ಲ ಎಂದು ನ್ಯಾಯಾಲಯ ತಿಳಿಸಿದೆ. ಹೀಗಾಗಿ ಸೆಪ್ಟೆಂಬರ್ 28ರಂದು ಪ್ರದೂಷ್ ಅವರ ಮಾಫಿ ಸಾಕ್ಷಿ ಹೇಳಿಕೆ ದಾಖಲಿಸುವ ಪ್ರಕ್ರಿಯೆ ನಡೆಯುವ ಸಾಧ್ಯತೆ ಇದೆ.















