ಉಡುಪಿಯ ಕಲ್ಸಂಕ, ಕರಾವಳಿ, ಸಂತೆಕಟ್ಟೆ ಸಹಿತ ನಗರದ ಪ್ರಮುಖ ಜಂಕ್ಷನ್ ಗಳಲ್ಲಿ ವಿಪರೀತ ಸಂಚಾರ ದಟ್ಟನೆ ಉಂಟಾಗಿದ್ದು, ಇದರಿಂದ ಸಾರ್ವಜನಿಕರು ಬಹಳ ತೊಂದರೆ ಅನುಭವಿಸುತ್ತಿದ್ದಾರೆ. ಆದರೆ, ಸಂಚಾರಿ ಪೊಲೀಸರು ಟ್ರಾಫಿಕ್ ನಿಯಂತ್ರಿಸುವ ಬದಲು ಹೆಲ್ಮಟ್ ಹಾಕದ ವಾಹನ ಸವಾರರಿಂದ ದಂಡ ವಸೂಲು ಮಾಡುವ ಕಾರ್ಯದಲ್ಲಿ ನಿರತರಾಗಿದ್ದಾರೆ ಎಂದು ನಗರಸಭಾ ಸದಸ್ಯ ಪ್ರಭಾಕರ ಪೂಜಾರಿ ದೂರಿದರು.
ಗುರುವಾರ ನಡೆದ ಉಡುಪಿ ನಗರಸಭೆಯ ಸಾಮಾನ್ಯ ಸಭೆಯಲ್ಲಿ ಮಾತನಾಡಿದ ಅವರು, ಕಳೆದ ಮೂರ್ನಾಲ್ಕು ವಾರಗಳಿಂದ ಕಲ್ಸಂಕ ಜಂಕ್ಷನ್ ನಲ್ಲಿ ಪ್ರತಿದಿನ ವಿಪರೀತ ಸಂಚಾರ ದಟ್ಟನೆ ಉಂಟಾಗುತ್ತಿದೆ. ಇದರಿಂದ ಜನಸಾಮಾನ್ಯ ಬಹಳಷ್ಟು ತೊಂದರೆಯಾಗಿದೆ. ಶೀಘ್ರದಲ್ಲೇ ಇದಕ್ಕೆ ಪರಿಹಾರ ಕಲ್ಪಿಸಬೇಕು ಎಂದು ಒತ್ತಾಯಿಸಿದರು.
ಇದಕ್ಕೆ ಧ್ವನಿಗೂಡಿಸಿದ ಸ್ಥಾಯಿ ಸಮಿತಿ ಅಧ್ಯಕ್ಷ ಗಿರೀಶ್ ಅಂಚನ್, ಡಿಮಾರ್ಟ್ ಬಳಿ ರಸ್ತೆ ಮೇಲೆ ಆಟೊಗಳನ್ನು ನಿಲ್ಲಿಸಲಾಗುತ್ತಿದೆ. ಇದರಿಂದ ಬೇರೆ ವಾಹನಗಳ ಸಂಚಾರಕ್ಕೆ ಸಮಸ್ಯೆಯಾಗುತ್ತಿದೆ. ಡಿಮಾರ್ಟ್ ಒಳಗೆ ರಿಕ್ಷಾದವರಿಗೆ ಪಾರ್ಕಿಂಗ್ ವ್ಯವಸ್ಥೆ ಕಲ್ಪಿಸುವಂತೆ ಕ್ರಮಕೈಗೊಳ್ಳಬೇಕು ಎಂದು ಆಗ್ರಹಿಸಿದರು.