ಜಾತ್ರೆಗಳಿಗೆ ನಿರ್ಬಂಧ, ಮದುವೆಗೆ ಪಾಸ್ ಕಡ್ಡಾಯ

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ವೇಗವಾಗಿ ಹರಡುತ್ತಿದ್ದು, ಹೀಗಾಗಿ ಜಾತ್ರೆಗಳನ್ನು ನಿಷೇಧಿಸಲಾಗಿದೆ. ಒಂದು ವೇಳೆ ಜಾತ್ರೆಗಳು ನಡೆದರೆ, ಅದಕ್ಕೆ ಜಿಲ್ಲಾಧಿಕಾರಿಗಳೇ ಹೊಣೆ ಆಗುತ್ತಾರೆ ಎಂದು ಕಂದಾಯ ಸಚಿವ ಆರ್‌. ಅಶೋಕ ಖಡಕ್ ಎಚ್ಚರಿಕೆ ನೀಡಿದ್ದಾರೆ.

ಶನಿವಾರ ಕೋವಿಡ್‌ ಪರಿಸ್ಥಿತಿ ಕುರಿತು ಗೃಹ ಸಚಿವ ಬಸವರಾಜ ಬೊಮ್ಮಾಯಿ ಮತ್ತು ಆರೋಗ್ಯ ಸಚಿವ ಡಾ.ಕೆ. ಸುಧಾಕರ್‌ ಜೊತೆ ಜಿಲ್ಲಾಧಿಕಾರಿಗಳೊಂದಿಗೆ ವಿಡಿಯೊ ಸಂವಾದ ನಡೆಸಿದ ಬಳಿಕ ಸುದ್ದಿಗಾರರ ಜೊತೆ ಅವರು ಮಾತನಾಡಿದರು.

ಕೊರೊನಾ ನಿಯಂತ್ರಿಸಲು ಸರ್ಕಾರ ಘೋಷಿಸಿರುವ ಮಾರ್ಗಸೂಚಿಗಳನ್ನು ಜಿಲ್ಲಾಡಳಿತ ಕಡ್ಡಾಯವಾಗಿ ಜಾರಿಗೊಳಿಸಬೇಕು. ಮದುವೆ ಮನೆಗಳಲ್ಲಿ ಜನರನ್ನು ನಿಯಂತ್ರಿಸದಿದ್ದರೆ ಎಫ್‌ಐಆರ್‌ ದಾಖಲಿಸಲಾಗುವುದು. ಒಂದು ವೇಳೆ ಹೆಚ್ಚುವರಿ ಪಾಸ್‌ ನೀಡಿದರೆ ಅಂಥ ಕಲ್ಯಾಣ ಮಂಟಪಗಳ ಮಾಲೀಕರ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಹೇಳಿದರು.

ಮದುವೆಗೆ ಕಡ್ಡಾಯ ಅನುಮತಿ ಪಡೆಯಬೇಕು. ಕಲ್ಯಾಣ ಮಂಟಪ ಬುಕ್‌ ಮಾಡಲು ಜಿಲ್ಲಾಧಿಕಾರಿಗಳ ಅನುಮತಿ ಕಡ್ಡಾಯ. ಜಿಲ್ಲಾಡಳಿತ ನಿಗದಿತ ಸಂಖ್ಯೆಯ ಪಾಸ್‌ ವಿತರಿಸಲಿದೆ ಎಂದು ತಿಳಿಸಿದರು.