₹ 5,240 ಕೋಟಿ ಮೊತ್ತದ ಬಿಟ್ ಕಾಯಿನ್‌ ವರ್ಗಾವಣೆ: ರಣದೀಪ್‌ ಸುರ್ಜೇವಾಲಾ

ನವದೆಹಲಿ: ಕರ್ನಾಟಕದಲ್ಲಿ ನಡೆದಿರುವ ಬಹು ಕೋಟಿ ಮೌಲ್ಯದ ಬಿಟ್ ಕಾಯಿನ್ ಹಗರಣವನ್ನು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿಗಳ ನೇತೃತ್ವದಲ್ಲಿ ತನಿಖೆಗೆ ವಹಿಸಬೇಕು ಎಂದು ಕಾಂಗ್ರೆಸ್‌ ಪಕ್ಷವು ಕೇಂದ್ರ ಸರ್ಕಾರವನ್ನು ಆಗ್ರಹಿಸಿದೆ.

ಈ ಬಗ್ಗೆ ಶನಿವಾರ ಸುದ್ದಿಗೋಷ್ಠಿಯಲ್ಲಿ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯೂ ಆಗಿರುವ ಕರ್ನಾಟಕ ಉಸ್ತುವಾರಿ ರಣದೀಪ್‌ ಸುರ್ಜೇವಾಲಾ ಒತ್ತಾಯಿಸಿದರು. ಸ್ವತಂತ್ರ ಭಾರತದ 75 ವರ್ಷಗಳಲ್ಲಿ, ಅಂತರರಾಷ್ಟ್ರೀಯ ಮಟ್ಟದ ಆರ್ಥಿಕತೆಯನ್ನೇ ಬುಡಮೇಲು ಮಾಡಬಹುದಾದ ಅತಿ ದೊಡ್ಡ ಹಗರಣ ಇದಾಗಿದ್ದರೂ, ಈ ಕುರಿತು ಕೇಂದ್ರ ಸರ್ಕಾರವು ತಕ್ಷಣವೇ ಇಂಟರ್ ಪೋಲ್‌ಗೆ ಮಾಹಿತಿ ನೀಡಿರಲಿಲ್ಲ ಎಂದು ಆರೋಪಿಸಿದರು.

ಬಿಟ್ ಕಾಯಿನ್ ಪ್ರಕರಣದ ತನಿಖೆ ನಡೆಸಿರುವ ಹಾಗೂ ಆರೋಪಿಗಳನ್ನು ಬಂಧಿಸಿರುವ ಪೊಲೀಸ್ ಅಧಿಕಾರಿಗಳನ್ನು ಏಕಾಏಕಿ ವರ್ಗಾವಣೆ ಮಾಡಲಾಗಿದೆ. ಒಟ್ಟು ₹ 5,240 ಕೋಟಿ ಮೊತ್ತದ ಬಿಟ್ ಕಾಯಿನ್‌ಗಳನ್ನು ಎರಡು ದಿನಗಳಲ್ಲಿ  ಬೇರೆಯವರ ಅಕೌಂಟ್‌ಗಳಿಗೆ ವರ್ಗಾಯಿಸಿಕೊಳ್ಳಲಾಗಿದೆ ಎಂದು ಅವರು ದೂರಿದರು.

ಈ ಮೊತ್ತವನ್ನು ಯಾರ ಖಾತೆಗೆ ವರ್ಗಾಯಿಸಲಾಗಿದೆ ಎಂಬ ಕುರಿತೂ ತನಿಖೆ  ನಡೆಸುವ ಬದಲು, ‘ಬಿಟ್ ಕಾಯಿನ್ ಹಗರಣದ ಬಗ್ಗೆ ತಲೆ ಕೆಡಿಸಿಕೊಳ್ಳಬೇಡಿ’  ಎಂದು ಎರಡು ದಿನಗಳ ಹಿಂದಷ್ಟೇ ಪ್ರಧಾನಿಯವರೇ ಬೊಮ್ಮಾಯಿ ಅವರಿಗೆ ಅಭಯ ನೀಡಿರುವುದು ಹಾಸ್ಯಾಸ್ಪದ ಎಂದು ಅವರು ಟೀಕಿಸಿದರು.

ಅಂತರರಾಷ್ಟ್ರೀಯ ಮಟ್ಟದ ಈ ಹಗರಣವನ್ನು ಸುಪ್ರೀಂ ಕೋರ್ಟ್‌ನ ಹಾಲಿ ನ್ಯಾಯಮೂರ್ತಿಗಳ ನೇತೃತ್ವದ ಸಮಿತಿ ಹಾಗೂ, ಇಂಟರ್‌ಪೋಲ್ ಮತ್ತು ಭಾರತೀಯ ರಿಸರ್ವ್‌ ಬ್ಯಾಂಕ್‌ (ಆರ್‌ಬಿಐ) ಅಧಿಕಾರಿಗಳನ್ನು ಒಳಗೊಂಡ ತಂಡಕ್ಕೆ ತನಿಖೆಗೆ ವಹಿಸಬೇಕು ಎಂದು ಅವರು ಆಗ್ರಹಿಸಿದರು.

ಹಗರಣದಲ್ಲಿ ಕಾಂಗ್ರೆಸ್ ಮುಖಂಡರು ಮತ್ತು ಶಾಸಕರ ಮಕ್ಕಳು ಭಾಗಿಯಾಗಿದ್ದಾರೆ ಎಂದು ಬೊಮ್ಮಾಯಿ ಸೇರಿದಂತೆ ಬಿಜೆಪಿಯ ಅನೇಕ ಮುಖಂಡರು ಆರೋಪಿಸಿದ್ದಾರೆ. ಹಾಗಾದರೆ, ಅವರ ವಿರುದ್ಧ ಏಕೆ ಕ್ರಮ ಕೈಗೊಂಡಿಲ್ಲ? ಎಂದು ಪ್ರಶ್ನಿಸಿದರು.