ಗ್ರಾಮೀಣ ಪ್ರದೇಶದ ಸ್ವಚ್ಛತೆಯಲ್ಲಿ ರಾಜ್ಯದಲ್ಲೇ ಅಗ್ರಸ್ಥಾನ ಪಡೆದ ಉಡುಪಿ; ಸ್ವಚ್ಛತಾ ಸೇನಾನಿಗಳ ಪಾತ್ರ ಅನನ್ಯ : ಪ್ರಸನ್ನ ಹೆಚ್

ಉಡುಪಿ: ಗ್ರಾಮೀಣ ಪ್ರದೇಶದ ಸ್ವಚ್ಛತೆಯಲ್ಲಿ ಉಡುಪಿ ಜಿಲ್ಲೆಯು ರಾಜ್ಯದಲ್ಲೇ ಪ್ರಥಮ ಸ್ಥಾನ ಪಡೆದಿದ್ದು, ಈ ಸ್ಥಾನ ಪಡೆಯುವಲ್ಲಿ ಜಿಲ್ಲೆಯ ಗ್ರಾಮೀಣ ಭಾಗದ ಸ್ವಚ್ಛತಾ ಸೇನಾನಿಗಳ ಪಾತ್ರ ಅತ್ಯಂತ ಮಹತ್ವವಾಗಿದ್ದು, ಜಿಲ್ಲೆಯ ಈ ಸಾಧನೆಯನ್ನು ನಿರಂತರವಾಗಿ ಮುಂದುವರೆಸುವಂತೆ ಗ್ರಾಮೀಣ ಸ್ವಚ್ಛತಾ ಕಾರ್ಯಕರ್ತರಿಗೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಸನ್ನ ಹೆಚ್. ಹೇಳಿದರು.

ಅವರು ಬುಧವಾರ ಜಿಲ್ಲಾ ಪಂಚಾಯತ್ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಉಡುಪಿ ಇವರ ವತಿಯಿಂದ ಅಜ್ಜರಕಾಡು ಮಹಾತ್ಮಾಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ ಸ್ವಚ್ಛ ಸಂಭ್ರಮ- ಸ್ವಚ್ಛತಾ ಕಾರ್ಯಕರ್ತರ ಕ್ರೀಡಾಕೂಟ ಉದ್ಘಾಟಿಸಿ ಮಾತನಾಡಿದರು.

ಸ್ವಚ್ಛತೆ ಮತ್ತು ಆರೋಗ್ಯಕ್ಕೆ ನಿಕಟ ಸಂಬಂಧವಿದ್ದು, ಗ್ರಾಮೀಣ ಭಾಗದ ಸಾರ್ವಜನಿಕರ ಆರೋಗ್ಯ ಕಾಪಾಡುವಲ್ಲಿ ಗ್ರಾಮೀಣ ಸ್ಚಚ್ಛತಾ ಕಾರ್ಯಕರ್ತರು ಅತ್ಯುತ್ತಮವಾಗಿ ಕಾರ್ಯನಿರ್ವಹಿಸುತ್ತಿದ್ದು, ಸ್ವಚ್ಛತೆಯ ಕುರಿತಂತೆ ಸಾರ್ವಜನಿಕರಲ್ಲಿ ಹೊಸ ಪರಿಕಲ್ಪನೆ ಮೂಡಿಸಿದ್ದಾರೆ. ಇವರ ಅಗತ್ಯ ಬೇಡಿಕೆಗಳ ಬಗ್ಗೆ ಹಾಗೂ ಅಪಘಾತ ವಿಮೆ ಸೇರಿದಂತೆ, ಆರೋಗ್ಯ ವಿಮೆ ಸೌಲಭ್ಯ ಒದಗಿಸುವ ಕುರಿತಂತೆ ಪರಿಶೀಲನೆ ನಡೆಸಲಾಗುತ್ತಿದೆ ಎಂದರು.

ರಾಜ್ಯಮಟ್ಟದ ಸರ್ವೋತ್ತಮ ಸೇವಾ ಪ್ರಶಸ್ತಿ ಪಡೆದ ಜಿಲ್ಲಾ ಪಂಚಾಯತ್ ಮುಖ್ಯ ಯೋಜನಾಧಿಕಾರಿ ಶ್ರೀನಿವಾಸ ರಾವ್ ಅವರನ್ನು ಸನ್ಮಾನಿಸಲಾಯಿತು.

ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಡಾ.ರೋಶನ್ ಕುಮಾರ್ ಶೆಟ್ಟಿ ಉಪಸ್ಥಿತರಿದ್ದರು.

ಮಾಧವಿ ಸ್ವಾಗತಿಸಿದರು. ರಘುರಾಮ್ ನಿರೂಪಿಸಿದರು.