ಮಂಗಳೂರು: ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿರುವ ಸಹಕಾರ ಸಂಘಗಳಿಗೆ ನೀಡಲಾಗುವ ‘ಸಹಕಾರ ಮಾಣಿಕ್ಯ’ ಹಾಗೂ ಉತ್ತಮ ಸಹಕಾರ ಸಂಘ ಪ್ರಶಸ್ತಿಗಳಿಗೆ ವಿವಿಧ ಸಂಘಗಳನ್ನು ಆಯ್ಕೆ ಮಾಡಲಾಗಿದೆ.
ನವೆಂಬರ್ 20ರಂದು ಮಂಗಳೂರಿನ ಕರಾವಳಿ ಉತ್ಸವ ಮೈದಾನದಲ್ಲಿ ನಡೆಯುವ ರಾಜ್ಯಮಟ್ಟದ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷ ಡಾ. ಎಂ.ಎನ್. ರಾಜೇಂದ್ರ ಕುಮಾರ್ ತಿಳಿಸಿದ್ದಾರೆ.
ಉಭಯ ಜಿಲ್ಲೆಗಳಿಂದ ತಲಾ ಒಂದು ಕೃಷಿ ಪತ್ತಿನ ಸಹಕಾರ ಸಂಘವನ್ನು ‘ಸಹಕಾರ ಮಾಣಿಕ್ಯ’ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯಿಂದ ಪುತ್ತೂರಿನ ಆಲಂಕಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಹಾಗೂ ಉಡುಪಿ ಜಿಲ್ಲೆಯಿಂದ ಕುಂದಾಪುರದ ಕಂಬದಕೋಣೆ ರೈತರ ಸೇವಾ ಸಹಕಾರಿ ಸಂಘ ಪ್ರಶಸ್ತಿಗೆ ಆಯ್ಕೆಯಾಗಿವೆ.
ವಿವಿಧೋದ್ದೇಶ ಸಹಕಾರ ಸಂಘಗಳ ವಿಭಾಗದಲ್ಲಿ ಮಂಗಳೂರಿನ ಒಡಿಯೂರು ವಿವಿಧೋದ್ದೇಶ ಸೌಹಾರ್ದ ಸಹಕಾರಿ ಸಂಘ ಮತ್ತು ಎಸ್.ಕೆ. ಗೋಲ್ಡ್ ಸ್ಮಿತ್ ಇಂಡಸ್ಟ್ರಿಯಲ್ ಕೋ-ಆಪರೇಟಿವ್ ಸೊಸೈಟಿ ಪ್ರಶಸ್ತಿ ಪಡೆದುಕೊಂಡಿವೆ.
ಉತ್ತಮ ಕೃಷಿ ಪತ್ತಿನ ಸಹಕಾರಿ ಸಂಘಗಳ ವಿಭಾಗದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಿಂದ ಮಂಗಳೂರಿನ ಕಾವೂರು ವ್ಯವಸಾಯ ಸೇವಾ ಸಹಕಾರಿ ಸಂಘ ಹಾಗೂ ಉಡುಪಿ ಜಿಲ್ಲೆಯಿಂದ ಮಂದಾರ್ತಿ ವ್ಯವಸಾಯ ಸೇವಾ ಸಹಕಾರಿ ಸಂಘ ಆಯ್ಕೆಯಾಗಿವೆಯ್ಯ
ಉತ್ತಮ ಮಹಿಳಾ ಸಹಕಾರಿ ಸಂಘ ಪ್ರಶಸ್ತಿಗೆ ದಕ್ಷಿಣ ಕನ್ನಡ ಜಿಲ್ಲೆಯಿಂದ ಪುತ್ತೂರು ಮಹಿಳಾ ಸಹಕಾರಿ ಸಂಘ ಹಾಗೂ ಉಡುಪಿ ಜಿಲ್ಲೆಯಿಂದ ಕುಂದಾಪುರದ ಶ್ರೀ ಸಾಯಿ ಮಹಿಳಾ ಆರ್ಥಿಕ ಸೇವಾ ಸಹಕಾರಿ ಸಂಘ ಆಯ್ಕೆಯಾಗಿವೆ.
ಉತ್ತಮ ಮೀನುಗಾರಿಕಾ ಸಹಕಾರಿ ಸಂಘಗಳ ವಿಭಾಗದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಿಂದ ಮಂಗಳೂರು ಟ್ರಾಲ್ ಬೋಟ್ ಮೀನುಗಾರರ ಪ್ರಾಥಮಿಕ ಸಹಕಾರ ಸಂಘ ಹಾಗೂ ಉಡುಪಿ ಜಿಲ್ಲೆಯಿಂದ ಮೀನು ಮಾರಾಟಗಾರರ ವಿವಿಧೋದ್ದೇಶ ಸೌಹಾರ್ದ ಸಹಕಾರಿ ಸಂಘ ಪ್ರಶಸ್ತಿಗೆ ಆಯ್ಕೆಯಾಗಿವೆ.















