ಜ. 26 ರಿಂದ ಫೆಬ್ರವರಿ 23 ರ ವರೆಗೆ ಸಂವಿಧಾನ ಜಾಗೃತಿ ಜಾಥಾ: ಡಾ. ಕೆ ವಿದ್ಯಾಕುಮಾರಿ

ಉಡುಪಿ: ಜನ ಸಾಮಾನ್ಯರಲ್ಲಿ ಸಂವಿಧಾನದ ಕುರಿತು ಜಾಗೃತಿ ಮೂಡಿಸುವ ಸಂವಿಧಾನ ಜಾಗೃತಿ ಜಾಥಾ ಕಾರ್ಯಕ್ರಮವು ಜಿಲ್ಲೆಯಾದ್ಯಂತ ಜನವರಿ 26 ರಿಂದ ಫೆಬ್ರವರಿ 23 ರ ವರೆಗೆ ಸಂಚರಿಸಲಿದೆ ಎಂದು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಹೇಳಿದರು.

ಅವರು ಗುರುವಾರ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಸಂವಿಧಾನ ಜಾಗೃತಿ ಜಾಥಾ ಕಾರ್ಯಕ್ರಮ ಕುರಿತ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು.

ನಮ್ಮ ದೇಶದ ಸಂವಿಧಾನ ಕುರಿತು ಪ್ರತಿಯೊಬ್ಬರಿಗೂ ಮಾಹಿತಿ ಹೊಂದಬೇಕು ಎಂಬ ಉದ್ದೇಶದಿಂದ ಸಂವಿಧಾನ ಜಾಗೃತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳುವ ಮೂಲಕ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲಾಗುತ್ತಿದೆ. ಸಂವಿಧಾನ ದಿನಾಚರಣೆಯ ಪ್ರಯುಕ್ತ ಸಂವಿಧಾನ ಜಾಗೃತಿ ಜಾಥಾವು ಜಿಲ್ಲೆಯ ಪ್ರತಿಯೊಂದು ಗ್ರಾಮ ಪಂಚಾಯತಿ ಹಾಗೂ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಜರುಗಲಿದೆ ಎಂದರು.

ಜಾಗೃತಿ ಜಾಥಾ ಸ್ಥಬ್ಧಚಿತ್ರಕ್ಕೆ ಜನವರಿ 26 ರಂದು ಜಿಲ್ಲಾ ಉಸ್ತುವಾರಿ ಸಚಿವರು ಅಜ್ಜರಕಾಡು ಮಹತ್ಮಾಗಾಂಧಿ ಕ್ರೀಡಾಂಗಣದಲ್ಲಿ ನಡೆಯಲಿರುವ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಚಾಲನೆ ನೀಡಲಿದ್ದಾರೆ. ಸ್ಥಬ್ಧಚಿತ್ರಗಳು ಜಿಲ್ಲೆಯ ಎರಡು ವಿಭಾಗವಾಗಿ 155 ಗ್ರಾಮ ಪಂಚಾಯತಿಗಳಲ್ಲಿ ಸಂಚರಿಸಲಿದೆ ಎಂದರು.

ಗ್ರಾಮ ಪಂಚಾಯತಿ ಮಟ್ಟದಲ್ಲಿ ಜಾಗೃತಿ ಕಾರ್ಯಕ್ರಮಗಳು ನಡೆಯಲಿದ್ದು, ಕಾರ್ಯಕ್ರಮದಲ್ಲಿ ಸಂವಿಧಾನ ಕುರಿತು ಉಪನ್ಯಾಸಕರಿಂದ ಭಾಷಣ ನಡೆಯಲಿದೆ ಹಾಗೂ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಸಂವಿಧಾನ ಕುರಿತು ಪ್ರಬಂಧ ಸ್ಫರ್ಧೆ, ಚಿತ್ರಕಲೆ ಹಾಗೂ ಭಾಷಣ ಸ್ಫರ್ಧೆ ನಡೆಯಲಿದೆ. ವಿಜೇತರಿಗೆ ಗ್ರಾಮ ಪಂಚಾಯತಿ ಮೂಲಕ ಬಹುಮಾನ ವಿತರಣೆ ನಡೆಯಲಿದೆ ಎಂದರು.

ಸ್ಥಬ್ಧಚಿತ್ರದ ಮೆರವಣಿಗೆಯೊಂದಿಗೆ ಕಲಾ ತಂಡಗಳು ಪಾಲ್ಗೊಳ್ಳಲಿದ್ದು, ಟ್ಯಾಬ್ಲೋದಲ್ಲಿ ಭಾರತದ ಸಂವಿಧಾನ ಪೀಠಿಕೆ, ಡಾ.ಬಿ.ಆರ್ ಅಂಬೇಡ್ಕರ್ ಪರಿಕಲ್ಪನೆ ಹಾಗೂ ಪುತ್ಥಳಿ, ಬಸವಣ್ಣವರ ವಚನಗಳು, ಜಿಲ್ಲೆಯ ಸ್ಥಳೀಯ ಐತಿಹಾಸಿಕ ವ್ಯಕ್ತಿಗಳು, ಸಾಹಿತ್ಯ, ಕಲೆ, ಸಂಸ್ಕೃತಿ ಹಾಗೂ ಸರ್ಕಾರದ ಐದು ಯೋಜನೆಗಳ ವಿವರ ಇರಲಿದೆ ಹಾಗೂ ಇದೇ ಸಂದರ್ಭದಲ್ಲಿ ಸಂವಿಧಾನ ಜಾಗೃತಿಯ
ಕರಪತ್ರಗಳನ್ನು ಪ್ರತಿಯೊಬ್ಬರಿಗೂ ವಿತರಿಸಲಾಗುವುದು ಎಂದರು.

ಜಾಥಾ ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ, ಶಿಸ್ತು ಬದ್ಧವಾಗಿ ನಡೆಸಲು ತಾಲೂಕು ಮಟ್ಟದಲ್ಲಿ ತಹಶೀಲ್ದಾರ್ ನೇತೃತ್ವದಲ್ಲಿ ಸಭೆಯನ್ನು ನಡೆಸಬೇಕು. ಪ್ರತೀ ಗ್ರಾಮ ಪಂಚಾಯತಿಗೆ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳನ್ನು ನೋಡೆಲ್ ಅಧಿಕಾರಿಗಳನ್ನಾಗಿ ನೇಮಿಸುವುದರೊಂದಿಗೆ ಜಾಥಾ ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಮಾಡಿ, ಯಶಸ್ವಿಗೊಳಿಸಬೇಕು ಎಂದರು.

ಗ್ರಾಮ ಪಂಚಾಯತಿಯಲ್ಲಿ ನಡೆಯುವ ಜಾಥಾ ಕಾರ್ಯಕ್ರಮದಲ್ಲಿ ಸ್ಥಳೀಯ ಸಂಸ್ಥೆಗಳ ಪ್ರತಿನಿಧಿಗಳು, ಅಧಿಕಾರಿಗಳು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ಮನವಿ ಮಾಡಿದರು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಮಮತಾ ದೇವಿ ಜಿ.ಎಸ್, ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ರಾಜು ಮೊಗವೀರ, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕಿ ಅನಿತಾ ವಿ ಮಡ್ಲೂರು, ವಿವಿಧ ಇಲಾಖೆಯ ಜಿಲ್ಲಾ ಮಟ್ಟದ ಅನುಷ್ಠಾನಾಧಿಕಾರಿಗಳು, ತಾಲೂಕಿನ ತಹಶೀಲ್ದಾರ್‌ಗಳು, ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗಳು, ಸಮಿತಿಯ ಸದಸ್ಯರುಗಳು, ವಿವಿಧ ಸಂಘಟನೆಯ
ಪದಾಧಿಕಾರಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.