ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ ನಿಷೇಧ ಪ್ರಕರಣ: ತೀರ್ಪು ಕಾಯ್ದಿರಿಸಿದ ಸುಪ್ರೀಂ ಕೋರ್ಟ್

ನವದೆಹಲಿ: ರಾಜ್ಯದ ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ ಮೇಲಿನ ನಿಷೇಧವನ್ನು ತೆಗೆದುಹಾಕಲು ನಿರಾಕರಿಸಿದ ಕರ್ನಾಟಕ ಹೈಕೋರ್ಟ್ ತೀರ್ಪನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗಳ ತೀರ್ಪನ್ನು ಸುಪ್ರೀಂ ಕೋರ್ಟ್ ಗುರುವಾರ ಕಾಯ್ದಿರಿಸಿದೆ. ನ್ಯಾಯಮೂರ್ತಿಗಳಾದ ಹೇಮಂತ್ ಗುಪ್ತಾ ಮತ್ತು ಸುಧಾಂಶು ಧುಲಿಯಾ ಅವರ ಪೀಠವು ತನ್ನ ತೀರ್ಪನ್ನು ಕಾಯ್ದಿರಿಸಿದೆ.

10 ದಿನಗಳ ಕಾಲ ನಡೆದ ವಾದದಲ್ಲಿ ಅರ್ಜಿದಾರರ ಪರ 21 ವಕೀಲರು ಭಾಗಿಯಾಗಿದ್ದು, ಪ್ರತಿವಾದಿಗಳ ಪರ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ, ಹೆಚ್ಚುವರಿ ಸಾಲಿಸಿಟರ್ ಜನರಲ್ ಕೆ.ಎಂ.ನಟರಾಜ್, ಕರ್ನಾಟಕ ಅಡ್ವೊಕೇಟ್ ಜನರಲ್ ಪ್ರಭುಲಿಂಗ ನಾವಡಗಿ ವಾದ ಮಂಡಿಸಿದ್ದರು.

ರಾಜ್ಯ ಸರ್ಕಾರವು ಫೆಬ್ರವರಿ 5, 2022 ರ ಆದೇಶದ ಮೂಲಕ ಶಾಲೆ ಮತ್ತು ಕಾಲೇಜುಗಳಲ್ಲಿ ಸಮಾನತೆ, ಸಮಗ್ರತೆ ಮತ್ತು ಸಾರ್ವಜನಿಕ ಸುವ್ಯವಸ್ಥೆಗೆ ಧಕ್ಕೆ ತರುವ ಬಟ್ಟೆಗಳನ್ನು ಧರಿಸುವುದನ್ನು ನಿಷೇಧಿಸಿದೆ. ಮಾರ್ಚ್ 15 ರಂದು, ಉಡುಪಿಯ ಸರ್ಕಾರಿ ಪದವಿ ಪೂರ್ವ ಬಾಲಕಿಯರ ಕಾಲೇಜಿನ ಮುಸ್ಲಿಂ ವಿದ್ಯಾರ್ಥಿನಿಯರ ವಿಭಾಗವು ತರಗತಿಯೊಳಗೆ ಹಿಜಾಬ್ ಧರಿಸಲು ಅನುಮತಿ ನೀಡುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿತ್ತು, ಇದು ಇಸ್ಲಾಮಿಕ್ ನಂಬಿಕೆಯ ಅಗತ್ಯ ಧಾರ್ಮಿಕ ಆಚರಣೆಯ ಭಾಗವಲ್ಲ ಎಂದು ಕೋರ್ಟ್ ತನ್ನ ಆದೇಶದಲ್ಲಿ ಹೇಳಿತ್ತು.

ಶಾಲಾ-ಕಾಲೇಜುಗಳ ಸಮವಸ್ತ್ರದ ನಿಯಮಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುವಂತೆ ನಿರ್ದೇಶಿಸುವ ಕರ್ನಾಟಕ ಸರ್ಕಾರದ ಆದೇಶವನ್ನು ಎತ್ತಿಹಿಡಿದಿರುವ ಕರ್ನಾಟಕ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ವಿವಿಧ ಅರ್ಜಿದಾರರು ಸುಪ್ರೀಂ ಕೋರ್ಟ್‌ ಮೊರೆ ಹೋಗಿದ್ದಾರೆ.