ಬೆಂಗಳೂರು: ಕೋವಿಡ್ ಹಿನ್ನೆಲೆಯಲ್ಲಿ ಈ ಬಾರಿ ದ್ವಿತೀಯ ಪಿಯುಸಿ ಪರೀಕ್ಷೆಯನ್ನು ಸರ್ಕಾರ ರದ್ದುಗೊಳಿಸಿತ್ತು. ಇದೀಗ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಫಲಿತಾಂಶವನ್ನು ಜುಲೈ ಎರಡನೇ ವಾರದಲ್ಲಿ ಪ್ರಕಟಿಸುತ್ತೇವೆ ಎಂದು ಪ್ರೌಢ ಮತ್ತು ಪ್ರಾಥಮಿಕ ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಹೇಳಿದ್ದಾರೆ.
ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜುಲೈ 30ರ ಒಳಗೆ ದ್ವಿತೀಯ ಪಿಯುಸಿಯ ಫಲಿತಾಂಶವನ್ನು ಪ್ರಕಟ ಮಾಡಬೇಕು ಎಂದು ಸುಪ್ರೀಂ ಕೋರ್ಟ್ ಸೂಚನೆ ನೀಡಿದೆ. ಹೀಗಾಗಿ ಜುಲೈ ಎರಡನೇ ವಾರದಲ್ಲಿ ಫಲಿತಾಂಶ ಪ್ರಕಟ ಮಾಡಲಿದ್ದೇವೆ ಎಂದರು.
ಯಾವುದೇ ವಿದ್ಯಾರ್ಥಿಗೂ ಅನ್ಯಾಯವಾಗದ ರೀತಿಯಲ್ಲಿ ಫಲಿತಾಂಶ ಬರಲಿದೆ. ತಜ್ಞರು ಸೂಚಿಸಿದ ಮಾನದಂಡದ ಆಧಾರದಲ್ಲಿ ಫಲಿತಾಂಶ ಪ್ರಕಟವಾಗಲಿದ್ದು, ಈ ಫಲಿತಾಂಶದಿಂದ ವಿದ್ಯಾರ್ಥಿಗೆ ತೃಪ್ತಿಯಾಗದಿದ್ದರೆ ಅಂಥಾ ವಿದ್ಯಾರ್ಥಿಗೆ ಮತ್ತೆ ಪರೀಕ್ಷೆ ಬರೆಯಲು ಅವಕಾಶ ನೀಡಲಾಗುತ್ತದೆ ಎಂದರು.
ಕೋವಿಡ್ ಹಿನ್ನೆಲೆಯಲ್ಲಿ ಈ ಬಾರಿ ರಾಜ್ಯ ಪಿಯುಸಿ ಪರೀಕ್ಷೆಯನ್ನು ರದ್ದುಗೊಳಿಸಲಾಗಿತ್ತು. ಪ್ರಥಮ ಪಿಯುಸಿ ಮತ್ತು ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಪಡೆದ ಅಂಕಗಳನ್ನು ಪರಿಗಣಿಸಿ ಫಲಿತಾಂಶ ಪ್ರಕಟಿಸಲಾಗುತ್ತದೆ.
















