ಮೇಲ್ಬರ್ನ್: ಇಲ್ಲಿನ ಕ್ರೀಡಾಂಗಣದಲ್ಲಿ ನಡೆಯುತ್ತಿದ್ದ ಆಸ್ಟ್ರೇಲಿಯಾ ವಿರುದ್ಧದ ಎರಡನೇ ಟೆಸ್ಟ್ ನಲ್ಲಿ ಟೀಂ ಇಂಡಿಯಾ 8 ವಿಕೆಟ್ ಗಳಿಂದ ಭರ್ಜರಿ ಗೆಲುವು ಸಾಧಿಸಿದೆ. ಈ ಮೂಲಕ ನಾಲ್ಕು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ 1-1 ಅಂತರದಿಂದ ಸಮಬಲ ಸಾಧಿಸಿದೆ.
ನಾಲ್ಕನೇ ದಿನದಾಟದ ಅಂತಿಮ ಇನ್ನಿಂಗ್ಸ್ ನಲ್ಲಿ 70 ರನ್ ಗಳ ಗೆಲುವಿನ ಗುರಿ ಬೆನ್ನಟ್ಟಿದ್ದ ಭಾರತಕ್ಕೆ ಆರಂಭದಲ್ಲೇ ಮಯಾಂಕ್ ಅಗರ್ ವಾಲ್ (5) ಮತ್ತು ಚೇತೇಶ್ವರ ಪೂಜಾರ (3) ರನ್ ಗಳಿಗೆ ಓಟ್ ಆಗುವ ಮೂಲಕ ಆರಂಭಿಕ ಆಘಾತ ಎದುರಾಗಿತ್ತು.
ಆದರೆ, ಯುವ ಬ್ಯಾಟ್ಸ್ ಮನ್ ಶುಭ್ಮನ್ ಗಿಲ್ 35 ಮತ್ತು ನಾಯಕ ಅಜಿಂಕ್ಯ ರಹಾನೆ 27 ರನ್ ಗಳಿಸುವ ಮೂಲಕ ತಂಡವನ್ನು ಗೆಲುವಿನ ದಡ ಸೇರಿಸಿದರು. 15.5 ಓವರ್ ಗಳಲ್ಲಿ ಎರಡು ವಿಕೆಟ್ ನಷ್ಟಕ್ಕೆ ಭಾರತ ಗೆಲುವು ದಾಖಲಿಸಿತು.
ಮೆಲ್ಬರ್ನ್ ಅಂಗಳದಲ್ಲಿ ಉತ್ತಮ ಬ್ಯಾಟಿಂಗ್ ಪ್ರದರ್ಶಿಸಿದ ಟೀಂ ಇಂಡಿಯಾ ನಾಯಕ ಅಜಿಂಕ್ಯ ರಹಾನೆ ಪಂದ್ಯ ಪುರುಷೋತ್ತಮ ಪ್ರಶಸ್ತಿಗೆ ಭಾಜನರಾಗಿದ್ದಾರೆ.












