ಉಡುಪಿ: ಇದೇ ಏಪ್ರಿಲ್ 28 ರಿಂದ ಮೇ 18 ರ ವರೆಗೆ 2021ನೇ ಸಾಲಿನ ದ್ವಿತೀಯ ಪಿಯುಸಿ ಪ್ರಾಯೋಗಿಕ ಪರೀಕ್ಷೆಗಳನ್ನು ನಡೆಸಲು ಪದವಿ ಪೂರ್ವ ಶಿಕ್ಷಣ ಇಲಾಖೆಯ ಎಲ್ಲಾ ಉಪ ನಿರ್ದೇಶಕರುಗಳಿಗೆ ಪದವಿ ಪೂರ್ವ ಶಿಕ್ಷಣ ಇಲಾಖೆಯ ನಿರ್ದೇಶಕರು ಸುತ್ತೋಲೆ ಹೊರಡಿಸಿದ್ದಾರೆ.
ಪ್ರಾಯೋಗಿಕ ಪರೀಕ್ಷೆಗಳನ್ನು ವಿದ್ಯಾರ್ಥಿಗಳು ವ್ಯಾಸಂಗ ಮಾಡುವ ಕಾಲೇಜುಗಳಲ್ಲಿಯೇ ನಡೆಸಲು ತೀರ್ಮಾನಿಸಿರುವುದರಿಂದ ವಿದ್ಯಾರ್ಥಿಗಳಿಗೆ ಈ ಬಗ್ಗೆ ಮಾಹಿತಿ ತಲುಪಿಸಲು ಕ್ರಮ ಕೈಗೊಳ್ಳುವುದು. ಯಾವುದೇ ವಿದ್ಯಾರ್ಥಿ ಪರೀಕ್ಷೆಯಿಂದ ವಂಚಿತರಾದರೆ ಇದಕ್ಕೆ ಪ್ರಾಂಶುಪಾಲರೇ ನೇರ ಹೊಣೆಗಾರರಾಗಿರುತ್ತಾರೆ ಎಂದು ಎಚ್ಚರಿಕೆ ನೀಡಿದ್ದಾರೆ.
ಪ್ರಾಯೋಗಿಕ ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಯಿಂದ ಕೋವಿಡ್ ರಿಪೋರ್ಟ್ ಪಡೆಯಬಾರದು. ಕಾಲೇಜಿಗೆ ಪರೀಕ್ಷೆ ಬರೆಯಲು ಬರುವ ವಿದ್ಯಾರ್ಥಿಗಳ ದೇಹದ ಉಷ್ಣತೆ ಪರೀಕ್ಷಿಸಿ ಒಳಗೆ ಪ್ರವೇಶ ನೀಡಬೇಕು. ಪ್ರತಿ ದಿನ ಪರೀಕ್ಷೆ ಮುಗಿದ ನಂತರ ತಮಗೆ ನಿಯೋಜಿಸಿದ ಪರೀಕ್ಷಾ ಕೇಂದ್ರದಲ್ಲಿ ಆನ್ ಲೈನ್ ಮೂಲಕ ಅಂಕಗಳನ್ನು ನಮೂದಿಸಲು ಆಯಾ ಕಾಲೇಜಿನ ಪ್ರಾಂಶುಪಾಲರಿಗೆ ಸೂಕ್ತ ಮಾರ್ಗದರ್ಶನ ನೀಡಬೇಕು ಎಂದು ಸೂಚನೆ ನೀಡಿದ್ದಾರೆ.