ಮೂಡುಶೆಡ್ಡೆಯಲ್ಲಿ ಚುನಾವಣೋತ್ತರ ಗಲಭೆ: ಮಂಗಳೂರು ಕಮಿಷನರೇಟ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ

ಮಂಗಳೂರು: ಮೂಡುಶೆಡ್ಡೆಯಲ್ಲಿ ಅಹಿತಕರ ಘಟನೆ ನಡೆದ ಹಿನ್ನೆಲೆಯಲ್ಲಿ ಮಂಗಳೂರು ಕಮಿಷನರೇಟ್ ವ್ಯಾಪ್ತಿಯ ಐದು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಸಿಆರ್‌ಪಿಸಿ ಸೆಕ್ಷನ್ 144 ರ ಅಡಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಬಜ್ಪೆ, ಕಾವೂರು, ಮೂಡುಬಿದಿರೆ, ಸುರತ್ಕಲ್ ಮತ್ತು ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮೇ 14 ರ ಬೆಳಿಗ್ಗೆ 6 ಗಂಟೆಯವರೆಗೆ ನಿಷೇಧಾಜ್ಞೆ ಜಾರಿಯಲ್ಲಿರುತ್ತದೆ ಎಂದು ಡಿಸಿಪಿ (ಕಾನೂನು ಮತ್ತು ಸುವ್ಯವಸ್ಥೆ) ಅಂಶುಕುಮಾರ್ ತಿಳಿಸಿದ್ದಾರೆ.

ಬುಧವಾರ ತಡರಾತ್ರಿ ಕಾಂಗ್ರೆಸ್ ಮತ್ತು ಬಿಜೆಪಿ ಕಾರ್ಯಕರ್ತರ ನಡುವೆ ಮಾರಾಮಾರಿ ನಡೆದಿದ್ದು, ಕಲ್ಲು ತೂರಾಟ ನಡೆದಿದೆ. ಪೊಲೀಸರು ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ. ಪರಿಸ್ಥಿತಿ ನಿಯಂತ್ರಣದಲ್ಲಿದೆ ಎಂದು ಪೊಲೀಸ್ ಕಮಿಷನರ್ ಕುಲದೀಪ್ ಕುಮಾರ್ ಆರ್ ಜೈನ್ ತಿಳಿಸಿದ್ದಾರೆ.

ಮೂಡುಬಿದಿರೆ ಕಾಂಗ್ರೆಸ್ ಅಭ್ಯರ್ಥಿ ಮಿಥುನ್ ರೈ ಅವರ ಕಾರಿನ ಮೇಲೆ ದುಷ್ಕರ್ಮಿಗಳು ಬುಧವಾರ ಸಂಜೆ ಕಲ್ಲು ತೂರಾಟ ನಡೆಸಿದ್ದಾರೆ. ಮೂಡುಶೆಡ್ಡೆಯಲ್ಲಿ ಜಮಾಯಿಸಿದ ಬಿಜೆಪಿ ಕಾರ್ಯಕರ್ತರು ಮಿಥುನ್ ರೈ ಅವರ ವಾಹನ ಹಾದು ಹೋದಾಗ ಪ್ರಧಾನಿ ಪರವಾಗಿ ಘೋಷಣೆ ಕೂಗಿದ್ದಾರೆ. ಇದರಿಂದ ರೊಚ್ಚಿಗೆದ್ದ ಕಾಂಗ್ರೆಸ್ ಕಾರ್ಯಕರ್ತರು ಕಾಂಗ್ರೆಸ್ ಪರ ಘೋಷಣೆ ಕೂಗುವ ಮೂಲಕ ಪ್ರತಿದಾಳಿ ನಡೆಸಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಪ್ರದೇಶದಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡಲು ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.