ದರ್ಶನ್‌ಗೆ ಮತ್ತೆ ಕೋರ್ಟ್‌ನಲ್ಲಿ ಹಿನ್ನಡೆ: ಖುದ್ದು ಹಾಜರಾತಿ ಅರ್ಜಿ ವಜಾ

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟ ದರ್ಶನ್‌ಗೆ ನ್ಯಾಯಾಲಯದಲ್ಲಿ ಮತ್ತೆ ಹಿನ್ನಡೆಯಾಗಿದೆ. ವಿಚಾರಣೆ ವೇಳೆ ನ್ಯಾಯಾಲಯಕ್ಕೆ ಖುದ್ದು ಹಾಜರಾಗಲು ಅವಕಾಶ ನೀಡುವಂತೆ ದರ್ಶನ್ ಸಲ್ಲಿಸಿದ್ದ ಅರ್ಜಿಯನ್ನು 57ನೇ ಸಿಸಿಎಚ್ ನ್ಯಾಯಾಲಯ ವಜಾಗೊಳಿಸಿದೆ.

ನ್ಯಾಯಾಧೀಶೆ ಸುಜಾತ ಎಂ. ಸಾಂಬ್ರಾಣಿ ಅವರು ಪ್ರಾಸಿಕ್ಯೂಷನ್ ವಾದವನ್ನು ಪುರಸ್ಕರಿಸಿ, ದರ್ಶನ್ ಅವರು ವಿಡಿಯೋ ಕಾನ್ಫರೆನ್ಸ್ (ವಿಸಿ) ಮೂಲಕವೇ ವಿಚಾರಣೆಗೆ ಹಾಜರಾಗುವಂತೆ ಆದೇಶಿಸಿದ್ದಾರೆ.

ವಿಡಿಯೋ ಕಾನ್ಫರೆನ್ಸ್ ಮೂಲಕ ವಿಚಾರಣೆ ನಡೆಸಿದರೆ ಆಡಿಯೋ ಹಾಗೂ ವಿಡಿಯೋ ಗುಣಮಟ್ಟದ ಸಮಸ್ಯೆ ಉಂಟಾಗುವ ಸಾಧ್ಯತೆ ಇದೆ. ಇದರಿಂದ ಸಾಕ್ಷಿಗಳ ಪಾಟಿಸವಾಲು ನಡೆಸಲು ಅಡ್ಡಿಯಾಗಬಹುದು ಹಾಗೂ ಆರೋಪಿಯ ಪರ ವಾದ ಮಂಡನೆಗೆ ತೊಂದರೆಯಾಗಬಹುದು ಎಂದು ದರ್ಶನ್ ಪರ ಹಿರಿಯ ವಕೀಲ ಹಷ್ಮತ್ ಪಾಷಾ ವಾದಿಸಿದ್ದರು. ಹೀಗಾಗಿ ದರ್ಶನ್‌ಗೆ ವಿಚಾರಣೆ ವೇಳೆ ಖುದ್ದು ಹಾಜರಾಗಲು ಅವಕಾಶ ನೀಡಬೇಕು ಎಂದು ಮನವಿ ಮಾಡಿದ್ದರು.

ಇದಕ್ಕೆ ಪ್ರಾಸಿಕ್ಯೂಷನ್ ಪರ ವಿಶೇಷ ಸರ್ಕಾರಿ ಅಭಿಯೋಜಕ (ಎಸ್‌ಪಿಪಿ) ಪ್ರಸನ್ನ ಕುಮಾರ್ ವಿರೋಧ ವ್ಯಕ್ತಪಡಿಸಿದ್ದರು. ದರ್ಶನ್ ನ್ಯಾಯಾಲಯಕ್ಕೆ ಖುದ್ದು ಹಾಜರಾದರೆ ಅಪಾರ ಸಂಖ್ಯೆಯಲ್ಲಿ ಅಭಿಮಾನಿಗಳು ಹಾಗೂ ಸಾರ್ವಜನಿಕರು ಜಮಾಯಿಸುವ ಸಾಧ್ಯತೆ ಇದೆ. ಇದರಿಂದ ನ್ಯಾಯಾಲಯದ ಆವರಣದಲ್ಲಿ ಜನದಟ್ಟಣೆ ಹೆಚ್ಚಾಗಿ ಭದ್ರತಾ ಸಮಸ್ಯೆ ಎದುರಾಗಬಹುದು. ಅಲ್ಲದೆ, ಪೊಲೀಸರು ದಿನವಿಡೀ ಬಿಗಿ ಬಂದೋಬಸ್ತ್ ಕೈಗೊಳ್ಳಬೇಕಾಗುತ್ತದೆ ಎಂದು ವಾದಿಸಿದ್ದರು.

ವಿಡಿಯೋ ಕಾನ್ಫರೆನ್ಸ್ ಮೂಲಕ ವಿಚಾರಣೆ ನಡೆಸುವುದರಿಂದ ಯಾವುದೇ ಗೊಂದಲವಿಲ್ಲದೆ ಸುಗಮವಾಗಿ ವಿಚಾರಣೆ ಮುಂದುವರಿಸಬಹುದು ಎಂದು ಪ್ರಾಸಿಕ್ಯೂಷನ್ ಪರ ವಾದ ಮಂಡಿಸಲಾಗಿತ್ತು. ಈ ವಾದವನ್ನು ಪುರಸ್ಕರಿಸಿದ ನ್ಯಾಯಾಲಯ, ದರ್ಶನ್ ಅವರ ಖುದ್ದು ಹಾಜರಾತಿ ಅರ್ಜಿಯನ್ನು ವಜಾಗೊಳಿಸಿದೆ.