ಪುಣೆ: ಇಂಗ್ಲೆಂಡ್ ವಿರುದ್ಧದ ಅಂತಿಮ ಏಕದಿನ ಪಂದ್ಯದಲ್ಲಿ ಶಾರ್ದೂಲ್ ಠಾಕೂರ್ ಏಕೆ ಪಂದ್ಯಶ್ರೇಷ್ಠ ಪ್ರಶಸ್ತಿಗೆ ಅರ್ಹರಾಗಿಲ್ಲ ಎಂಬುದು ಆಶ್ಚರ್ಯಕರವಾಗಿದೆ ಎಂದು ಭಾರತ ತಂಡದ ನಾಯಕ ವಿರಾಟ್ ಕೊಹ್ಲಿ ಅಭಿಪ್ರಾಯಪಟ್ಟಿದ್ದಾರೆ.
ಭುವನೇಶ್ವರ್ ಕುಮಾರ್ ಅವರಿಗೆ ಸರಣಿಶ್ರೇಷ್ಠ ಪ್ರಶಸ್ತಿ ಸಿಗದಿರುವುದರ ಬಗ್ಗೆಯೂ ಕೊಹ್ಲಿ ಅಚ್ಚರಿ ವ್ಯಕ್ತಪಡಿಸಿದ್ದಾರೆ.
ಪಂದ್ಯದ ಬಳಿಕ ಪ್ರಶಸ್ತಿ ವಿತರಣಾ ಸಮಾರಂಭದಲ್ಲಿ ವಿರಾಟ್ ಕೊಹ್ಲಿ ತಮ್ಮ ಅಸಮಾಧಾನವನ್ನು ಹೊರಹಾಕಿದರು. ‘ಶಾರ್ದೂಲ್ಗೆ ಪಂದ್ಯಶ್ರೇಷ್ಠ ಮತ್ತು ಭುವಿಗೆ ಸರಣಿಶ್ರೇಷ್ಠ ಪ್ರಶಸ್ತಿಗೆ ಆಯ್ಕೆಯಾಗದಿರುವುದು ನನ್ನಲ್ಲಿ ಅಚ್ಚರಿಯನ್ನುಂಟು ಮಾಡಿದೆ ಎಂದು ಹೇಳಿದ್ದಾರೆ.
330 ರನ್ಗಳ ಗುರಿ ಬೆನ್ನತ್ತಿದ ಇಂಗ್ಲೆಂಡ್ ಒಂಬತ್ತು ವಿಕೆಟ್ ನಷ್ಟಕ್ಕೆ 322 ರನ್ ಗಳಿಸಿತ್ತು. ಸೋಲಿನ ಹೊರತಾಗಿಯೂ ದಿಟ್ಟ ಹೋರಾಟ ನೀಡಿದ ಇಂಗ್ಲೆಂಡ್ನ ಸ್ಯಾಮ್ ಕರನ್ ಪಂದ್ಯಶ್ರೇಷ್ಠ ಪ್ರಶಸ್ತಿಗೆ ಭಾಜನರಾಗಿದ್ದರು. ಸ್ಯಾಮ್ 83 ಎಸೆತಗಳಲ್ಲಿ ಒಂಭತ್ತು ಬೌಂಡರಿ ಹಾಗೂ ಮೂರು ಸಿಕ್ಸರ್ ನೆರವಿನಿಂದ 95 ರನ್ ಗಳಿಸಿ ಅಜೇಯರಾಗುಳಿದಿದ್ದರು.
ಇನ್ನೊಂದೆಡೆ ಇಂಗ್ಲೆಂಡ್ ಓಟಕ್ಕೆ ಕಡಿವಾಣ ಹಾಕಿದ ಶಾರ್ದೂಲ್, ನಾಲ್ಕು ವಿಕೆಟ್ಗಳನ್ನು ಕಬಳಿಸಿದ್ದರು. ಅತ್ತ ಭುವಿ ಮೂರು ವಿಕೆಟ್ ಸೇರಿದಂತೆ ಸರಣಿಯಲ್ಲಿ ಒಟ್ಟು ಆರು ವಿಕೆಟ್ಗಳನ್ನು ಪಡೆದಿದ್ದರು.
ಅತ್ತ ಸರಣಿಯುದ್ಧಕ್ಕೂ ಉತ್ತಮ ಬ್ಯಾಟಿಂಗ್ ಪ್ರದರ್ಶಿಸಿದ ಇಂಗ್ಲೆಂಡ್ ಬ್ಯಾಟ್ಸ್ಮನ್ ಜಾನಿ ಬೆಸ್ಟೊ ಸರಣಿಶ್ರೇಷ್ಠ ಪ್ರಶಸ್ತಿಗೆ ಭಾಜನರಾಗಿದ್ದರು.