ರಾಜ್ಯಾದ್ಯಂತ ಬಾಲಕಾರ್ಮಿಕರ ಪತ್ತೆಗೆ ವಿಶೇಷ ಕಾರ್ಯಾಚರಣೆ; 800 ಮಕ್ಕಳು ಪತ್ತೆ

ಬೆಂಗಳೂರು: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಸೂಚನೆ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಪೊಲೀಸರು ಹಾಗೂ ಕಾರ್ಮಿಕ ಇಲಾಖೆ ಅಧಿಕಾರಿಗಳು ಶನಿವಾರ ವಿಶೇಷ ಕಾರ್ಯಾಚರಣೆ ನಡೆಸಿದ್ದು, ಸುಮಾರು 800 ಬಾಲಕಾರ್ಮಿಕರನ್ನು ಪತ್ತೆಹಚ್ಚಿದ್ದಾರೆ. ಮಕ್ಕಳನ್ನು ಕೆಲಸಕ್ಕೆ ನಿಯೋಜಿಸಿದ್ದ ಮಾಲೀಕರ ವಿರುದ್ಧ ಬಾಲಕಾರ್ಮಿಕರ ನಿಷೇಧ ಕಾಯ್ದೆ ಹಾಗೂ ಬಾಲ ನ್ಯಾಯ ಕಾಯ್ದೆಯಡಿ 20 ಪ್ರಕರಣಗಳನ್ನು ದಾಖಲಿಸಲಾಗಿದೆ.

ಬೆಂಗಳೂರು, ಮೈಸೂರು, ಮಂಗಳೂರು, ಕಲಬುರಗಿ ಸೇರಿದಂತೆ ರಾಜ್ಯದ 31 ಜಿಲ್ಲೆಗಳ 962 ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಒಟ್ಟು 16,951 ಸ್ಥಳಗಳಲ್ಲಿ ಏಕಕಾಲದಲ್ಲಿ ತಪಾಸಣೆ ನಡೆಸಲಾಗಿದೆ.

ಬೆಂಗಳೂರು ನಗರದಲ್ಲೇ 5,897 ಸ್ಥಳಗಳಲ್ಲಿ ತಪಾಸಣೆ ನಡೆಸಲಾಗಿದ್ದು, ಗ್ಯಾರೇಜ್‌ಗಳು, ಮಾರ್ಟ್‌ಗಳು, ರಿಪೇರಿ ಅಂಗಡಿಗಳು, ಹೋಟೆಲ್‌ಗಳು, ಮಾರುಕಟ್ಟೆಗಳು, ಬಾರ್ ಮತ್ತು ರೆಸ್ಟೋರೆಂಟ್‌ಗಳು, ಲಾಡ್ಜ್‌ಗಳು, ಬೇಕರಿಗಳು, ಬಸ್ ಹಾಗೂ ರೈಲ್ವೆ ನಿಲ್ದಾಣಗಳು, ನಿರ್ಮಾಣ ಹಂತದ ಕಟ್ಟಡಗಳು, ಕಾರು ಗ್ಯಾರೇಜ್‌ಗಳು ಸೇರಿದಂತೆ ಅಮೆಜಾನ್ ಮತ್ತು ಫ್ಲಿಪ್‌ಕಾರ್ಟ್‌ಗಳ ಗೋದಾಮುಗಳಲ್ಲೂ ಪರಿಶೀಲನೆ ನಡೆಸಲಾಗಿದೆ.

203 ಮಕ್ಕಳಿಗೆ ಸಾಂತ್ವನ ಕೇಂದ್ರದಲ್ಲಿ ವಾಸ್ತವ್ಯ

ರಕ್ಷಿಸಲಾದ ಮಕ್ಕಳ ಪೈಕಿ 203 ಮಕ್ಕಳನ್ನು ಬೆಂಗಳೂರಿನ ಡೈರಿ ಸರ್ಕಲ್ ಬಳಿಯ ಮಹಿಳಾ ಮತ್ತು ಮಕ್ಕಳ ಸಾಂತ್ವನ ಕೇಂದ್ರದಲ್ಲಿ ವಾಸ್ತವ್ಯಕ್ಕೆ ವ್ಯವಸ್ಥೆ ಮಾಡಲಾಗಿದೆ. ಸತತ ಎರಡು ದಿನಗಳ ಸಾರ್ವಜನಿಕ ರಜೆ ಹಿನ್ನೆಲೆಯಲ್ಲಿ ಮಕ್ಕಳಿಗೆ ಅಲ್ಲಿಯೇ ವಾಸ್ತವ್ಯ ಕಲ್ಪಿಸಲಾಗಿದ್ದು, ಕೇಂದ್ರದ ಬಳಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ.

ಮಕ್ಕಳನ್ನು ಬಿಡುಗಡೆ ಮಾಡುವಂತೆ ಪೋಷಕರ ಒತ್ತಾಯ

ತಡರಾತ್ರಿ ಸಾಂತ್ವನ ಕೇಂದ್ರದ ಬಳಿ ಮಕ್ಕಳ ಪೋಷಕರು ಜಮಾಯಿಸಿ, ತಮ್ಮ ಮಕ್ಕಳನ್ನು ಕೂಡಲೇ ಬಿಡುಗಡೆ ಮಾಡುವಂತೆ ಒತ್ತಾಯಿಸಿದರು. ಆದರೆ ಮಕ್ಕಳನ್ನು ತಕ್ಷಣ ಕಳುಹಿಸಲು ಸಾಧ್ಯವಿಲ್ಲ ಎಂದು ಪೊಲೀಸರು ಪೋಷಕರಿಗೆ ಮನವರಿಕೆ ಮಾಡಿದರು. ಮಕ್ಕಳ ಕಲ್ಯಾಣ ಇಲಾಖೆ ಹಾಗೂ ಪೊಲೀಸರ ಜಂಟಿ ಕಾರ್ಯಾಚರಣೆಯಾಗಿರುವುದರಿಂದ ಕಾನೂನು ಪ್ರಕ್ರಿಯೆ ಪೂರ್ಣಗೊಳ್ಳುವವರೆಗೆ ಮಕ್ಕಳನ್ನು ಕೇಂದ್ರದಲ್ಲೇ ಇರಿಸಬೇಕಾಗಿದೆ ಎಂದು ತಿಳಿಸಿದರು.

ಯಶವಂತಪುರ ಎಪಿಎಂಸಿ ಭೇಟಿಯ ಬಳಿಕ ಕಾರ್ಯಾಚರಣೆ

ಇತ್ತೀಚೆಗೆ ಯಶವಂತಪುರ ಎಪಿಎಂಸಿ ಮಾರುಕಟ್ಟೆಗೆ ಭೇಟಿ ನೀಡಿದ್ದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಅಲ್ಲಿ ಬಾಲಕಾರ್ಮಿಕರನ್ನು ಗಮನಿಸಿ ಅಸಮಾಧಾನ ವ್ಯಕ್ತಪಡಿಸಿದ್ದರು. ಬಾಲಕಾರ್ಮಿಕ ಪದ್ಧತಿ ತಡೆಗಟ್ಟಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಪೊಲೀಸ್ ಇಲಾಖೆಗೆ ಸೂಚನೆ ನೀಡಿದ್ದರು. ಇದರ ಬೆನ್ನಲ್ಲೇ ನಡೆದ ಕಾರ್ಯಾಚರಣೆಯಲ್ಲಿ ಅಂದು 29 ಬಾಲಕಾರ್ಮಿಕರನ್ನು ರಕ್ಷಿಸಲಾಗಿತ್ತು.

ನಗರ ಪೊಲೀಸ್ ಆಯುಕ್ತರ ಆದೇಶದ ಮೇರೆಗೆ ಆರಂಭವಾದ ಈ ವಿಶೇಷ ಕಾರ್ಯಾಚರಣೆಯನ್ನು ಇದೀಗ ರಾಜ್ಯಾದ್ಯಂತ ವಿಸ್ತರಿಸಲಾಗಿದ್ದು, ಪೊಲೀಸರು ಹಾಗೂ ಕಾರ್ಮಿಕ ಇಲಾಖೆ ಅಧಿಕಾರಿಗಳು ಜಂಟಿಯಾಗಿ ಬಾಲಕಾರ್ಮಿಕರ ಪತ್ತೆ ಮತ್ತು ರಕ್ಷಣಾ ಕಾರ್ಯಾಚರಣೆ ಮುಂದುವರಿಸಿದ್ದಾರೆ.