ಎಸ್ಸೆಸ್ಸೆಲ್ಸಿ ಪರೀಕ್ಷೆ: ಯಾವುದೇ ವಿದ್ಯಾರ್ಥಿಗಳನ್ನು ಅನುತ್ತೀರ್ಣಗೊಳಿಸುವ ಉದ್ದೇಶವಿಲ್ಲ; ಸುರೇಶ್ ಕುಮಾರ್

ಬೆಂಗಳೂರು: ಕೋವಿಡ್ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಈ ಬಾರಿ ಎರಡು ಪರೀಕ್ಷೆ ನಡೆಸಲು ನಿರ್ಧರಿಸಿದ್ದು, ವಿಜ್ಞಾನ, ಗಣಿತ ಮತ್ತು ಸಮಾಜವಿಜ್ಞಾನದ ಒಂದು ಪತ್ರಿಕೆ, ಐಚ್ಛಿಕ ಭಾಷೆ ವಿಷಯಕ್ಕೆ ಸಂಬಂಧಿಸಿದ ಮತ್ತೊಂದು ಪ್ರಶ್ನೆಪತ್ರಿಕೆ ಇರುತ್ತದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್‌ಕುಮಾರ್ ಹೇಳಿದರು.

ಇಂದು ಸುದ್ದಿಗೋಷ್ಠಿಯಲ್ಲಿ ಈ‌ ಬಗ್ಗೆ ಮಾಹಿತಿ ನೀಡಿದ ಅವರು, ಪ್ರತಿ ವಿಷಯಕ್ಕೆ 40 ಅಂಕಗಳಿರುತ್ತವೆ. ಅಂದರೆ, ಒಂದು ಪ್ರಶ್ನೆ ಪತ್ರಿಕೆಯಲ್ಲಿ 120 ಅಂಕಗಳಿರುತ್ತದೆ. ಪರೀಕ್ಷೆಗೆ ಮೂರು ಗಂಟೆ ಅವಧಿ ನಿಗದಿಗೊಳಿಸಲಾಗಿದೆ ಎಂದರು.

ವಿದ್ಯಾರ್ಥಿಗಳು ಪಿಯುಸಿಯಲ್ಲಿ ವಿಜ್ಞಾನ, ವಾಣಿಜ್ಯ, ಕಲಾ ವಿಭಾಗ ಸೇರಿದಂತೆ ಯಾವುದೇ ಕೋರ್ಸ್‌ ತೆಗೆದುಕೊಳ್ಳಲು ಅನುಕೂಲವಾಗಲಿ ಎಂಬ ಉದ್ದೇಶದಿಂದ ಪರೀಕ್ಷೆ ನಡೆಸಲಾಗುತ್ತಿದೆ. ಯಾರನ್ನೇ ಆಗಲಿ ಅನುತ್ತೀರ್ಣಗೊಳಿಸುವ ಉದ್ದೇಶವಿಲ್ಲ. ವಿದ್ಯಾರ್ಥಿಗಳಿಗೆ ಗ್ರೇಡಿಂಗ್ ನೀಡಲಾಗುತ್ತದೆ ಎಂದು ತಿಳಿಸಿದರು.

ಕೋವಿಡ್ ಕಾರಣದಿಂದ ಗೈರಾಗುವ ವಿದ್ಯಾರ್ಥಿಗಳಿಗೆ ಮಾತ್ರ ಪೂರಕ ಪರೀಕ್ಷೆ ನಡೆಸಲಾಗುತ್ತದೆ ಎಂದು ಹೇಳಿದರು.