ಬೆಳಗಾವಿ: ರಾಜ್ಯದಲ್ಲಿ ಕೊರೊನಾ ನಿಯಂತ್ರಣವಾದರೆ ಮಾತ್ರ ಎಸ್ಸೆಸ್ಸೆಲ್ಸಿ ಪರೀಕ್ಷೆ ನಡೆಸುತ್ತೇವೆ. ಇಲ್ಲದಿದ್ದರೆ ಪರೀಕ್ಷೆ ನಡೆಸಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸ್ಪಷ್ಟಪಡಿಸಿದ್ದಾರೆ.
ಬೆಳಗಾವಿಯಲ್ಲಿ ಇಂದು ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಎಸ್ಸೆಸ್ಸೆಲ್ಸಿ ಪರೀಕ್ಷೆ ನಡೆಸುವುದು ಈಗಿನ ತಾತ್ಕಾಲಿಕ ನಿರ್ಧಾರ. ಮುಂದಿನ ದಿನಗಳಲ್ಲಿ ಪರಿಸ್ಥಿತಿ ನೋಡಿಕೊಂಡು ತೀರ್ಮಾನ ಮಾಡುತ್ತೇವೆ. ಕೊರೋನಾ ಸೋಂಕು ಇಳಿಮುಖವಾದರೆ ಪರೀಕ್ಷೆ, ಇಲ್ಲದಿದ್ದರೆ ಇಲ್ಲ ಎಂದು ಹೇಳಿದರು.
ಇದಕ್ಕೂ ಮುಂಚೆ ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿದ ಶಿಕ್ಷಣ ಸಚಿವ ಎಸ್ ಸುರೇಶ್ ಕುಮಾರ್ ಅವರು, ಜುಲೈ 3ನೇ ವಾರದಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆ ನಡೆಸಲು ತೀರ್ಮಾನ ಕೈಗೊಳ್ಳಲಾಗಿದ್ದು, 20 ದಿನ ಮುಂಚಿತವಾಗಿ ಪರೀಕ್ಷೆ ದಿನಾಂಕ ಘೋಷಣೆ ಮಾಡಲಾಗುವುದು. ಕೊವಿಡ್ ಕಾರಣದಿಂದ ಪರೀಕ್ಷೆ ಬರೆಯಲು ಆಗದಿದ್ದರೆ, ಅಂತಹ ವಿದ್ಯಾರ್ಥಿಗಳಿಗೆ ಮತ್ತೊಮ್ಮೆ ಅವಕಾಶವಿದೆ. ಹೊಸ ಅಭ್ಯರ್ಥಿಗಳಾಗಿ ಪರೀಕ್ಷೆ ಬರೆಯಲು ಅವಕಾಶ ನೀಡಲಾಗುವುದು ಎಂದು ಹೇಳಿದರು.