ಬೆಂಗಳೂರು: ರಷ್ಯಾ-ಉಕ್ರೇನ್ ಯುದ್ಧದ ನಡುವೆ ಕರ್ನಾಟಕ ಸರ್ಕಾರವು ಯುದ್ಧ ಪೀಡಿತ ಪೂರ್ವ ಯುರೋಪಿಯನ್ ರಾಷ್ಟ್ರದಿಂದ ತನ್ನ ನಿವಾಸಿಗಳನ್ನು ಸುರಕ್ಷಿತವಾಗಿ ಸ್ಥಳಾಂತರಿಸಲು ಅನುಕೂಲವಾಗುವಂತೆ ನೋಡಲ್ ಅಧಿಕಾರಿಯನ್ನು ನೇಮಿಸಿ ಆದೇಶ ಹೊರಡಿಸಿದೆ.
ಉಕ್ರೇನ್‌ನಲ್ಲಿ ಸಿಲುಕಿರುವ ಕರ್ನಾಟಕದ ನಾಗರಿಕರನ್ನು ಆಯಾಯ ಸ್ಥಳಗಳಿಗೆ ಸುರಕ್ಷಿತವಾಗಿ ತಲುಪಿಸಲು ಅನುಕೂಲವಾಗುವಂತೆ ಕರ್ನಾಟಕ ಸರ್ಕಾರವು ನೋಡಲ್ ಅಧಿಕಾರಿಯನ್ನು ನೇಮಿಸಿದೆ. ನೋಡಲ್ ಕಚೇರಿಯು ವಿದೇಶಾಂಗ ವ್ಯವಹಾರಗಳ ಸಚಿವಾಲಯ ಮತ್ತು ಕೀವ್ ನಲ್ಲಿ ಭಾರತದ ರಾಯಭಾರಿ ಕಚೇರಿಯೊಂದಿಗೆ ಸಮನ್ವಯ ಸಾಧಿಸುತ್ತದೆ ಮತ್ತು ಉಕ್ರೇನ್ ನಲ್ಲಿ ಸಿಕ್ಕಿಬಿದ್ದಿರುವ ಜನರನ್ನು ಸ್ಥಳಾಂತರಿಸಲು ಎಲ್ಲಾ ರೀತಿಯ ಸಹಾಯವನ್ನು ನೀಡುತ್ತದೆ ಎಂದು ರಾಜ್ಯ ಸರ್ಕಾರದ ಆದೇಶವು ತಿಳಿಸಿದೆ.
ಉಕ್ರೇನ್‌ನಲ್ಲಿ ಸಿಲುಕಿರುವ ಸುಮಾರು16,000 ಪ್ರಜೆಗಳನ್ನು ಸ್ಥಳಾಂತರಿಸುವತ್ತ ಭಾರತ ಗಮನಹರಿಸುತ್ತಿದೆ ಎಂದು ವಿದೇಶಾಂಗ ಕಾರ್ಯದರ್ಶಿ ಹರ್ಷವರ್ಧನ್ ಶ್ರಿಂಗ್ಲಾ ಗುರುವಾರ ತಡರಾತ್ರಿ ತಿಳಿಸಿದ್ದಾರೆ.
ಭಾರತಕ್ಕೆ ವಾಪಾಸು ಬರಲು ತಯಾರಿರುವ ಭಾರತೀಯರಿಗೆ ಸಹಾಯ ಮಾಡಲು ಭಾರತೀಯ ವಿದೇಶಾಂಗ ಸಚಿವಾಲಯದ ಅಧಿಕಾರಿಗಳ ತಂಡಗಳನ್ನು ಹಂಗೇರಿ, ಪೋಲೆಂಡ್, ಸ್ಲೋವಾಕಿಯಾ ಮತ್ತು ರೊಮೇನಿಯಾಗಳಿಗೆ ಕಳುಹಿಸಲಾಗಿದೆ. ವಿದೇಶಾಂಗ ವ್ಯವಹಾರಗಳ ಸಚಿವಾಲಯವು ರಕ್ಷಣಾ ಸಚಿವಾಲಯದೊಂದಿಗೆ ನಿರಂತರ ಸಂಪರ್ಕದಲ್ಲಿದೆ. ಏರ್‌ಲಿಫ್ಟ್‌ಗೆ ವ್ಯವಸ್ಥೆ ಮಾಡುವಂತೆ ಕೇಳಿಕೊಳ್ಳಲಾಗಿದೆ. ವಾಣಿಜ್ಯ ವಿಮಾನಗಳ ಜೊತೆ ಅಗತ್ಯಬಿದ್ದಲ್ಲಿ ಭಾರತೀಯ ವಾಯುಸೇನೆಯ ವಿಮಾನಗಳನ್ನು ಬಳಸಿ ತೆರವು ಕಾರ್ಯಗಳನ್ನು ಕೈಗೊಳ್ಳಲಾಗುವುದು ಎಂದು ಅವರು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.