ರಾಜ್ಯದಲ್ಲಿ ಹಾಲಿನ ದರ ಲೀಟರ್‌ಗೆ ₹8 ಹೆಚ್ಚಳಕ್ಕೆ ಸಚಿವ ಸಂಪುಟ ಒಪ್ಪಿಗೆ!

ಬೆಂಗಳೂರು: ರಾಜ್ಯದ ಜನತೆಗೆ ಸರ್ಕಾರ ದರ ಏರಿಕೆಯ ಶಾಕ್ ನೀಡಲು ಮುಂದಾಗಿದೆ. ಹಾಲಿನ ದರವನ್ನು ಪ್ರತಿ ಲೀಟರ್‌ಗೆ ₹8ರಷ್ಟು ಹೆಚ್ಚಿಸಲು ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದೆ. ಇದರ ಜೊತೆಗೆ ಬಸ್‌ ಟಿಕೆಟ್‌ ದರ ಹೆಚ್ಚಳಕ್ಕೂ ಸಂಪುಟ ಅನುಮೋದನೆ ನೀಡಿದೆ.

ಮಂಗಳವಾರ ವಿಧಾನಸೌಧದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಹಾಲಿನ ದರ ಏರಿಕೆ ಸೇರಿದಂತೆ ಹಲವು ಪ್ರಮುಖ ವಿಚಾರಗಳ ಕುರಿತು ನಿರ್ಣಯ ಕೈಗೊಳ್ಳಲಾಗಿದೆ.

ಸದ್ಯ ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿರುವ ಹಿನ್ನೆಲೆಯಲ್ಲಿ ಹೊಸ ದರಗಳು ಅಕ್ಟೋಬರ್ 27ರ ಬಳಿಕ ಜಾರಿಗೆ ಬರುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ.

ಹಾಲಿನ ದರ ಹೆಚ್ಚಳಕ್ಕೆ ಸಂಬಂಧಿಸಿದಂತೆ ರಾಜ್ಯದ ವಿವಿಧ ಹಾಲು ಒಕ್ಕೂಟಗಳು ಪ್ರತಿ ಲೀಟರ್‌ಗೆ ₹8ರಿಂದ ₹10ರವರೆಗೆ ದರ ಹೆಚ್ಚಳ ಮಾಡುವಂತೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದವು. ಸಂಪುಟ ಸಭೆಯಲ್ಲಿ ದರ ಹೆಚ್ಚಳಕ್ಕೆ ಒಪ್ಪಿಗೆ ನೀಡಲಾಗಿದ್ದು, ಅಂತಿಮವಾಗಿ ಎಷ್ಟು ದರ ಹೆಚ್ಚಳ ಮಾಡಬೇಕು ಎಂಬುದನ್ನು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ವಿವೇಚನೆಗೆ ಬಿಡಲಾಗಿದೆ.

ಮುಖ್ಯಮಂತ್ರಿಗಳು ಪ್ರತಿ ಲೀಟರ್‌ಗೆ ₹8ರಷ್ಟು ದರ ಹೆಚ್ಚಳ ಮಾಡುವ ಬಗ್ಗೆ ಒಲವು ಹೊಂದಿದ್ದಾರೆ ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಶೀಘ್ರದಲ್ಲೇ ಹೊಸ ಹಾಲಿನ ದರ ಅಧಿಕೃತವಾಗಿ ಪ್ರಕಟವಾಗುವ ನಿರೀಕ್ಷೆಯಿದೆ.

ಇದೇ ವೇಳೆ ಬೆಂಗಳೂರಿಗೆ ಹೊಸದಾಗಿ ಐದು ಕಮಿಷನರೇಟ್‌ಗಳನ್ನು ಸ್ಥಾಪಿಸುವ ಬಗ್ಗೆಯೂ ಸಚಿವ ಸಂಪುಟ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಗಿದೆ.