ಉಡುಪಿ: ಮಳೆಯಿಂದ ಉಡುಪಿ ಜಿಲ್ಲೆಯಲ್ಲಿ ಸಾಕಷ್ಟು ಹಾನಿ ಸಂಭವಿಸಿದೆ. ಆದರೆ ರಾಜ್ಯ ಕಾಂಗ್ರೆಸ್ ಸರಕಾರವು ಮಳೆಯಿಂದ ಹಾನಿಗೊಳಗಾದ ಮನೆಗಳಿಗೆ, ದನದ ಕೊಠಡಿ, ಕೋಳಿ ಶೆಡ್ ಗಳಿಗೆ ತುರ್ತಾಗಿ ಸ್ಪಂದಿಸದೆ ಜನರಿಗೆ ಅನ್ಯಾಯ ಮಾಡಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ ದೂರಿದರು.
ಉಡುಪಿ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಇತ್ತೀಚೆಗೆ ಸುರಿದ ಬಿರುಗಾಳಿ ಸಹಿತ ಮಳೆಯಿಂದ ಕಾರ್ಕಳ ಹಾಗೂ ಕಾಪು ತಾಲೂಕಿನ 30ಕ್ಕೂ ಅಧಿಕ ಮನೆಗಳಿಗೆ ಭಾಗಶಃ ಹಾನಿ ಉಂಟಾಗಿದೆ. ಆದರೆ ಸರಕಾರ 6500 ರೂ. ಪರಿಹಾರ ನೀಡಿ ಕೈ ತೊಳೆದುಕೊಂಡಿದೆ. ಬೆಳೆ ಹಾನಿಯಿಂದ ಸಾಕಷ್ಟು ರೈತರು ಸಂಕಷ್ಟಕ್ಕೆ ಸಿಲುಕಿದೆ. ಆದರೆ ಸರಕಾರ ಬಿಡಿಕಾಸು ಪರಿಹಾರ ನೀಡದೆ ರೈತರನ್ನು ಮತ್ತಷ್ಟು ಸಂಕಷ್ಟಕ್ಕೆ ತಳ್ಳಿದೆ ಎಂದು ದೂರಿದರು.
ನಿರಂತರ ಮಳೆಯಿಂದ ಜಿಲ್ಲೆಯ ಸಾಕಷ್ಟು ರಸ್ತೆಗಳು ಹಾಳಾಗಿವೆ. ಈವರೆಗೂ ಯಾವುದೇ ಅನುದಾನ ಮಂಜೂರಾಗಿಲ್ಲ. ಜಿಲ್ಲಾ ಉಸ್ತುವಾರಿ ಸಚಿವರು ಧ್ವಜಾರೋಹಣ ಮಾಡಲು ಹಾಗೂ ಅಂಗನವಾಡಿ ಉದ್ಘಾಟಿಸಲು ಸೀಮಿತರಾಗಿದ್ದಾರೆ. ಮಳೆಯಿಂದ ಹಾನಿಯಾದ ಪ್ರದೇಶಗಳಿಗೆ ಭೇಟಿಕೊಟ್ಟು ಸಮಗ್ರ ಅಧ್ಯಾಯನ ಮಾಡಿ ಸೂಕ್ತ ಪರಿಹಾರ ಬಿಡುಗಡೆ ಮಾಡಬೇಕಿತ್ತು. ಆದರೆ ಅವರಿಂದ ಯಾವುದೇ ಕೆಲಸ ಆಗುತ್ತಿಲ್ಲ. ಸಚಿವರು ಇನ್ನಾದರೂ ಎಚ್ಚೆತ್ತುಕೊಂಡು ಮಳೆಯಿಂದ ಉಂಟಾದ ನಷ್ಟಕ್ಕೆ ಸೂಕ್ತ ಪರಿಹಾರ ದೊರಕಿಸಿಕೊಡಬೇಕು ಎಂದು ಅವರು ಒತ್ತಾಯಿಸಿದರು.
ಸುದ್ದಿಗೋಷ್ಠಿಯಲ್ಲಿ ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ರೇಷ್ಮಾ ಉದಯ್ ಶೆಟ್ಟಿ, ಕಾರ್ಯದರ್ಶಿ ಶ್ರೀಕಾಂತ್ ನಾಯಕ್, ಬಿಜೆಪಿ ಜಿಲ್ಲಾ ಆರ್ಥಿಕ ಪ್ರಕೋಷ್ಠದ ಸಂಚಾಲಕ ದಿವಾಕರ ಶೆಟ್ಟಿ, ಮುಖಂಡರಾದ ಶಿವಕುಮಾರ್ ಅಂಬಲಪಾಡಿ, ಗಿರೀಶ್ ಅಂಚನ್, ಶ್ರೀನಿಧಿ ಹೆಗ್ಡೆ ಉಪಸ್ಥಿತರಿದ್ದರು.












