Homeರಾಜ್ಯ ಸುದ್ದಿಜೂ.25 ರಂದು ರಾಜ್ಯಾದ್ಯಂತ ಮೆಗಾ ಲೋಕ್ ಅದಾಲತ್ ಆಯೋಜನೆ

ಜೂ.25 ರಂದು ರಾಜ್ಯಾದ್ಯಂತ ಮೆಗಾ ಲೋಕ್ ಅದಾಲತ್ ಆಯೋಜನೆ

ಉಡುಪಿ: ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ, ಬೆಂಗಳೂರು ಇವರ ವತಿಯಿಂದ ರಾಜ್ಯಾದ್ಯಂತ
ಜೂನ್ 25 ರಂದು ಇ-ಲೋಕ ಅದಾಲತ್/ ಮೆಗಾ ಲೋಕ್ ಅದಾಲತ್‌ನ್ನು ಆಯೋಜಿಸಲಾಗಿದೆ.

ಸಾರ್ವಜನಿಕರು ತಮ್ಮ ವ್ಯಾಜ್ಯ ಪೂರ್ವ ಹಾಗೂ ನ್ಯಾಯಾಲಯಗಳಲ್ಲಿ ಬಾಕಿ ಇರುವ ಪ್ರಕರಣಗಳಲ್ಲಿ ಮೆಗಾ ಲೋಕ್ ಅದಾಲತ್ ಮೂಲಕ ತಕ್ಷಣ ಪರಿಹಾರ ಕಂಡುಕೊಳ್ಳಬಹುದಾಗಿದೆ.

ಅದಾಲತ್‌ನಲ್ಲಿ ಸಾರ್ವಜನಿಕರು ರಾಜಿಯಾಗಬಲ್ಲ ಅಪರಾಧಿಕ ಪ್ರಕರಣ, ಬ್ಯಾಂಕ್ ಸಾಲ ವಸೂಲಾತಿ ಪ್ರಕರಣ,
ಉದ್ಯೋಗದಲ್ಲಿ ಪುನರ್ ಸ್ಥಾಪಿಸಲ್ಪಡುವ ಪ್ರಕರಣ, ಕೈಗಾರಿಕಾ ಕಾರ್ಮಿಕರ ವೇತನಕ್ಕೆ ಸಂಬಂಧಿಸಿದ ಕ್ಲೇಮುಗಳು, ಜಿಲ್ಲಾ ಗ್ರಾಹಕರ ವೇದಿಕೆಯಲ್ಲಿನ ಪ್ರಕರಣ, ರಾಜ್ಯ ರಿಯಲ್ ಎಸ್ಟೇಟ್ ಪ್ರಾಧಿಕಾರಕ್ಕೆ ಸಂಬಂಧಪಟ್ಟ ಪ್ರಕರಣ, ಸಾಲ ವಸೂಲಾತಿ ನ್ಯಾಯಾಧಿಕರಣದ ಪ್ರಕರಣ, ಖಾಯಂ ಜನತಾ ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣ, ಚೆಕ್ ಅಮಾನ್ಯ ಪ್ರಕರಣ, ಅಕ್ರಮ ಮರಳು ಸಾಗಾಣಿಕೆ ಪ್ರಕರಣ, ಮೋಟಾರು ವಾಹನ ಅಪಘಾತ ಪರಿಹಾರ ನ್ಯಾಯಾಧಿಕರಣದ ಪ್ರಕರಣ, ಕಾರ್ಮಿಕರ ವಿವಾದ, ವಿದ್ಯುತ್ ಹಾಗೂ ನೀರಿನ ಶುಲ್ಕಕ್ಕೆ ಸಂಬಂಧಿಸಿದ ಪ್ರಕರಣ, ಭೂಸ್ವಾಧೀನ ಪ್ರಕರಣ, ವೇತನ ಮತ್ತು ಭತ್ಯೆಗಳಿಗೆ ಸಂಬಂಧಿಸಿದ ಸೇವಾ ಪ್ರಕರಣ ಹಾಗೂ ಪಿಂಚಣಿ ಪ್ರಕರಣ, ಸಾರ್ವಜನಿಕರ ಉಪಯುಕ್ತತೆ ಸೇವೆಗಳಿಗೆ ಸಂಬಂಧಿಸಿದ ಪ್ರಕರಣ, ರಾಜಿಯಾಗಬಲ್ಲ ಸಿವಿಲ್ ಮತ್ತು ಇತರೆ ಪ್ರಕರಣ ಹಾಗೂ ವಿಚ್ಛೇದನ ಹೊರತುಪಡಿಸಿ ವೈವಾಹಿಕ ಮತ್ತು ಕುಟುಂಬ ನ್ಯಾಯಾಲಯದ ಪ್ರಕರಣಗಳನ್ನು ಲೋಕ್ ಅದಾಲತ್ ಮೂಲಕ ಇತ್ಯರ್ಥಪಡಿಸಿಕೊಳ್ಳಬಹುದಾಗಿದೆ.

ನ್ಯಾಯಾಲಯದಲ್ಲಿ ದಾಖಲಾಗದೇ ಇರುವ ಪ್ರಕರಣಗಳನ್ನು ಸಹ ರಾಜೀ ಸಂಧಾನದ ಮೂಲಕ ಬಗೆಹರಿಸಿಕೊಳ್ಳಲು ಅವಕಾಶ ಕಲ್ಪಿಸಲಾಗಿದ್ದು, ರಾಜೀ ಸಂಧಾನದ ಮೂಲಕ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಂಡಲ್ಲಿ ನ್ಯಾಯಾಲಯಕ್ಕೆ ಪಾವತಿಸಲಾದ ಶುಲ್ಕವನ್ನು ಪೂರ್ಣವಾಗಿ ಮರುಪಾವತಿಸಲಾಗುವುದು. ಸಂಧಾನಕಾರರು ಸೂಚಿಸುವ ಪರಿಹಾರ ಒಪ್ಪಿಗೆಯಾದಲ್ಲಿ ಮಾತ್ರ ರಾಜೀ
ಮಾಡಿಕೊಳ್ಳಬಹುದು. ಕಡಿಮೆ ಖರ್ಚಿನಲ್ಲಿ ಶೀಘ್ರ ತೀರ್ಮಾನಕ್ಕಾಗಿ ಇದೊಂದು ವಿಶೇಷ ಅವಕಾಶವಾಗಿದೆ.

ಹೆಚ್ಚಿನ ಮಾಹಿತಿಗಾಗಿ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ, ಬೆಂಗಳೂರು ಟೋಲ್ ಫ್ರೀ ಸಂಖ್ಯೆ: 1800-425-90900 ಅನ್ನು ಸಂಪರ್ಕಿಸುವಂತೆ ಹಿರಿಯ ಸಿವಿಲ್ ನ್ಯಾಯಾಧೀಶೆ ಮತ್ತು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶರ್ಮಿಳಾ ಎಸ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

error: Content is protected !!