ಮೇ 30 ರಿಂದ ಜೂನ್ 1 ರವರೆಗೆ ರಾಜ್ಯ ಸರ್ಕಾರಿ ನೌಕರರ ರಾಜ್ಯಮಟ್ಟದ ಕ್ರೀಡಾಕೂಟ ಹಾಗೂ ಸಾಂಸ್ಕೃತಿಕ ಸ್ಫರ್ಧೆಗಳ ಆಯೋಜನೆ

ಉಡುಪಿ: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ರಾಜ್ಯಮಟ್ಟದ ಕ್ರೀಡಾಕೂಟ ಹಾಗೂ ಸಾಂಸ್ಕೃತಿಕ ಸ್ಫರ್ಧೆಯು ಮೇ 30 ರಿಂದ ಜೂನ್ 1 ರ ವರೆಗೆ ಬೆಂಗಳೂರು ನಗರದ ಕಂಠೀರವ ಕ್ರೀಡಾಂಗಣದಲ್ಲಿ ನಡೆಯಲಿದ್ದು, ಕ್ರೀಡಾಕೂಟವನ್ನು ರಾಜ್ಯ ಸರಕಾರದ ಮಾನ್ಯ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿಯವರು ಮೇ 30 ರಂದು ಸಂಜೆ 4.30 ಕ್ಕೆ ಉದ್ಘಾಟಿಸಲಿರುವರು.

ಜಿಲ್ಲೆಯಿಂದ ಆಯ್ಕೆಯಾಗಿ ಆನ್‌ಲೈನ್ ಮೂಲಕ ನೊಂದಾಯಿಸಿರುವ ಕ್ರೀಡಾಪಟುಗಳು ಮಾತ್ರ ಭಾಗವಹಿಸಲು ಅವಕಾಶ ಕಲ್ಪಿಸಲಾಗಿದ್ದು, ಕ್ರೀಡಾಕೂಟದಲ್ಲಿ ಭಾಗವಹಿಸುವ ಎಲ್ಲಾ ಕ್ರೀಡಾಪಟುಗಳಿಗೆ ಉತ್ತಮ ಗುಣಮಟ್ಟದ ಟ್ರಾಕ್ ಸೂಟ್ ಮತ್ತು ಕ್ಯಾಪ್ ವಿತರಿಸಲಾಗುವುದು.

ಅಖಿಲ ಭಾರತ ನಾಗರಿಕ ಸೇವಾ ಪಂದ್ಯಾವಳಿಗಳಲ್ಲಿ ಭಾಗವಹಿಸಿ ಪ್ರಥಮ ಹಾಗೂ ದ್ವೀತಿಯ ಸ್ಥಾನ ಪಡೆದ ಕ್ರೀಡಾಪಟುಗಳನ್ನು ಅಭಿನಂದಿಸಲಾಗುವುದು ಮತ್ತು ಭಾಗವಹಿಸುವ ಎಲ್ಲಾ ಮಹಿಳಾ ಕ್ರೀಡಾಪಟುಗಳಿಗೆ ಕಂಠೀರವ ಕ್ರೀಡಾಂಗಣದಲ್ಲಿ ವಸತಿ ವ್ಯವಸ್ಥೆ ಕಲ್ಪಿಸಲಾಗುವುದು.

ಮೇ 30 ರಂದು ಸಂಜೆ 6 ಗಂಟೆಗೆ ಗಾಯಕ ವಿಜಯಪ್ರಕಾಶ್ ಇವರಿಂದ ಸಂಗೀತ ರಸ ಸಂಜೆ ಕಾರ್ಯಕ್ರಮ ಹಾಗೂ ಸಂಜೆ 6 ಗಂಟೆಗೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಪ್ರಾಯೋಜಿತ ಜಾನಪದ ಕಲಾತಂಡಗಳಿಂದ ಸಾಂಸ್ಕೃತಿಕ ಸಂಗೀತ ರಸ ಸಂಜೆ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ರಾಜ್ಯ ಸರಕಾರಿ ನೌಕರರ ಸಂಘದ ಜಿಲ್ಲಾ ಅಧ್ಯಕ್ಷ ಸುಬ್ರಮಣ್ಯ ಶೇರಿಗಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.