ಬೆಂಗಳೂರು: ಶಾಲೆ ಹಾಗೂ ಕಾಲೇಜುಗಳಲ್ಲಿ ನಡೆಯುವ ಸಾಂಸ್ಕೃತಿಕ ಕಾರ್ಯಕ್ರಮಗಳು ಮತ್ತು ವಾರ್ಷಿಕೋತ್ಸವಗಳಲ್ಲಿ ವಿದ್ಯಾರ್ಥಿಗಳು ಅಶ್ಲೀಲ ಹಾಡುಗಳಿಗೆ ನೃತ್ಯ ಮಾಡುವುದನ್ನು ನಿಷೇಧಿಸಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಮಹತ್ವದ ಸುತ್ತೋಲೆ ಹೊರಡಿಸಿದೆ.
ಅಶ್ಲೀಲ ಹಾಡುಗಳು ವಿದ್ಯಾರ್ಥಿಗಳ ಮನೋವಿಕಾಸದ ಮೇಲೆ ಕೆಟ್ಟ ಪರಿಣಾಮ ಬೀರುವ ಸಾಧ್ಯತೆ ಇದೆ. ಇದರಿಂದ ಶಿಸ್ತುಭಂಗ ಉಂಟಾಗುವುದರ ಜೊತೆಗೆ ಶಿಕ್ಷಣ ಸಂಸ್ಥೆಗಳ ಗೌರವಕ್ಕೂ ಧಕ್ಕೆ ತಲುಪಬಹುದು ಎಂದು ಸುತ್ತೋಲೆಯಲ್ಲಿ ಉಲ್ಲೇಖಿಸಲಾಗಿದೆ.
ರಾಜ್ಯದ ಎಲ್ಲಾ ಸರ್ಕಾರಿ, ಅನುದಾನಿತ ಹಾಗೂ ಅನುದಾನ ರಹಿತ ಶಾಲೆಗಳಲ್ಲಿ ಇಂತಹ ಹಾಡುಗಳಿಗೆ ವಿದ್ಯಾರ್ಥಿಗಳು ನೃತ್ಯ ಮಾಡುವುದನ್ನು ತಡೆಯಲು ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವಂತೆ ಸೂಚಿಸಲಾಗಿದೆ. ಅಗತ್ಯವಿದ್ದಲ್ಲಿ ಕಠಿಣ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ತಿಳಿಸಲಾಗಿದೆ.
ಯಾವುದೇ ಶಾಲೆಯಲ್ಲಿ ವಿದ್ಯಾರ್ಥಿಗಳನ್ನು ಅಶ್ಲೀಲ ಹಾಡುಗಳಿಗೆ ನೃತ್ಯ ಮಾಡಲು ಪ್ರೇರೇಪಿಸಿದರೆ, ಸಂಬಂಧಿತ ಶಾಲೆಯ ಮುಖ್ಯ ಶಿಕ್ಷಕರು ಮತ್ತು ಆಡಳಿತ ಮಂಡಳಿಯ ವಿರುದ್ಧ ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಕೆ ನೀಡಲಾಗಿದೆ.
ಇದರ ಬದಲಾಗಿ ಪ್ರೇರಣಾದಾಯಕ, ದೇಶಭಕ್ತಿ, ನೈತಿಕ ಮೌಲ್ಯಗಳನ್ನು ಬಿಂಬಿಸುವ ಹಾಗೂ ಗೌರವ, ಸಹೋದರತ್ವವನ್ನು ಬೆಳೆಸುವ ಹಾಡುಗಳನ್ನು ಆಯ್ಕೆ ಮಾಡಬೇಕು ಎಂದು ಇಲಾಖೆ ಸೂಚಿಸಿದೆ.

















