ಕ್ರಿಯಾಶೀಲತೆಯಿಂದ ತೊಡಗಿಸಿಕೊಂಡಾಗ ಯಶಸ್ಸು ಶತಸಿದ್ಧ: ಭಾಗೀರತಿ ಮುಳ್ಳೇರಿಯ

ಉಡುಪಿ: ಹಿರಿಯರ ತ್ಯಾಗ ಕಾರ್ಯಕರ್ತರ ಪರಿಶ್ರಮದಿಂದ ಬಿಜೆಪಿ ಇಂದು ವಿಶ್ವದ ಅತೀ ದೊಡ್ಡ ಯಶಸ್ವಿ ರಾಜಕೀಯ ಪಕ್ಷವೆನಿಸಿದೆ. ರಾಜ್ಯದಿಂದ ಕಾಲ ಕಾಲಕ್ಕೆ ಬರುವ ನಿರ್ದೇಶನದಂತೆ ಪಕ್ಷದ ಸಂಘಟನಾತ್ಮಕ ವಿಚಾರಗಳನ್ನು ಮಂಡಲ, ಮಹಾಶಕ್ತಿ ಕೇಂದ್ರ, ಶಕ್ತಿ ಕೇಂದ್ರಗಳ ಮೂಲಕ ಕಟ್ಟ ಕಡೆಯ ಕಾರ್ಯಕರ್ತರಿಗೂ ತಲುಪಿಸುವ ವ್ಯವಸ್ಥೆ ಆಗಬೇಕು. ಈ ನಿಟ್ಟಿನಲ್ಲಿ ಅತ್ಯಂತ ಕ್ರಿಯಾಶೀಲತೆಯಿಂದ ತೊಡಗಿಸಿಕೊಂಡಾಗ ಯಶಸ್ಸು ಶತಸಿದ್ಧ ಎಂದು ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸದಸ್ಯೆ ಜಿಲ್ಲಾ ಮಹಿಳಾ ಮೋರ್ಚಾದ ಪ್ರಭಾರಿ ಭಾಗೀರತಿ ಮುಳ್ಳೇರಿಯ ಹೇಳಿದರು.

ಬಿಜೆಪಿ ಉಡುಪಿ ಜಿಲ್ಲಾ ಕಚೇರಿಯಲ್ಲಿ ಮಂಗಳವಾರ ನಡೆದ ಜಿಲ್ಲಾ ಮಹಿಳಾ ಮೋರ್ಚಾದ ವಿಶೇಷ ಕಾರ್ಯಕಾರಿಣಿ ಸಭೆಯನ್ನು ಉದ್ಘಾಟಿಸಿ ಮಾತನಾಡಿದರು.

ಇಂದು ಗ್ರಾಮ ಪಂಚಾಯತ್ ಮಟ್ಟದಿಂದ ಎಲ್ಲಾ ಸ್ತರಗಳ ಸಹಿತ ರಾಜ್ಯ ಮತ್ತು ಕೇಂದ್ರದಲ್ಲಿರುವ ಬಿಜೆಪಿ ನೇತೃತ್ವದ ಸರ್ಕಾರದ ವಿವಿಧ ಜನಪರ ಯೋಜನೆಗಳನ್ನು ಜನತೆಗೆ ತಲುಪಿಸುವ ಗುರುತರವಾದ ಜವಾಬ್ದಾರಿ ಪಕ್ಷದ ಪದಾಧಿಕಾರಿಗಳು, ಜನಪ್ರತಿನಿಧಿಗಳು ಮತ್ತು ಕಾರ್ಯಕರ್ತರ ಮೇಲಿದೆ. ಬಿಜೆಪಿ ಜಿಲ್ಲೆಯಲ್ಲಿ ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಭರ್ಜರಿ ಜಯಭೇರಿ ಗಳಿಸಿದೆ ಎಂದರು.

ಮುಂಬರುವ ಜಿಲ್ಲಾ ಪಂಚಾಯತ್ ಮತ್ತು ತಾಲೂಕು ಪಂಚಾಯತ್ ಚುನಾವಣೆಯಲ್ಲಿಯೂ ಜಿಲ್ಲೆಯಾದ್ಯಂತ ಬಿಜೆಪಿಯ ವಿಜಯ ಪತಾಕೆ ಹಾರಿಸಲು ಎಲ್ಲರ ಜೊತೆ ಮಹಿಳಾ ಮೋರ್ಚಾ ತಂಡವೂ ಅತ್ಯಂತ ಸಕ್ರಿಯವಾಗಿ ತೊಡಗಿಸಿಕೊಳ್ಳಬೇಕು. ಜನಸೇವೆ ಮತ್ತು ಉತ್ತಮ ಚಟುವಟಿಕೆಗಳ ಮೂಲಕ ಜಿಲ್ಲಾ ಮಹಿಳಾ ಮೋರ್ಚಾ ರಾಜ್ಯದಲ್ಲೇ ಮಾದರಿಯಾಗಿ ಮೂಡಿಬರಲಿ ಎಂದು ಅವರು ಹಾರೈಸಿದರು.

ಉಡುಪಿ ಜಿಲ್ಲಾ ಪಂಚಾಯತ್ ಉಪಾಧ್ಯಕ್ಷೆ ಶೀಲಾ ಕೆ. ಶೆಟ್ಟಿ ಮಾತನಾಡಿ, ಬಿಜೆಪಿಯ ವಿಕ್ರಮ ಸಾಧನೆಯನ್ನು ಉಳಿಸಿಕೊಂಡು ಬೆಳೆಸಿಕೊಂಡು ಹೋಗುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ ಎಂದರು.
ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸದಸ್ಯೆ ಗೀತಾಂಜಲಿ ಸುವರ್ಣ ಮತ್ತು ಬಿಜೆಪಿ ಜಿಲ್ಲಾ ಸಹ ವಕ್ತಾರ ಶಿವಕುಮಾರ್ ಅಂಬಲಪಾಡಿ ಮಾತನಾಡಿ ಜಿಲ್ಲಾ ಮಹಿಳಾ ಮೋರ್ಚಾದ ಕ್ರಿಯಾಶೀಲತೆ ಮತ್ತು ಮಾದರಿ ಕಾರ್ಯಕ್ರಮಗಳನ್ನು ಪ್ರಶಂಸಿದರು.

ವಿಶೇಷ ಕಾರ್ಯಕಾರಿಣಿ ಸಭೆಯ ಅಧ್ಯಕ್ಷತೆ ವಹಿಸಿದ ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾದ ಅಧ್ಯಕ್ಷೆ ವೀಣಾ ಎಸ್. ಶೆಟ್ಟಿ ಮಾತನಾಡಿ, ಕೇಂದ್ರ ಮತ್ತು ರಾಜ್ಯ ಸರಕಾರಗಳ ವಿವಿಧ ಯೋಜನೆಗಳನ್ನು ಜನತೆಗೆ ತಲುಪಿಸುವ ಜೊತೆಗೆ ಉಚಿತ ಕಣ್ಣಿನ ಶಸ್ತ್ರ ಚಿಕಿತ್ಸೆ, ಉಚಿತ ಕನ್ನಡಕ ವಿತರಣೆ ಮುಂತಾದ ಜನೋಪಯೋಗಿ ಕಾರ್ಯಕ್ರಮಗಳ ಮೂಲಕ ಜಿಲ್ಲಾ ಮಹಿಳಾ ಮೋರ್ಚಾ ಜನತೆಯ ಸಂಕಷ್ಟಗಳಿಗೆ ಸ್ಪಂದಿಸುತ್ತಿದೆ. ಮುಂದಿನ ದಿನಗಳಲ್ಲಿ ಪಕ್ಷ ಸಂಘಟನೆಯ ಜೊತೆಗೆ ಇನ್ನಷ್ಟು ಜನಪರ ಚಟುವಟಿಕೆಗಳನ್ನು ಹಮ್ಮಿಕೊಂಡು, ಮುಂಬರಲಿರುವ ಜಿ.ಪಂ. ಮತ್ತು ತಾ.ಪಂ. ಚುನಾವಣೆಗಳಲ್ಲೂ ಎಲ್ಲ ಕ್ಷೇತ್ರಗಳಲ್ಲೂ ಬಿಜೆಪಿ ಜಯಭೇರಿಗಳಿಸಲು ಜಿಲ್ಲಾ ಮಹಿಳಾ ಮೋರ್ಚಾ ಅತ್ಯಂತ ಕ್ರಿಯಾಶೀಲತೆಯಿಂದ ಶ್ರಮಿಸಲಿದೆ. ಈ ನಿಟ್ಟಿನಲ್ಲಿ ಎಲ್ಲಾ ಸ್ತರದ ಪದಾಧಿಕಾರಿಗಳು, ಜನಪ್ರತಿನಿಧಿಗಳು ಮತ್ತು ಕಾರ್ಯಕರ್ತರ ಅವಿರತ ಸೇವೆ ಅತ್ಯಮೂಲ್ಯ ಎಂದರು.

ಪ್ರಥಮ ಬಾರಿಗೆ ಬಿಜೆಪಿ ಜಿಲ್ಲಾ ಕಚೇರಿಗೆ ಹಾಗೂ ಜಿಲ್ಲಾ ಮಹಿಳಾ ಮೋರ್ಚಾ ವಿಶೇಷ ಕಾರ್ಯಕಾರಿಣಿ ಸಭೆಗೆ ಆಗಮಿಸಿದ್ದ ಮಹಿಳಾ ಮೋರ್ಚಾ ಪ್ರಭಾರಿ ಭಾಗೀರತಿ ಮುಳ್ಳೇರಿಯ ರವರನ್ನು ಜಿಲ್ಲಾ ಮಹಿಳಾ ಮೋರ್ಚಾ ವತಿಯಿಂದ ಸನ್ಮಾನಿಸಲಾಯಿತು.

ಜಿಲ್ಲಾ ಮಹಿಳಾ ಮೋರ್ಚಾ ಪದಾಧಿಕಾರಿಗಳು, ಕಾರ್ಯಕಾರಿಣಿ ಸದಸ್ಯರು ಹಾಗೂ ಮಂಡಲಗಳ ಮಹಿಳಾ ಮೋರ್ಚಾ ಅಧ್ಯಕ್ಷರು ಮತ್ತು ಪ್ರಧಾನ ಕಾರ್ಯದರ್ಶಿಗಳು ಉಪಸ್ಥಿತರಿದ್ದರು. ಜಿಲ್ಲಾ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ರಶ್ಮಿತಾ ಬಾಲಕೃಷ್ಣ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು. ಮಹಿಳಾ ಮೋರ್ಚಾ ಜಿಲ್ಲಾ ಕಾರ್ಯದರ್ಶಿ ರೇಣುಕಾ ವಿ. ಸುವರ್ಣ ವಂದಿಸಿದರು.