ಅಕ್ರಮ ಗೋ ಸಾಗಾಟ, ಮತಾಂತರದ ವಿರುದ್ಧ ಕಠಿಣ ಕ್ರಮಕ್ಕೆ ಸೂಚನೆ: ಸಚಿವ ಸುನಿಲ್ ಕುಮಾರ್

ಕಾರ್ಕಳ: ಇತ್ತೀಚಿನ ದಿನಗಳಲ್ಲಿ ಉಡುಪಿ ಜಿಲ್ಲೆಯಲ್ಲಿ ನಡೆಯುತ್ತಿರುವ ಅಕ್ರಮ ಗೋ ಸಾಗಾಟ ಮತ್ತು ಕಾನೂನು ಬಾಹಿರ ಮತಾಂತರ ಚಟುವಟಿಕೆಗಳು ನಡೆಯುತ್ತಿರುವ ಬಗ್ಗೆ ಗಮನಕ್ಕೆ ಬಂದಿದ್ದು, ಈ ನಿಟ್ಟಿನಲ್ಲಿ ಇಂತಹ ಕಾನೂನು ಬಾಹಿರ ಚಟುವಟಿಕೆಗಳನ್ನು ಹತ್ತಿಕ್ಕುವಂತೆ ಹಾಗೂ ಕಠಿಣ ಕ್ರಮ ಕೈಗೊಳ್ಳುವಂತೆ ಉಡುಪಿ ಜಿಲ್ಲೆಯ ಜಿಲ್ಲಾಧಿಕಾರಿಗಳು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಮತ್ತು ಹಿರಿಯ ಪೊಲೀಸ್ ಅಧಿಕಾರಿಗಳಿಗೆ ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖಾ ಸಚಿವರಾದ ವಿ. ಸುನಿಲ್ ಕುಮಾರ್ ಕಟ್ಟುನಿಟ್ಟಿನ ಸೂಚನೆ ನೀಡಿದರು.

ಕಾರ್ಕಳ ಪ್ರವಾಸಿ ಬಂಗಲೆಯಲ್ಲಿ ಶುಕ್ರವಾರ ಅಧಿಕಾರಿಗಳ ಸಭೆ ನಡೆಸಿದ ಸಚಿವರು, ಜಿಲ್ಲೆ ಹಾಗೂ ತಾಲೂಕಿನ ಗಡಿ ಭಾಗಗಳಲ್ಲಿ ಚೆಕ್ ಪೋಸ್ಟ್ ಗಳನ್ನು ಹೆಚ್ಚಿಸಿ ಬಿಗಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡುವ ಮೂಲಕ ವಾಹನ ತಪಾಸಣೆ, ಈ ಹಿಂದೆ ಅಕ್ರಮ ಗೋ ಸಾಗಾಣಿಕೆಯಲ್ಲಿ ಭಾಗಿಯಾಗಿದ್ದ ಶಂಕಿತರನ್ನು ಮತ್ತು ಮಧ್ಯವರ್ತಿಗಳನ್ನು ಠಾಣೆಗೆ ಕರೆಸಿ ವಿಚಾರಣೆಗೆ ಒಳಪಡಿಸುವಂತೆ ಸೂಚಿಸಿದರು.

ಪೊಲೀಸ್ ಠಾಣಾಧಿಕಾರಿಗಳ ಗಸ್ತಿಗೆ ಸುಸಜ್ಜಿತ ವಾಹನಗಳನ್ನು ಹಂಚಿಕೆ ಮಾಡುವಂತೆ ಸೂಚಿಸಿದಲ್ಲದೇ ಎಲ್ಲಾ ಪೊಲೀಸ್ ಠಾಣಾ ವ್ಯಾಪ್ತಿಗಳಲ್ಲಿ ಅಕ್ರಮ ಚಟುವಟಕೆಗಳ ವಿರುದ್ಧ ಜಾಗೃತಿ ಸಭೆಗಳನ್ನು ನಡೆಸುವಂತೆ ಸಲಹೆ ನೀಡಿದರು.

ಈ ಸಭೆಯಲ್ಲಿ ಕುಂದಾಪುರ ಸಹಾಯಕ ಕಮಿಷನರ್, ಕಾರ್ಕಳ ತಹಶೀಲ್ದಾರ್ ಹಾಗೂ ಜಿಲ್ಲೆಯ ಮೂರು ಪೊಲೀಸ್ ಉಪ ವಿಭಾಗದ ಪೊಲೀಸ್ ಉಪ ಅಧೀಕ್ಷಕರು ಉಪಸ್ಥಿತರಿದ್ದರು.