ಉಡುಪಿ: ಕ್ರಿಯೇಟಿವ್ ಪದವಿಪೂರ್ವ ಕಾಲೇಜಿನಲ್ಲಿ ಸಾಹಿತ್ಯಸಾಂಗತ್ಯ-6 ಕಾರ್ಯಕ್ರಮದಡಿ ಹಮ್ಮಿಕೊಂಡಿರುವ ‘ಸಾಹಿತ್ಯದೆಡೆಗೆ ಯುವಜನತೆ’ ಎಂಬ ಕಾರ್ಯಕ್ರಮದಲ್ಲಿ ಕಾಲೇಜಿನ ವಿದ್ಯಾರ್ಥಿಗಳನ್ನು ಕುರಿತು ಮಾತನಾಡಿದ ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ನೀಲಾವರ ಸುರೇಂದ್ರ ಅಡಿಗ, ಪ್ರತಿಭೆ, ಸಮಯ ಮತ್ತು ಸ್ಪೂರ್ತಿ ಇದ್ದರೆ ಸಾಹಿತ್ಯದ ಬೆಳವಣಿಗೆಯಾಗುತ್ತದೆ. ವಿದ್ಯಾರ್ಥಿಗಳು ತಮ್ಮ ವಿದ್ಯಾರ್ಥಿ ಜೀವನದಲ್ಲಿ ಸಾಹಿತ್ಯವನ್ನು ಮೈಗೂಡಿಸಿಕೊಳ್ಳುವುದರಿಂದ ಅವರ ಸಂಪೂರ್ಣ ವ್ಯಕ್ತಿತ್ವ ವಿಕಾಸಗೊಳ್ಳುತ್ತದೆ ಮತ್ತು ಧನಾತ್ಮಕವಾಗಿ ಚಿಂತಿಸುವುದರಿಂದ ವ್ಯಕ್ತಿ ಯಶಸ್ಸನ್ನು ಗಳಿಸಲು ಸಾಧ್ಯವಾಗುತ್ತದೆ ಎಂದರು.
ಪ್ರಾಸ್ತಾವಿಕ ಮಾತನಾಡಿದ ಸಂಸ್ಥೆಯ ಸಂಸ್ಥಾಪಕರಲ್ಲಿ ಓರ್ವರಾದ ಅಶ್ವತ್ ಎಸ್. ಎಲ್, ಸಾಹಿತ್ಯವನ್ನು ಓದುವುದರಿಂದ ಪ್ರತಿಸ್ಪರ್ಧಿಯನ್ನು ಎದುರಿಸುವಲ್ಲಿ ಆತ್ಮವಿಶ್ವಾಸ ಹೆಚ್ಚಾಗುತ್ತದೆ. ಸಾಹಿತ್ಯ ಮನುಷ್ಯನ ಜೀವನದ ಅವಿಭಾಜ್ಯ ಅಂಗವಾಗಬೇಕು ಎಂದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಸಂಸ್ಥೆಯ ಪ್ರಾಂಶುಪಾಲ ಸ್ಟ್ಯಾನಿ ಲೋಬೋ ಸಾಹಿತ್ಯ ಕೇವಲ ಪುಸ್ತಕಕ್ಕೆ ಸೀಮಿತವಾಗಿರದೆ ಯುವಜನತೆ ಅದನ್ನು ಮೈಗೂಡಿಸಿಕೊಂಡು ಕಾರ್ಯಪ್ರವೃತ್ತರಾಗಬೇಕು ಎಂದರು.
ಸಂಸ್ಥೆಯ ಸಂಸ್ಥಾಪಕ ಆದರ್ಶ ಎಂ.ಕೆ. , ಉಪನ್ಯಾಸಕ ವರ್ಗದವರು, ಬೋಧಕೇತರ ಸಿಬ್ಬಂದಿಗಳು ಸಂಸ್ಥೆಯ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಕನ್ನಡ ಉಪನ್ಯಾಸಕ ಸಂತೋಷ್ ನಿರೂಪಿಸಿ ವಂದಿಸಿದರು.