ಎಸ್.ಎಂ.ಎಸ್. ಪದವಿಪೂರ್ವ ಕಾಲೇಜಿನಲ್ಲಿ ತಾಲ್ಲೂಕು ಮಟ್ಟದ ಕ್ರೀಡಾಕೂಟಕ್ಕೆ ಚಾಲನೆ

ಬ್ರಹ್ಮಾವರ: ಎಸ್.ಎಂ.ಎಸ್. ಪದವಿಪೂರ್ವ ಕಾಲೇಜು, ಬ್ರಹ್ಮಾವರದ ಆತಿಥ್ಯದಲ್ಲಿ ಬ್ರಹ್ಮಾವರ ತಾಲ್ಲೂಕು ಮಟ್ಟದ ವಾಲಿಬಾಲ್ ಮತ್ತು ಫುಟ್ಬಾಲ್ ಕ್ರೀಡಾಕೂಟವು ಸೆಪ್ಟೆಂಬರ್ 4ರಂದು ಕಾಲೇಜಿನ ಕ್ರೀಡಾಂಗಣದಲ್ಲಿ ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಓ ಎಸ್ ಸಿ ವಿದ್ಯಾಸಂಸ್ಥೆಯ ಅಧ್ಯಕ್ಷರು ಹಾಗೂ ಕಾಲೇಜಿನ ಸಂಚಾಲಕರಾದ ರೆ. ಫಾದರ್ ಎಂ.ಸಿ. ಮಥಾಯಿ ಅವರು ವಹಿಸಿದ್ದರು.

ಕಾಲೇಜಿನ ಪ್ರಾಂಶುಪಾಲರಾದ ಐವನ್ ದೋನತ್ ಸುವಾರಿಸ್ ಅವರು ಗಣ್ಯರನ್ನು ಹಾಗೂ ಕ್ರೀಡಾಪಟುಗಳನ್ನು ಆತ್ಮೀಯವಾಗಿ ಸ್ವಾಗತಿಸಿದರು. ಕಾರ್ಯಕ್ರಮದ ನಿರೂಪಣೆಯನ್ನು ಸಂತೋಷ್ ನೀಲಾವರ್ ಅವರು ನೆರವೇರಿಸಿದರು.

ಮುಖ್ಯ ಅತಿಥಿಗಳಾಗಿ ಉದ್ಯಮಿ ಹಾಗೂ ಕಾಲೇಜಿನ ಹಳೆಯ ವಿದ್ಯಾರ್ಥಿ ಅಫ್ತಾಬ್ ಅಬ್ದುಲ್ ರಜಾಕ್ ಹಾಗೂ ಪತ್ರಕರ್ತ ಮತ್ತು ಜನಸೇವಾ ಟ್ರಸ್ಟ್‌ನ ಪ್ರತಿನಿಧಿ ಶ್ರೀ ವಸಂತ್ ಮೂಡುಗಿಳಿಯಾರು ಅವರು ಆಗಮಿಸಿ ಕ್ರೀಡಾಕೂಟವನ್ನು ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದ ಅವರು, ವಿದ್ಯಾರ್ಥಿಗಳು ಮಾದಕ ವಸ್ತುಗಳಿಂದ ದೂರವಿದ್ದು, ಆರೋಗ್ಯಕರ ಹಾಗೂ ಶಿಸ್ತುಬದ್ಧ ಜೀವನವನ್ನು ರೂಪಿಸಿಕೊಳ್ಳಬೇಕು ಎಂದು ಕರೆ ನೀಡಿದರು.

ಗೌರವಾನ್ವಿತ ಅತಿಥಿಗಳಾಗಿ ಓ ಎಸ್ ಸಿ ವಿದ್ಯಾಸಂಸ್ಥೆಯ ಕಾರ್ಯದರ್ಶಿ ಅಲನ್ ರೋಹನ್ ವಾಜ್, ಖಜಾಂಚಿ ಹರಿಕ್ ಡಿಸೋಜ, ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷರಾದ ಥಾಮಸ್ ವಾಸ್ ,ಉಡುಪಿ ಜಿಲ್ಲಾ ದೈಹಿಕ ಶಿಕ್ಷಣ ಉಪನ್ಯಾಸಕರ ಸಂಘದ ಅಧ್ಯಕ್ಷ ಸುಕೇಶ್ ಶೆಟ್ಟಿ, ದೈಹಿಕ ಶಿಕ್ಷಣ ಉಪನ್ಯಾಸಕ ದಿನೇಶ್ ಶೆಟ್ಟಿ ಹಾಗೂ ದೈಹಿಕ ಶಿಕ್ಷಣ ಉಪನ್ಯಾಸಕ ರಘು ಕಾಡೂರು ಅವರು ಉಪಸ್ಥಿತರಿದ್ದರು.

ಕ್ರೀಡಾಕೂಟದಲ್ಲಿ ಬ್ರಹ್ಮಾವರ ತಾಲ್ಲೂಕಿನ ವಿವಿಧ ಶಿಕ್ಷಣ ಸಂಸ್ಥೆಗಳ ವಿದ್ಯಾರ್ಥಿಗಳು ಉತ್ಸಾಹದಿಂದ ಪಾಲ್ಗೊಂಡರು. ಕ್ರೀಡೆಯ ಮೂಲಕ ವಿದ್ಯಾರ್ಥಿಗಳಲ್ಲಿ ಶಿಸ್ತು, ತಂಡದ ಮನೋಭಾವ, ನಾಯಕತ್ವ ಗುಣ, ಆತ್ಮವಿಶ್ವಾಸ ಹಾಗೂ ಕ್ರೀಡಾ ಸ್ಫೂರ್ತಿಯನ್ನು ಬೆಳೆಸುವ ಉದ್ದೇಶದಿಂದ ಕ್ರೀಡಾಕೂಟವನ್ನು ಆಯೋಜಿಸಲಾಗಿದೆ ಎಂದು ಕಾರ್ಯಕ್ರಮದಲ್ಲಿ ತಿಳಿಸಲಾಯಿತು.

ವಿವಿಧ ತಂಡಗಳ ಕ್ರೀಡಾಪಟುಗಳು ಕ್ರೀಡಾ ಸ್ಫೂರ್ತಿಯಿಂದ ಸ್ಪರ್ಧೆಯಲ್ಲಿ ಭಾಗವಹಿಸಿ ತಮ್ಮ ಪ್ರತಿಭೆಯನ್ನು ಪ್ರದರ್ಶಿಸಿದರು. ಕಾರ್ಯಕ್ರಮವು ಯಶಸ್ವಿಯಾಗಿ ನಡೆಯಿತು.