ಉಡುಪಿ : ಸರಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ತೆಂಕನಿಡಿಯೂರು ಇಲ್ಲಿನ ಆಪ್ತ ಸಲಹಾ ಸಮಿತಿ ಹಾಗೂ ಐಕ್ಯೂಎಸಿ ಘಟಕದ ವತಿಯಿಂದ ಮಂಗಳವಾರ “ಮಾನಸಿಕ ಆರೋಗ್ಯ ಮತ್ತು ಒತ್ತಡ ನಿರ್ವಹಣೆ” ಎನ್ನುವ ವಿಷಯದ ಬಗ್ಗೆ ವಿಶೇಷ ಉಪನ್ಯಾಸ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.
ಸಂಪನ್ಮೂಲ ವ್ಯಕ್ತಿಗಳಾಗಿ ದೊಡ್ಡಣಗುಡ್ಡೆ ಡಾ. ಎ.ವಿ. ಬಾಳಿಗಾ ಆಸ್ಪತ್ರೆಯ ಕ್ಲಿನಿಕಲ್ ಸೈಕಾಲಜಿಸ್ಟ್ ಡಾ. ನಾಗರಾಜ ಮೂರ್ತಿ ,ವಿದ್ಯಾರ್ಥಿಗಳು ತಮ್ಮ ಕಲಿಕೆಯ ಸಂದರ್ಭದಲ್ಲಿ ಒತ್ತಡವನ್ನು ಹೇಗೆ ನಿರ್ವಹಿಸಬೇಕು ಎನ್ನುವ ಬಗ್ಗೆ ಮಾತನಾಡಿದರು. ದೈಹಿಕ ಆರೋಗ್ಯದ ಜೊತೆಗೆ ಮಾನಸಿಕ ಆರೋಗ್ಯಕ್ಕೂ ಒತ್ತು ಕೊಟ್ಟು ಸಮಗ್ರ ವ್ಯಕ್ತಿತ್ವವನ್ನು ರೂಪಿಸಿಕೊಳ್ಳಬೇಕಾಗಿ ತಿಳಿ ಹೇಳಿದರು. ಖಿನ್ನತೆ, ಹದಿ ಹರೆಯದ ಸಮಸ್ಯೆಗಳು, ಮಾದಕ ವ್ಯಸನಗಳು ಇವುಗಳ ಬಗ್ಗೆ ವಿದ್ಯಾರ್ಥಿಗಳಿಗೆ ಎಚ್ಚರದಿಂದ ಇರಬೇಕೆಂದರು.
ಕಾಲೇಜಿನ ಪ್ರಾಂಶುಪಾಲ ಬಾಲಕೃಷ್ಣ ಎಸ್. ಹೆಗ್ಡೆ ಅಧ್ಯಕ್ಷತೆ ವಹಿಸಿ, ಮಾತನಾಡಿದರು. ಐಕ್ಯೂಎಸಿ ಸಂಚಾಲಕ ಡಾ. ಸುರೇಶ ರೈ ಕೆ. ಉಪಸ್ಥಿತರಿದ್ದರು.
ಕನ್ನಡ ಸ್ನಾತಕೋತ್ತರ ವಿಭಾಗದ ಸಂಚಾಲಕ ಡಾ. ಎಚ್.ಕೆ. ವೆಂಕಟೇಶ್ ಸ್ವಾಗತಿಸಿದರು. ಕನ್ನಡ ಸಹಾಯಕ ಪ್ರಾಧ್ಯಾಪಕಿ ರತ್ನಮಾಲ ವಂದಿಸಿದರು. ವಿದ್ಯಾರ್ಥಿನಿ ಚೈತ್ರ ಕಾರ್ಯಕ್ರಮ ನಿರೂಪಿಸಿದರು.