ಬೆಂಗಳೂರು: ಪರಪ್ಪನ ಅಗ್ರಹಾರ ಜೈಲಿನಲ್ಲಿ ಮೊಬೈಲ್ ಫೋನ್ ಹಾಗೂ ಪೆನ್‌ಡ್ರೈವ್ ಪತ್ತೆಯಾದ ಹಿನ್ನೆಲೆಯಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಜೆಡಿಎಸ್ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಡಿಜಿಪಿ ಅಲೋಕ್ ಕುಮಾರ್ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಕೇಂದ್ರ ಅಪರಾಧ ವಿಭಾಗದ (ಸಿಸಿಬಿ) ಪೊಲೀಸರು ಪರಪ್ಪನ ಅಗ್ರಹಾರ ಜೈಲಿನ ಮೇಲೆ ಹಠಾತ್ ದಾಳಿ ನಡೆಸಿದ ವೇಳೆ ಪ್ರಜ್ವಲ್ ರೇವಣ್ಣ ಹಾಗೂ ಮತ್ತೊಬ್ಬ ವಿಚಾರಣಾಧೀನ ಕೈದಿ ಬಳಿ ಮೊಬೈಲ್ ಫೋನ್ ಮತ್ತು ಪೆನ್‌ಡ್ರೈವ್ ಪತ್ತೆಯಾಗಿತ್ತು. ಈ ಸಂಬಂಧ ಪ್ರಜ್ವಲ್ ರೇವಣ್ಣ ವಿರುದ್ಧ ಪ್ರಕರಣವೂ ದಾಖಲಾಗಿದೆ.
ಘಟನೆ ಬೆನ್ನಲ್ಲೇ ಪರಪ್ಪನ ಅಗ್ರಹಾರ ಜೈಲಿಗೆ ದಿಢೀರ್ ಭೇಟಿ ನೀಡಿದ ಡಿಜಿಪಿ ಅಲೋಕ್ ಕುಮಾರ್, ಹಲವು ಬ್ಯಾರಕ್‌ಗಳನ್ನು ಪರಿಶೀಲಿಸಿದರು. ಈ ವೇಳೆ ಪ್ರಜ್ವಲ್ ರೇವಣ್ಣ ಇದ್ದ ಬ್ಯಾರಕ್‌ನಲ್ಲಿ ಸುಮಾರು 10ರಿಂದ 12 ನಿಮಿಷಗಳ ಕಾಲ ವಿಶೇಷವಾಗಿ ಮಾತನಾಡಿದ್ದಾರೆ ಎನ್ನಲಾಗಿದೆ.
ಮೊಬೈಲ್ ಪತ್ತೆಯಾದ ವಿಚಾರಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ ಡಿಜಿಪಿ, “ನಿನ್ನಿಂದಲೇ ಇಡೀ ಇಲಾಖೆಯ ಮರ್ಯಾದೆ ಹಾಳಾಗಿದೆ. ನನ್ನ ಕೆರಿಯರ್‌ನಲ್ಲಿ ನನಗೆ ಯಾವಾಗಲೂ ಇಷ್ಟು ಬೇಜಾರಾಗಿರಲಿಲ್ಲ. ನಿಮ್ಮಿಂದ ನಾನು ತಲೆ ತಗ್ಗಿಸುವಂತಾಗಿದೆ” ಎಂದು ಗರಂ ಆಗಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಇನ್ನು ಮುಂದೆ ಜೈಲು ನಿಯಮಾವಳಿಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಅಲೋಕ್ ಕುಮಾರ್ ಎಚ್ಚರಿಕೆ ನೀಡಿದ್ದಾರೆ. ಇದಕ್ಕೆ ಪ್ರಜ್ವಲ್ ರೇವಣ್ಣ, “ಇಲ್ಲ ಸಾರ್, ನಾನೇನು ಮಾಡಿಲ್ಲ ಸಾರ್” ಎಂದು ವಾದಿಸಿದ್ದಾರೆ ಎನ್ನಲಾಗಿದೆ.
ಆಗ ಮತ್ತಷ್ಟು ಆಕ್ರೋಶಗೊಂಡ ಡಿಜಿಪಿ, “ನನಗೆಲ್ಲ ಗೊತ್ತಿದೆ. ಸಾಕು, ನಿಲ್ಲಿಸಿ ನಿಮ್ಮ ಡ್ರಾಮಾ. ನಿಮಗೆ ಮೊಬೈಲ್ ಕೊಟ್ಟವರು ಯಾರು? ನೀವು ಹೇಳದಿದ್ದರೆ ಬೇರೆ ಆ್ಯಕ್ಷನ್ ತೆಗೆದುಕೊಳ್ಳಬೇಕಾಗುತ್ತದೆ. ಇನ್ನು ಮುಂದೆ ಈ ರೀತಿ ಆದರೆ, ಮೊಬೈಲ್ ಪತ್ತೆಯಾದರೆ ನಾನು ಸುಮ್ಮನಿರುವುದಿಲ್ಲ” ಎಂದು ಎಚ್ಚರಿಕೆ ನೀಡಿದ್ದಾರೆ ಎನ್ನಲಾಗಿದೆ.
ಜೈಲಿನಲ್ಲಿದ್ದ ಪ್ರಜ್ವಲ್ ರೇವಣ್ಣ ಬಳಿ ಮೊಬೈಲ್ ಮತ್ತು ಪೆನ್‌ಡ್ರೈವ್ ಪತ್ತೆಯಾಗಿರುವ ಪ್ರಕರಣ ಇದೀಗ ಮತ್ತಷ್ಟು ಕುತೂಹಲ ಮೂಡಿಸಿದೆ.















