ಬೆಂಗಳೂರು: ರೈತರಿಗೆ ಮರಣ ಶಾಸನವಾಗಿರುವ ಕೃಷಿ ಉತ್ಪನ್ನ ಮಾರಾಟ ಮತ್ತು ವಾಣಿಜ್ಯ ( ಉತ್ತೇಜನ ಮತ್ತು ಸೌಲಭ್ಯ) ಮಸೂದೆಗೆ ಬಲವಂತದಿಂದ ಅಂಗೀಕಾರ ಪಡೆಯುವ ಮೂಲಕ ಬಿಜೆಪಿ ಸರ್ಕಾರವು ಪ್ರಜಾಪ್ರಭುತ್ವದ ಕಗ್ಗೊಲೆ ನಡೆಸಿದೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಆರೋಪಿಸಿದ್ದಾರೆ.
ಈ ಕುರಿತು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಅವರು, ಕೊರೊನಾವನ್ನು ನಿಯಂತ್ರಿಸಲಾಗದೆ ದೇಶದ ಜನರನ್ನು ಸಾವು-ನೋವಿನ ದವಡೆಗೆ ನೂಕುತ್ತಿರುವ ಅಸಮರ್ಥ ಸರ್ಕಾರವು, ಇದೇ ಅವಕಾಶವನ್ನು ದುರ್ಬಳಕೆ ಮಾಡಿಕೊಂಡು ಕೊರೊನೋತ್ತರ ಭಾರತದ ಏಕೈಕ ಆಶಾಕಿರಣವಾದ ಕೃಷಿ ಕ್ಷೇತ್ರವನ್ನು ಸರ್ವನಾಶ ಮಾಡಲು ಹೊರಟಿರುವುದು ದುರಂತ ಎಂದು ವಾಗ್ದಾಳಿ ನಡೆಸಿದ್ದಾರೆ.
ಅಸಂಘಟಿತರಾಗಿರುವ ಶೇ 80ರಷ್ಟಿರುವ ಸಣ್ಣ ಮತ್ತು ಮಧ್ಯಮ ರೈತರು ಕೃಷಿ ಮಾರುಕಟ್ಟೆಯನ್ನು ಸರ್ಕಾರದ ನೆರವಿಲ್ಲದೆ ಸ್ವಯಂ ನಿಯಂತ್ರಿಸಲಾರರು. ಆ ಕೆಲಸ ಮಾಡುತ್ತಿದ್ದ ಎಪಿಎಂಸಿಯನ್ನು ನಾಶಮಾಡುವುದೆಂದರೆ ಪೂರ್ಣ ಕೃಷಿಕ್ಷೇತ್ರವನ್ನು ಮಣ್ಣುಪಾಲು ಮಾಡಿದಂತೆ ಎಂದು ತಿಳಿಸಿದ್ದಾರೆ.
ಕೇಂದ್ರ ಸರ್ಕಾರದ ತಿದ್ದುಪಡಿ ಕಾಯ್ದೆಯನ್ನು ಕೃಷಿ ಉತ್ಪನ್ನ ಮಾರುಕಟ್ಟೆ (ನಿಯಂತ್ರಣ ಮತ್ತು ಅಭಿವೃದ್ಧಿ) ಕಾಯ್ದೆ ತಿದ್ದುಪಡಿ ಮಸೂದೆಯ ಮೂಲಕ ಅನುಮೋದಿಸಲು ರಾಜ್ಯ ಸರ್ಕಾರ ಹೊರಟಿದೆ.
ಇದರೊಳಗೆ ಅಡಕವಾಗಿರುವ ರೈತ ವಿರೋಧಿ ಹುನ್ನಾರಗಳನ್ನು ಕಾಂಗ್ರೆಸ್ ಪಕ್ಷ ವಿಧಾನಮಂಡಲದ ಎರಡೂ ಸದನಗಳಲ್ಲಿ ಎಳೆಎಳೆಯಾಗಿ ಬಿಡಿಸಿ ವಿರೋಧಿಸಲಿದೆ. ಯಾವುದೇ ಕಾರಣಕ್ಕೂ ಈ ಮಸೂದೆಯ ಅಂಗೀಕಾರಕ್ಕೆ ಅವಕಾಶ ನೀಡುವುದಿಲ್ಲ ಎಂದು ಅವರು ಎಚ್ಚರಿಕೆ ನೀಡಿದರು.