udupixpress
Home Trending ಕೊರೊನಾ ವಾರಿಯರ್ಸ್ ಗಳ ಬೇಡಿಕೆ, ಸಮಸ್ಯೆಯ ಬಗ್ಗೆ ಸರಕಾರದ ಅಸಡ್ಡೆ ಸರಿಯಲ್ಲ: ರಮೇಶ್ ಕಾಂಚನ್

ಕೊರೊನಾ ವಾರಿಯರ್ಸ್ ಗಳ ಬೇಡಿಕೆ, ಸಮಸ್ಯೆಯ ಬಗ್ಗೆ ಸರಕಾರದ ಅಸಡ್ಡೆ ಸರಿಯಲ್ಲ: ರಮೇಶ್ ಕಾಂಚನ್

ಉಡುಪಿ: ಕೊರೊನಾ ಬಂದಾಗಿನಿಂದಲೂ ವೈದ್ಯರು, ಆರೋಗ್ಯ ಇಲಾಖೆ ಸಿಬ್ಬಂದಿ ಹಗಲಿರುಳು ಎನ್ನದೇ ದುಡಿಯುತ್ತಿದ್ದಾರೆ. ಆದರೆ ರಾಜ್ಯ ಸರ್ಕಾರ ಮಾತ್ರ ಅವರ ಸಮಸ್ಯೆಗಳಿಗೆ ಸ್ಪಂದಿಸುವ ಕೆಲಸ ಮಾಡುತ್ತಿಲ್ಲ ಎಂದು ಉಡುಪಿ ನಗರಸಭಾ ಸದಸ್ಯ ರಮೇಶ್ ಕಾಂಚನ್ ದೂರಿದ್ದಾರೆ.

ಕೇಂದ್ರ ಸರ್ಕಾರದ ಆರೋಗ್ಯ ಯೋಜನೆ ಮಾದರಿಯಲ್ಲಿ ವೇತನ ಪರಿಷ್ಕರಣೆ ಮಾಡಬೇಕು ಎನ್ಮುವುದು ಸೇರಿದಂತೆ ವಿವಿಧ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸುವಂತೆ ರಾಜ್ಯ ಸರ್ಕಾರಿ ವೈದ್ಯಾಧಿಕಾರಿಗಳ ಸಂಘ ಮನವಿ ಮಾಡಿತ್ತು. ಆದರೆ ಸರ್ಕಾರ ಈ ಬಗ್ಗೆ ಯಾವುದೇ ಸ್ಪಂದನೆ ನೀಡದೆ, ಅಸಡ್ಡೆ ತೋರಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ವೈದ್ಯಾಧಿಕಾರಿಗಳ ಸಂಘವು ಸರ್ಕಾರ ನಮ್ಮ ಬೇಡಿಕೆಗಳಿಗೆ ಸ್ಪಂದಿಸದಿದ್ದರೆ ಸೆ.21ರಿಂದ ತುರ್ತು ಸೇವೆಗಳನ್ನು ಹೊರತುಪಡಿಸಿ ಉಳಿದೆಲ್ಲ ಸೇವೆಗಳನ್ನು ಸ್ಥಗಿತಗೊಳಿಸುವ ಎಚ್ಚರಿಕೆ ನೀಡಿದೆ. ಹಾಗಾಗಿ ಸರ್ಕಾರ ಕೂಡಲೇ ಎಚ್ಚೆತ್ತುಕೊಂಡು ಸರ್ಕಾರಿ ವೈದ್ಯರು ಹಾಗೂ ಸಿಬ್ಬಂದಿಗಳ ಬೇಡಿಕೆಗಳನ್ನು ಈಡೇರಿಸುವ ಕೆಲಸ ಮಾಡಬೇಕು ಎಂದು ಆಗ್ರಹಿಸಿದ್ದಾರೆ.

ವೈದ್ಯರು‌ ಮುಷ್ಕರ ನಡೆಸಿದರೆ, ಕೋವಿಡ್ ಸಂಬಂಧಿಸಿದ ಸೇವೆಗಳು ಸ್ಥಗಿತಗೊಳ್ಳಲಿದೆ. ಹಾಗಾಗಿ ಸರ್ಕಾರ ರೋಗಿಗಳ ಜೀವನದ ಜತೆಗೆ ಚೆಲ್ಲಾಟ ಆಡುವ ಕೆಲಸ ಮಾಡಬಾರದು. ಜನರ ಮೇಲೆ ಕಾಳಜಿ ಇದ್ದಾರೆ, ವೈದ್ಯರ ಬೇಡಿಕೆಗಳನ್ನು ಕೂಡಲೇ ಈಡೇರಿಸಬೇಕು ಎಂದು ಅವರು ಸರ್ಕಾರವನ್ನು ಒತ್ತಾಯಿಸಿದ್ದಾರೆ.