ಉತ್ತಮ ಸಮಾಜ ನಿರ್ಮಾಣದಲ್ಲಿ ಪೊಲೀಸರ ಪಾತ್ರ ಮಹತ್ತರವಾದುದು- ಪ್ರತೀಕ್ ಬಾಯಲ್

ಉಡುಪಿ: ಪೊಲೀಸರ ಕರ್ತವ್ಯದಲ್ಲಿ ಒತ್ತಡ ಸಹಜ. ಇಂತಹ ಒತ್ತಡವನ್ನು ನಿವಾರಿಸಿಕೊಳ್ಳಲು ಕ್ರೀಡಾಕೂಟಗಳಲ್ಲಿ ಸಕ್ರಿಯವಾಗಿ ಭಾಗವಹಿಸುವುದು ಅಗತ್ಯವಾಗಿದೆ. ಕ್ರೀಡೆ ಮಾನಸಿಕ ಒತ್ತಡ ಕಡಿಮೆ ಮಾಡುವುದರ ಜತೆಗೆ ಪರಸ್ಪರ ಭಾತೃತ್ವದ ಭಾವನೆಯನ್ನೂ ಬೆಳೆಸುತ್ತದೆ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್ ಹೇಳಿದರು.

ಉಡುಪಿ ಜಿಲ್ಲಾ ಪೊಲೀಸ್ ವತಿಯಿಂದ ಅಜ್ಜರಕಾಡಿನ ಮಹಾತ್ಮ ಗಾಂಧಿ ಕ್ರೀಡಾಂಗಣದಲ್ಲಿ ಗುರುವಾರ ಆಯೋಜಿಸಿದ್ದ ಜಿಲ್ಲಾ ಪೊಲೀಸ್ ವಾರ್ಷಿಕ ಕ್ರೀಡಾಕೂಟ–2026 ಉದ್ಘಾಟಿಸಿ ಅವರು ಮಾತನಾಡಿದರು.

ಸರ್ಕಾರಿ ನೌಕರರು ಸೇವಾ ಮನೋಭಾವದಿಂದ ಕರ್ತವ್ಯ ನಿರ್ವಹಿಸಬೇಕು. ಪೊಲೀಸ್ ಇಲಾಖೆಯ ಸೇವೆ ಜನಸ್ನೇಹಿಯಾಗಿರಬೇಕು. ಕಾನೂನು ಸುವ್ಯವಸ್ಥೆ ಕಾಪಾಡುವುದರ ಜತೆಗೆ ಕಾನೂನುಬಾಹಿರ ಚಟುವಟಿಕೆಗಳನ್ನು ನಿಯಂತ್ರಿಸಿ ಜನರಿಗೆ ರಕ್ಷಣೆ ಒದಗಿಸುವ ಜವಾಬ್ದಾರಿ ಪೊಲೀಸರ ಮೇಲಿದೆ ಎಂದರು.

ಉತ್ತಮ ಸಮಾಜ ನಿರ್ಮಾಣದಲ್ಲಿ ಪೊಲೀಸರ ಪಾತ್ರ ಮಹತ್ವದ್ದಾಗಿದೆ. ಸಮಾಜದಲ್ಲಿ ಕಾನೂನು ಸುವ್ಯವಸ್ಥೆ ಸರಿಯಾಗಿಲ್ಲದಿದ್ದರೆ ಜನರಿಗೆ ಯಾವುದೇ ಸೇವೆ ಒದಗಿಸಲು ಸಾಧ್ಯವಾಗುವುದಿಲ್ಲ. ಹೀಗಾಗಿ ಪೊಲೀಸರು ತಮ್ಮ ಕರ್ತವ್ಯವನ್ನು ಜವಾಬ್ದಾರಿಯಿಂದ ನಿರ್ವಹಿಸಬೇಕು ಎಂದು ಹೇಳಿದರು.

ಜಿಲ್ಲಾ ಪೊಲೀಸ್ ಅಧೀಕ್ಷಕ ಹರಿರಾಮ್ ಶಂಕರ್, ಹೆಚ್ಚುವರಿ ಪೊಲೀಸ್ ಅಧೀಕ್ಷಕ ಸುಧಾಕರ್ ನಾಯಕ್ ಹಾಗೂ ರಾಷ್ಟ್ರಮಟ್ಟದ ಅಥ್ಲೆಟಿಕ್ ಕ್ರೀಡಾಪಟು ಶ್ರುತಿ ಪಿ. ಶೆಟ್ಟಿ ಉಪಸ್ಥಿತರಿದ್ದರು.