ನಕಲಿ ಖಾತೆ ಸೃಷ್ಟಿಸಿ ಬಿಜೆಪಿ ನಾಯಕರ ವಿರುದ್ಧ ಪೋಸ್ಟ್ ಹಾಕುವವರಿಗೆ ಮುಂದಿನ ದಿನಗಳಲ್ಲಿ ಜೈಲೂಟ ಖಚಿತ: ಹರೀಶ್ ಪೂಂಜಾ ಎಚ್ಚರಿಕೆ

ಉಡುಪಿ: ಸಾಮಾಜಿಕ ಜಾಲತಾಣಗಳಲ್ಲಿ ನಕಲಿ ಖಾತೆಗಳನ್ನು ಸೃಷ್ಟಿಸಿ ಬಿಜೆಪಿ ನಾಯಕರ ವಿರುದ್ಧ ಅವಹೇಳನಕಾರಿ ಪೋಸ್ಟ್‌ಗಳನ್ನು ಹಾಕುವವರಿಗೆ ಇಂದೇ ಎಚ್ಚರಿಕೆ ನೀಡುವ ಕೆಲಸ ಮಾಡಿ. ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಅಂತಹವರಿಗೆ ಜೈಲೂಟ ಮಾಡಿಸದಿದ್ದರೆ ನಾವು ಬಿಜೆಪಿ ಕಾರ್ಯಕರ್ತರೇ ಅಲ್ಲ ಎಂದು ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಗುಡುಗಿದರು.

ಬೈಲೂರಿನ ಉಮಿಕಲ್ ಬೆಟ್ಟದಲ್ಲಿರುವ ಪರಶುರಾಮ ಥೀಮ್ ಪಾರ್ಕ್ ಕಾಮಗಾರಿಯನ್ನು ಪೂರ್ಣಗೊಳಿಸಿ ಸಾರ್ವಜನಿಕರ ವೀಕ್ಷಣೆಗೆ ಮುಕ್ತಗೊಳಿಸಬೇಕೆಂದು ಆಗ್ರಹಿಸಿ ಬೈಲೂರಿನಲ್ಲಿ ನಡೆದ ಜನಾಗ್ರಹ ಸಭೆಯಲ್ಲಿ ಅವರು ಮಾತನಾಡಿದರು.

ಈ ದೇಶದ ಮಾನ-ಮರ್ಯಾದೆಯನ್ನು ಹಾಳು ಮಾಡಿರುವ ಏಕೈಕ ಪಕ್ಷ ಕಾಂಗ್ರೆಸ್. ರಾಹುಲ್ ಗಾಂಧಿ ಅಂತರರಾಷ್ಟ್ರೀಯ ಮಟ್ಟದಲ್ಲಿ ದೇಶದ ಗೌರವಕ್ಕೆ ಧಕ್ಕೆ ತರುತ್ತಿದ್ದರೆ, ಮುನಿಯಾಲು ಉದಯಕುಮಾರ್ ಶೆಟ್ಟಿ ಕಾರ್ಕಳದ ಗೌರವಕ್ಕೆ ಧಕ್ಕೆ ತರುತ್ತಿದ್ದಾರೆ ಎಂದು ಟೀಕಿಸಿದರು.

ಕಾರ್ಕಳದ ಹೆಮ್ಮೆಯ ಯೋಜನೆಯಾದ ಪರಶುರಾಮ ಥೀಮ್ ಪಾರ್ಕ್ ಅಭಿವೃದ್ಧಿಗೆ ರಾಜ್ಯದ ಕಾಂಗ್ರೆಸ್ ಸರ್ಕಾರ ಹಾಗೂ ಕಾಂಗ್ರೆಸ್ ಮುಖಂಡ ಉದಯಕುಮಾರ್ ಶೆಟ್ಟಿ ಅಡ್ಡಿಪಡಿಸುತ್ತಿದ್ದಾರೆ ಎಂದು ಆರೋಪಿಸಿದರು.

ಮಾಜಿ ಸಚಿವ ಹಾಗೂ ಶಾಸಕ ವಿ. ಸುನಿಲ್ ಕುಮಾರ್ ಅವರ ಕನಸಿನ ಯೋಜನೆಯಾದ ಥೀಮ್ ಪಾರ್ಕ್ ಕಾಮಗಾರಿ ಪೂರ್ಣಗೊಳಿಸಲು ಸರ್ಕಾರ ಅಗತ್ಯ ಅನುದಾನ ಬಿಡುಗಡೆ ಮಾಡುತ್ತಿಲ್ಲ. ರಾಜಕೀಯ ದ್ವೇಷದಿಂದಲೇ ಯೋಜನೆಯ ಅಭಿವೃದ್ಧಿಗೆ ತಡೆಯೊಡ್ಡಲಾಗುತ್ತಿದೆ ಎಂದು ದೂರಿದರು.

ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಬಗ್ಗೆಯೂ ಪ್ರಶ್ನಿಸಿದ ಅವರು, ಗೃಹಲಕ್ಷ್ಮಿ ಯೋಜನೆಯಡಿ ಮಹಿಳೆಯರ ಖಾತೆಗೆ ನಿರೀಕ್ಷಿತ ಹಣ ಜಮೆಯಾಗಿಲ್ಲ ಎಂದು ಆರೋಪಿಸಿದರು. ಮರಳು ಮತ್ತು ಕೆಂಪು ಕಲ್ಲಿನ ಬೆಲೆ ಏರಿಕೆಯಿಂದ ಬಡ ಹಾಗೂ ಮಧ್ಯಮ ವರ್ಗದ ಜನರಿಗೆ ಮನೆ ನಿರ್ಮಿಸುವುದು ಕಷ್ಟವಾಗಿದೆ.

ಈ ಸಮಸ್ಯೆಗಳ ಕುರಿತು ಉದಯಕುಮಾರ್ ಶೆಟ್ಟಿ ಅವರು ಸರ್ಕಾರದ ವಿರುದ್ಧ ಧ್ವನಿ ಎತ್ತಲಿ ಎಂದು ಸವಾಲು ಹಾಕಿದರು.