ಬೆಂಗಳೂರು: ರಾಜ್ಯದಲ್ಲಿ ಮತಾಂತರ ಮಾಡುವ ಕಾರ್ಯ ವ್ಯಾಪಕವಾಗಿದ್ದು, ಇದಕ್ಕೆ ಬಡ ಹಿಂದೂ ಕುಟುಂಬಗಳೇ ಟಾರ್ಗೆಟ್ ಆಗುತ್ತಿವೆ. ಅವರನ್ನು ಆಮಿಷವೊಡ್ಡಿ ಮತಾಂತರ ಮಾಡಲಾಗುತ್ತಿದೆ ಎಂದು ಬಿಜೆಪಿ ಶಾಸಕ ಗೂಳಿಹಟ್ಟಿ ಶೇಖರ್ ಆರೋಪಿಸಿದ್ದಾರೆ.
ವಿಧಾನಸಭೆಯಲ್ಲಿ ಮಂಗಳವಾರ ಶೂನ್ಯವೇಳೆಯಲ್ಲಿ ಮಾತನಾಡಿದ ಅವರು, ಚಿತ್ರದುರ್ಗ ಜಿಲ್ಲೆಯಲ್ಲಿ ಸುಮಾರು 20 ಸಾವಿರ ಮಂದಿ ಮತಾಂತರ ಆಗಿದ್ದಾರೆ. ನನ್ನ ತಾಯಿ ಸಹ ಮತಾಂತರಗೊಂಡಿದ್ದಾರೆ. ಅವರನ್ನು ಆಮಿಷ ಒಡ್ಡಿ ಮತಾಂತರ ಮಾಡಲಾಗಿದೆ ಎಂದು ದೂರಿದರು.
ಆಮಿಷವೊಡ್ಡಿ ಮತಾಂತರ ಮಾಡುವುದು ಶಿಕ್ಷಾರ್ಹ ಅಪರಾಧ. ಈ ಬಗ್ಗೆ ಪ್ರಶ್ನಿಸಿದರೆ ಅತ್ಯಾಚಾರ ಹಾಗೂ ದೌರ್ಜನ್ಯ ಪ್ರಕರಣಗಳನ್ನು ದಾಖಲಿಸುವುದಾಗಿ ಬೆದರಿಕೆ ಒಡ್ಡುತ್ತಿದ್ದಾರೆ. ಇದಕ್ಕೆ ಕಡಿವಾಣ ಹೇರಬೇಕು ಎಂದು ಆಗ್ರಹಿಸಿದರು.
ಮತಾಂತರ ತಡೆ ಕಾಯ್ದೆ ಜಾರಿಗೆ ತರಲು ಚಿಂತನೆ: ಗೂಳಿಹಟ್ಟಿ ಶೇಖರ್ ಪ್ರಶ್ನೆಗೆ ಉತ್ತರಿಸಿದ ಗೃಹ ಸಚಿವ ಆರಗ ಜ್ಞಾನೇಂದ್ರ, ರಾಜ್ಯದಲ್ಲಿ ಮತಾಂತರ ತಡೆಗೆ ಕಾಯ್ದೆ ತರಲು ಚಿಂತನೆ ನಡೆಸಲಾಗಿದೆ ಎಂದರು.
ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ, ಬೇರೆ ಬೇರೆ ರಾಜ್ಯಗಳು ಮತಾಂತರ ನಿಷೇಧಕ್ಕೆ ಕಠಿಣ ಕಾಯ್ದೆಗಳನ್ನು ತಂದಿವೆ. ನಮ್ಮಲ್ಲೂ ಅಂತಹ ಕಾಯ್ದೆಗಳನ್ನು ಜಾರಿಗೆ ತರಬೇಕು’ ಎಂದು ಸಲಹೆ ನೀಡಿದರು.
ಇದಕ್ಕೆ ಧ್ವನಿಗೂಡಿಸಿದ ಬಿಜೆಪಿಯ ಕೆ.ಜಿ.ಬೋಪಯ್ಯ, ರಾಜ್ಯದಲ್ಲಿ ಮತಾಂತರ ಪಿಡುಗು ವ್ಯಾಪಕವಾಗಿದೆ. ಇದರ ನಿಯಂತ್ರಣಕ್ಕೆ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.












