ಕರ್ನಾಟಕಕ್ಕೆ ಹಿಂಗಾರು ಪ್ರವೇಶ: ಕರಾವಳಿ ಸಹಿತ ರಾಜ್ಯದ ವಿವಿಧೆಡೆ ಮೂರು ದಿನ ಭಾರಿ ಮಳೆ.!

ಬೆಂಗಳೂರು: ನಾಳೆಯಿಂದ ಕರ್ನಾಟಕಕ್ಕೆ ಹಿಂಗಾರು ಪ್ರವೇಶವಾಗಲಿದ್ದು, ಈ ಹಿನ್ನೆಲೆಯಲ್ಲಿ ಅ. 21ರಿಂದ 23ರವರೆಗೆ ರಾಜ್ಯದಲ್ಲಿ ವಿಪರೀತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕರ್ನಾಟಕದಲ್ಲಿ ನೈಋತ್ಯ ಮುಂಗಾರು ಕಡಿಮೆಯಾಗಿದ್ದು, ಅ. 21ರಿಂದ ಹಿಂಗಾರು ಮಳೆಯ ಅಬ್ಬರ ಶುರುವಾಗಲಿದೆ. ಈ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಹಾಸನ, ಕೊಡಗು, ರಾಮನಗರ, ಕೋಲಾರ, ಮಂಡ್ಯ, ಮೈಸೂರು ಜಿಲ್ಲೆಗಳಲ್ಲಿ 3 ದಿನ ಹಳದಿ ಅಲರ್ಟ್​ ಘೋಷಿಸಲಾಗಿದೆ. ಹಾಗೇ, ಬಾಗಲಕೋಟೆ, ಬೀದರ್, ಬೆಳಗಾವಿ, ಧಾರವಾಡ, ಹಾವೇರಿ, ಗದಗ, ಕೊಪ್ಪಳ, ರಾಯಚೂರು, ವಿಜಯಪುರ, ಕಲಬುರ್ಗಿ, ಯಾದಗಿರಿಯಲ್ಲಿ ಒಣಹವೆ ಇರಲಿದೆ.

ಅ. 21ರಿಂದ ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಭಾಗಗಳಲ್ಲಿ ಮತ್ತೆ ಮಳೆ ಪ್ರಮಾಣ ಹೆಚ್ಚಲಿದ್ದು, ಹಿಂಗಾರು ಮಳೆ ಪ್ರವೇಶದ ಲಕ್ಷಣಗಳು ಕಂಡುಬಂದಿವೆ ಎಂದು ಹವಾಮಾನ ಇಲಾಖೆ ತಿಳಿಸಿದೆ.