ವಿಟ್ಲಪಿಂಡಿ, ಕೃಷ್ಣಾಷ್ಟಮಿಗೆ ಬಿಗಿ ಪೊಲೀಸ್ ಬಂದೋಬಸ್ತ್: 3 ಡ್ರೋನ್ ತಂಡ, 45 ಹೆಚ್ಚುವರಿ ಸಿಸಿಟಿವಿ ಕ್ಯಾಮೆರಾ; ಏಳು ಕಡೆ ವಾಹನ ನಿಲುಗಡೆ ವ್ಯವಸ್ಥೆ

ಉಡುಪಿ: ಉಡುಪಿ ನಗರದ ಪ್ರಸಿದ್ಧ ವಿಟ್ಲಪಿಂಡಿ ಹಾಗೂ ಶ್ರೀಕೃಷ್ಣ ಜನ್ಮಾಷ್ಟಮಿ ಮಹೋತ್ಸವದ ಹಿನ್ನೆಲೆಯಲ್ಲಿ ಸಾರ್ವಜನಿಕರ ಸುರಕ್ಷತೆ, ಕಾನೂನು ಮತ್ತು ಸುವ್ಯವಸ್ಥೆ ಹಾಗೂ ಸುಗಮ ಸಂಚಾರ ವ್ಯವಸ್ಥೆ ಕಾಪಾಡಲು ಜಿಲ್ಲಾ ಪೊಲೀಸ್ ಇಲಾಖೆ ವ್ಯಾಪಕ ಭದ್ರತಾ ಕ್ರಮಗಳನ್ನು ಕೈಗೊಂಡಿದೆ.
ಮಹೋತ್ಸವದ ಬಂದೋಬಸ್ತ್‌ಗಾಗಿ ಒಬ್ಬರು ಪೊಲೀಸ್ ಅಧೀಕ್ಷಕರು, ಒಬ್ಬರು ಹೆಚ್ಚುವರಿ ಪೊಲೀಸ್ ಅಧೀಕ್ಷಕರು, ಇಬ್ಬರು ಡಿವೈಎಸ್‌ಪಿಗಳು, ಆರು ಪೊಲೀಸ್ ಇನ್‌ಸ್ಪೆಕ್ಟರ್‌ಗಳು, 25 ಪೊಲೀಸ್ ಸಬ್‌ಇನ್‌ಸ್ಪೆಕ್ಟರ್‌ಗಳು ಹಾಗೂ 35 ಸಹಾಯಕ ಸಬ್‌ಇನ್‌ಸ್ಪೆಕ್ಟರ್‌ಗಳನ್ನು ನಿಯೋಜಿಸಲಾಗಿದೆ. ಅಲ್ಲದೆ, 186 ಹೆಡ್ ಕಾನ್‌ಸ್ಟೆಬಲ್‌, ಪೊಲೀಸ್ ಕಾನ್‌ಸ್ಟೆಬಲ್‌ ಹಾಗೂ ಮಹಿಳಾ ಪೊಲೀಸ್ ಸಿಬ್ಬಂದಿ ಮತ್ತು 50 ಗೃಹರಕ್ಷಕ ದಳದ ಸಿಬ್ಬಂದಿ ಕರ್ತವ್ಯ ನಿರ್ವಹಿಸಲಿದ್ದಾರೆ ಎಂದು ಎಸ್ಪಿ ಹರಿರಾಮ್ ಶಂಕರ್ ತಿಳಿಸಿದರು.
ಹೆಚ್ಚುವರಿ ಭದ್ರತೆಗಾಗಿ ಒಂದು ಕೆಎಸ್‌ಆರ್‌ಪಿ ತುಕಡಿ, ಒಂಬತ್ತು ಡಿಎಆರ್ ತುಕಡಿಗಳು, ಮೂರು ಅಗ್ನಿಶಾಮಕ ದಳದ ತಂಡಗಳು, ಎರಡು ಆಂಬ್ಯುಲೆನ್ಸ್‌ಗಳು ಹಾಗೂ ಮೂರು ಡ್ರೋನ್ ತಂಡಗಳನ್ನು ನಿಯೋಜಿಸಲಾಗಿದೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ವಿಶೇಷ ಮುನ್ನೆಚ್ಚರಿಕೆ ವಹಿಸಲಾಗಿದೆ ಎಂದು ಪೊಲೀಸ್ ಇಲಾಖೆ ತಿಳಿಸಿದೆ.
ಏಳು ಕಡೆ ಪಾರ್ಕಿಂಗ್ ವ್ಯವಸ್ಥೆ: ಮಹೋತ್ಸವಕ್ಕೆ ಆಗಮಿಸುವ ಭಕ್ತರ ವಾಹನಗಳ ಸುಗಮ ನಿಲುಗಡೆಗಾಗಿ ನಗರದ ವಿವಿಧೆಡೆ ಏಳು ಸ್ಥಳಗಳನ್ನು ಗುರುತಿಸಲಾಗಿದೆ. ಎಂಜಿಎಂ ಮೈದಾನ, ಶ್ರೀಕೃಷ್ಣ ಮಠ ರಾಜಾಂಗಣ ಪಾರ್ಕಿಂಗ್ ಸ್ಥಳ, ಅಮ್ಮಣ್ಣಿ ರಾಮಣ್ಣ ಶೆಟ್ಟಿ ಸಭಾಭವನ ಪಾರ್ಕಿಂಗ್ ಸ್ಥಳ, ಬೀಡಿನಗುಡ್ಡೆ ಮೈದಾನ, ಬೀಡಿನಗುಡ್ಡೆ ಕ್ರೀಡಾಂಗಣ, ವಿದ್ಯೋದಯ ಶಾಲೆ ಪಾರ್ಕಿಂಗ್ ಸ್ಥಳ ಹಾಗೂ ಮಾಂಡವಿ ರಾಯಲ್ ಗಾರ್ಡನ್‌ನಲ್ಲಿ ವಾಹನ ನಿಲುಗಡೆಗೆ ವ್ಯವಸ್ಥೆ ಕಲ್ಪಿಸಲಾಗಿದೆ.
ಮಹೋತ್ಸವದ ಸಂದರ್ಭದಲ್ಲಿ ಉಂಟಾಗಬಹುದಾದ ಜನಸಂದಣಿಯನ್ನು ನಿಯಂತ್ರಿಸುವುದರ ಜತೆಗೆ ಮಹಿಳೆಯರು ಮತ್ತು ಮಕ್ಕಳ ಸುರಕ್ಷತೆಗೆ ವಿಶೇಷ ಆದ್ಯತೆ ನೀಡಲಾಗಿದೆ. ಈ ಕಾರ್ಯಕ್ಕೆ ಅಕ್ಕಪಡೆ ಹಾಗೂ ಸ್ವಯಂಸೇವಕರ ನೆರವನ್ನೂ ಪಡೆಯಲಾಗುತ್ತಿದೆ.
ನಗರದ ಪ್ರಮುಖ ಸ್ಥಳಗಳಲ್ಲಿ ಹೆಚ್ಚುವರಿಯಾಗಿ 45 ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಿ ನಿರಂತರ ನಿಗಾ ವಹಿಸಲಾಗುತ್ತಿದೆ. ಸಾರ್ವಜನಿಕರಿಗೆ ಅಗತ್ಯ ಸೂಚನೆಗಳನ್ನು ನೀಡಲು 12 ಸಾರ್ವಜನಿಕ ಘೋಷಣಾ ವ್ಯವಸ್ಥೆಗಳನ್ನು ಬಳಸಿಕೊಳ್ಳಲಾಗುತ್ತಿದೆ.
ಹಿಂದಿನ ಅಪರಾಧ ಚಟುವಟಿಕೆಗಳಲ್ಲಿ ಭಾಗಿಯಾಗಿದ್ದವರನ್ನು ಗುರುತಿಸಿ ಅವರ ಚಲನವಲನದ ಮೇಲೆ ನಿಗಾ ವಹಿಸುವ ಉದ್ದೇಶದಿಂದ ಫಿಂಗರ್‌ಪ್ರಿಂಟ್ ಸ್ಕ್ಯಾನರ್‌ಗಳನ್ನು ಬಳಸಲಾಗುತ್ತಿದೆ. ಮಹೋತ್ಸವ ನಡೆಯುವ ಸಂಪೂರ್ಣ ಪ್ರದೇಶದ ಮೇಲೆ ಡ್ರೋನ್ ಕ್ಯಾಮೆರಾಗಳ ಮೂಲಕವೂ ಕಣ್ಗಾವಲು ಇರಿಸಲಾಗುತ್ತದೆ.
ವಿಟ್ಲಪಿಂಡಿ ಹಾಗೂ ಶ್ರೀಕೃಷ್ಣ ಜನ್ಮಾಷ್ಟಮಿ ಮಹೋತ್ಸವವನ್ನು ಶಾಂತಿಯುತ ಮತ್ತು ಸುರಕ್ಷಿತವಾಗಿ ನಡೆಸಲು ಅಗತ್ಯವಿರುವ ಎಲ್ಲ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಸಾರ್ವಜನಿಕರು ಪೊಲೀಸ್ ಇಲಾಖೆಯೊಂದಿಗೆ ಸಹಕರಿಸಿ, ಸಂಚಾರ ನಿಯಮಗಳನ್ನು ಪಾಲಿಸುವ ಜತೆಗೆ ಪೊಲೀಸ್ ಸಿಬ್ಬಂದಿ ನೀಡುವ ಸೂಚನೆಗಳನ್ನು ಅನುಸರಿಸಿ ಮಹೋತ್ಸವದ ಯಶಸ್ಸಿಗೆ ಕೈಜೋಡಿಸಬೇಕು ಎಂದು ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ಮನವಿ ಮಾಡಿದೆ.