ನವದೆಹಲಿ: ಚೆನ್ನೈ ಸೂಪರ್ ಕಿಂಗ್ಸ್ (ಸಿಎಸ್ಕೆ) ತಂಡದ ಬೌಲಿಂಗ್ ಕೋಚ್ ಎಲ್.ಬಾಲಾಜಿ ಅವರಿಗೆ ಕೋವಿಡ್–19 ಸೋಂಕು ದೃಢಪಟ್ಟಿದೆ. ಹೀಗಾಗಿ ನಾಳೆ (ಬುಧವಾರ) ನಡೆಯಬೇಕಿದ್ದ ಸಿಎಸ್ ಕೆ ಹಾಗೂ ರಾಜಸ್ಥಾನ್ ರಾಯಲ್ಸ್ ಪಂದ್ಯವೂ ಮುಂದೂಡಿಕೆಯಾಗಿದೆ.
ಈ ಪಂದ್ಯವನ್ನು ಮರುನಿಗದಿ ಮಾಡಲಾಗುವುದು ಎಂದು ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಮೂಲಗಳು ತಿಳಿಸಿವೆ.
ಹಾಗೆ, ಐಪಿಎಲ್ ಟೂರ್ನಿಯನ್ನು ಮುಂಬೈಗೆ ಸ್ಥಳಾಂತರಿಸಲು ಬಿಸಿಸಿಐ ಸರ್ಕಾರದ ಅನುಮತಿ ಕೋರಿದ್ದು, ಅನುಮತಿಗಾಗಿ ಕಾಯಲಾಗುತ್ತಿದೆ ಎಂದು ‘ಎಎನ್ಐ’ ಸುದ್ದಿಸಂಸ್ಥೆ ವರದಿ ಮಾಡಿದೆ.
ಕೋಲ್ಕತ್ತ ಮತ್ತು ಬೆಂಗಳೂರಿನಲ್ಲಿ ಕೋವಿಡ್ ಪರಿಸ್ಥಿತಿ ಉಲ್ಪಣಗೊಂಡಿರುವುದರಿಂದ ಎಲ್ಲ ಪಂದ್ಯಗಳನ್ನೂ ಮುಂಬೈಗೆ ಸ್ಥಳಾಂತರಿಸಲು ಬಿಸಿಸಿಐ ಮುಂದಾಗಿದೆ ಎಂಬ ಬಿಸಿಸಿಐ ಅಧಿಕಾರಿಯೊಬ್ಬರ ಹೇಳಿಕೆಯನ್ನು ವರದಿ ಉಲ್ಲೇಖಿಸಿದೆ.
ಈವರೆಗಿನ ಮಾಹಿತಿ ಪ್ರಕಾರ, ಇಂದಿನ (ಮಂಗಳವಾರ) ಮುಂಬೈ ಇಂಡಿಯನ್ಸ್ ಮತ್ತು ಸನ್ರೈಸರ್ಸ್ ಹೈದರಾಬಾದ್ ನಡುವಣ ಪಂದ್ಯ ನಡೆಯಲಿದೆ.
ಕೋಲ್ಕತ್ತ ನೈಟ್ ರೈಡರ್ಸ್ ತಂಡದ ಆಟಗಾರರಾದ ವರುಣ್ ಚಕ್ರವರ್ತಿ ಮತ್ತು ಸಂದೀಪ್ ವಾರಿಯರ್ ಅವರಿಗೆ ಕೋವಿಡ್–19 ಸೋಂಕು ದೃಢಪಟ್ಟಿದ್ದರಿಂದ ಸೋಮವಾರ ನಡೆಯಬೇಕಿದ್ದ ಆರ್ಸಿಬಿ–ಕೆಕೆಆರ್ ನಡುವಣ ಪಂದ್ಯ ಮುಂದೂಡಿಕೆಯಾಗಿತ್ತು.