ಕರಾವಳಿಯಾದ್ಯಂತ ಎರಡು ದಿನ ಭಾರೀ ಮಳೆಯಾಗುವ ಸಾಧ್ಯತೆ: ರೆಡ್ ಅಲರ್ಟ್ ಘೋಷಣೆ

ಉಡುಪಿ: ರಾಜ್ಯದ ಕರಾವಳಿ ಜಿಲ್ಲೆಗಳು ಸೇರಿ ಒಟ್ಟು ಆರು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಈ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಣೆ ಮಾಡಿದೆ‌.

ಕರಾವಳಿಯ ಉಡುಪಿ, ಉತ್ತರ ಕನ್ನಡ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳು, ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ ಮತ್ತು ವಿಜಯಪುರ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ನಿರೀಕ್ಷೆ ಇದೆ ಎಂದು ಇಲಾಖೆ ಮುನ್ಸೂಚನೆ ನೀಡಿದೆ.

ಈ ಜಿಲ್ಲೆಗಳಲ್ಲಿ ನಾಳೆ ಬೆಳಿಗ್ಗೆ 8.30ರ ವರೆಗೆ 205 ಮಿ.ಮೀ.ಗೂ ಹೆಚ್ಚು ಪ್ರಮಾಣದಲ್ಲಿ ಮಳೆ ಸುರಿಯುವ ನಿರೀಕ್ಷೆ ಇದೆ. ಈ ಹಿನ್ನೆಲೆಯಲ್ಲಿ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಜಿಲ್ಲಾಡಳಿತಗಳಿಗೆ ಸೂಚಿಸಿದೆ.

ಉತ್ತರ ಒಳನಾಡಿನ ಧಾರವಾಡ, ಗದಗ ಮತ್ತು ಕಲಬುರಗಿ, ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಅವಧಿಯಲ್ಲಿ 115 ಮಿ.ಮೀ.ಗಿಂತ ಅಧಿಕ ಮಳೆಯಾಗುವ ನಿರೀಕ್ಷೆಯಿದ್ದು, ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ.