ಕೈಗಾರಿಕಾ ಪ್ರದೇಶಗಳ ಅಭಿವೃದ್ಧಿಗೆ ಪ್ರತ್ಯೇಕ ಕೈಗಾರಿಕಾ ಟೌನ್‌ಶಿಪ್ ಪ್ರಾಧಿಕಾರ: ಖಾದರ್

ಮಂಗಳೂರು: ರಾಜ್ಯದಲ್ಲಿ ಕೈಗಾರಿಕಾ ಪ್ರದೇಶಗಳ ಅಭಿವೃದ್ಧಿಗೆ ಪ್ರತ್ಯೇಕವಾದ ಕೈಗಾರಿಕಾ ಟೌನ್‌ಶಿಪ್ ಪ್ರಾಧಿಕಾರ ರಚಿಸಲು ನಿರ್ಧರಿಸಲಾಗಿದೆ ಎಂದು ನಗರಾಭಿವೃದ್ಧಿ ಸಚಿವ ಯು.ಟಿ.ಖಾದರ್ ತಿಳಿಸಿದ್ದಾರೆ. 
ಈ ಕುರಿತು ಮಂಗಳೂರಲ್ಲಿ  ಮಂಗಳವಾರ ಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದ ಕೈಗಾರಿಕಾ ಪ್ರದೇಶಗಳಲ್ಲಿ ಮೂಲಭೂತ ಸೌಕರ್ಯ ಸೇರಿದಂತೆ ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳನ್ನು ಸ್ವತಂತ್ರವಾಗಿ ನಿರ್ವಹಿಸಲು ಈ ಪ್ರಾಧಿಕಾರವನ್ನು ರಚಿಸಲಾಗುವುದು. ರಾಜ್ಯದ ಮುನಿಸಿಪಲ್ ಕಾಯಿದೆಗೆ ಮುಂದಿನ ಅಧಿವೇಶನದಲ್ಲಿ ತಿದ್ದುಪಡಿ ತಂದು ಈ ಪ್ರಾಧಿಕಾರ ರಚಿಸಲಾಗುವುದು ಎಂದರು.
ದಕ್ಷಿಣ ಕನ್ನಡ ಜಿಲೆಯಲ್ಲಿ ಅಕ್ರಮ ಮರಳು ಸಾಗಾಟದ ವಿರುದ್ಧ ನಿರ್ದಾಕ್ಷ್ಯಿಣ ಕ್ರಮ ಕೈಗೊಳ್ಳಲು ಈಗಾಗಲೇ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಈಗಾಗಲೇ ಗಣಿ ಮತ್ತು ಭೂವಿಜ್ಞಾನ ಇಲಾಖೆ, ಕಂದಾಯ, ಪೊಲೀಸ್ ಇಲಾಖೆಗೆ ಕ್ರಮ ಕೈಗೊಳ್ಳಲು ಸೂಚನೆ ನೀಡಲಾಗಿದೆ. ಅಕ್ರಮ ಮರಳು ಸಾಗಾಟಕ್ಕೆ ಕಡಿವಾಣ ಹಾಕಲಾಗುವುದು ಎಂದರು. 
ಮಲ್ಪೆಯಲ್ಲಿ ಪಂಚಾಯತ್ ಸದಸ್ಯನ ಮೇಲೆ ಹಲ್ಲೆಯ ಪ್ರಕರಣದ ಆರೋಪಿಯನ್ನು ಶೀಘ್ರದಲ್ಲೇ ಬಂಧಿಸಿರುವ ಕ್ರಮವನ್ನು ಸಚಿವರು ಶ್ಲಾಘಿಸಿದರು.
ಗಡಿ ಪ್ರದೇಶದಲ್ಲಿ ಸಿಸಿ ಕ್ಯಾಮರಗಳ ಅಳವಡಿಕೆ ಕುರಿತು ಬಗ್ಗೆ ಪ್ರತಿಕ್ರಿಯೆ ನೀಡಿದ ಸಚಿವರು, ಒಳರಸ್ತೆಯಲ್ಲಿ ಚಕ್‌ಪೋಸ್ಟ್‌ನಲ್ಲಿ ಜಿ.ಪಿ.ಎಸ್ ಅಳವಡಿಕೆ ಮಾಡುವ ಕುರಿತು ಚಿಂತನೆ ನಡೆಸಲಾಗಿದೆ. ಇದರ ಬಗ್ಗೆ ರಾಜ್ಯದ ಸ್ಥಳೀಯ ಅಧಿಕಾರಿಗಳಿಗೆ ಜತೆಯಲ್ಲಿ ಸಭೆ ನಡೆಸಲಾಗುವುದು ಎಂದು ಅವರು ತಿಳಿಸಿದರು.