ಉಡುಪಿ: ಮುಜರಾಯಿ, ಮೀನುಗಾರಿಕೆ ಹಾಗೂ ಬಂದರು ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರ ವಿರುದ್ಧ ಫೇಸ್ಬುಕ್ ನಲ್ಲಿ ಅವಹೇಳನಕಾರಿ ಪೋಸ್ಟ್ ಹರಿಬಿಟ್ಟ ಅನಿಲ್ ಕುಮಾರ್ ಶೆಟ್ಟಿ ಎಂಬಾತನ ವಿರುದ್ಧ ವ್ಯಾಪಕ ಖಂಡನೆ ಹಾಗೂ ಆಕ್ರೋಶ ವ್ಯಕ್ತವಾಗಿದೆ.
ಕೋಟ ಶ್ರೀ ನಾರಾಯಣ ಗುರು ಸೇವಾ ಸಂಘವು ಈ ಘಟನೆಗೆ ತೀವ್ರ ಖಂಡನೆ ವ್ಯಕ್ತಪಡಿಸಿದೆ. ಅಲ್ಲದೆ, ಅವಹೇಳನಕಾರಿ ಪೋಸ್ಟ್ ಹಾಕಿದ ಆರೋಪಿ ವಿರುದ್ಧ ಕಠಿಣ ಕ್ರಮಕೈಗೊಳ್ಳುವಂತೆ ಆಗ್ರಹಿಸಿ ಸಂಘದ ಸದಸ್ಯರು ಕೋಟ ಪೊಲೀಸ್ ಠಾಣೆಗೆ ತೆರಳಿ ಠಾಣಾಧಿಕಾರಿ ಸಂತೋಷ್ ಬಿ.ಪಿ ಅವರಿಗೆ ದೂರು ನೀಡಿದರು.
ಸಚಿವ ಕೋಟ ಶ್ರೀನಿವಾಸ ಪೂಜಾರಿ ಓರ್ವ ಸರಳ ಸಜ್ಜನಿಕೆಯ ರಾಜಕಾರಣಿ. ಅಂಥವರ ವಿರುದ್ಧ ಅವಹೇಳನ ಮಾಡುವುದನ್ನು ಸಮುದಾಯ ಹಾಗೂ ಅಭಿಮಾನಿಗಳು ಎಂದಿಗೂ ಸಹಿಸಲ್ಲ. ತಪ್ಪಿತಸ್ಥನನ್ನು ಕೂಡಲೇ ಬಂಧಿಸಿ ಸೂಕ್ತ ಕಾನೂನು ಕ್ರಮಕೈಗೊಳ್ಳಬೇಕು ಎಂದು ಸಂಘದ ಸದಸ್ಯರು ಆಗ್ರಹಿಸಿದರು.
ಸಂಘದ ಅಧ್ಯಕ್ಷ ಜಿ. ಸದಾನಂದ ಪೂಜಾರಿ, ಪ್ರಧಾನ ಕಾರ್ಯದರ್ಶಿ ಪ್ರಸಾದ್ ಬಿಲ್ಲವ, ಕಾರ್ಯದರ್ಶಿ ಮನೋಹರ್ ಪೂಜಾರಿ, ಯುವ ಘಟಕದ ಅಧ್ಯಕ್ಷ ನಾಗೇಶ್ ಪೂಜಾರಿ, ಸಂತೋಷ್ ಪೂಜಾರಿ ತೆಕ್ಕಟ್ಟೆ ಹಾಜರಿದ್ದರು.