ಉಡುಪಿ: ತಾನು ಪ್ರೀತಿಸಿದ್ದ ಯುವತಿಯ ಮನೆಗೆ ತೆರಳಿ ಗಲಾಟೆ ನಡೆಸಿದ ಆರೋಪದ ಹಿನ್ನೆಲೆಯಲ್ಲಿ ಆಕೆಯ ಮನೆಯವರಿಂದ ಹಲ್ಲೆಗೊಳಗಾಗಿ ಆಸ್ಪತ್ರೆಗೆ ದಾಖಲಾಗಿದ್ದ ಯುವಕನೊಬ್ಬ ಆಸ್ಪತ್ರೆಯ ಶೌಚಾಲಯದಲ್ಲಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಗರದಲ್ಲಿ ಶುಕ್ರವಾರ ಸಂಜೆ ನಡೆದಿದೆ.
ಆತ್ಮಹತ್ಯೆ ಮಾಡಿಕೊಂಡ ಯುವಕನನ್ನು ಹಿಂದೂ ಜಾಗರಣ ವೇದಿಕೆಯ ನಾಯರ್ಕೊಡಿ ಘಟಕದ ಕಾರ್ಯಕರ್ತ ಪ್ರದೀಪ್ ಪೂಜಾರಿ ಎಂದು ಗುರುತಿಸಲಾಗಿದೆ.
ಪ್ರದೀಪ್ ಪೂಜಾರಿ ಕಳೆದ ಏಳು ವರ್ಷಗಳಿಂದ ಯುವತಿಯೊಬ್ಬಳನ್ನು ಪ್ರೀತಿಸುತ್ತಿದ್ದು, ಇತ್ತೀಚೆಗೆ ಯುವತಿ ಪ್ರೀತಿಯನ್ನು ನಿರಾಕರಿಸಿದ್ದಳು ಎನ್ನಲಾಗಿದೆ.

ಈ ಹಿನ್ನೆಲೆಯಲ್ಲಿ 2025ರಲ್ಲಿ ಯುವತಿಯನ್ನು ಅಡ್ಡಗಟ್ಟಿ ಗಲಾಟೆ ನಡೆಸಿದ ಆರೋಪದ ಮೇಲೆ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಪ್ರಕರಣದಲ್ಲಿ ಬಂಧನಕ್ಕೊಳಗಾಗಿದ್ದ ಪ್ರದೀಪ್ ಬಳಿಕ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದನು.ಅ. 27ರಂದು ಮತ್ತೆ ಯುವತಿಯ ಮನೆಗೆ ತೆರಳಿ ಗಲಾಟೆ ನಡೆಸಿದ್ದಾನೆ ಎನ್ನಲಾಗಿದೆ.
ಈ ವೇಳೆ ಯುವತಿಯ ಮನೆಯವರು ಪ್ರದೀಪ್ ಮೇಲೆ ಹಲ್ಲೆ ನಡೆಸಿದ್ದರು ಎಂದು ತಿಳಿದುಬಂದಿದೆ. ಈ ಸಂಬಂಧ ಮಹಿಳಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಪ್ರದೀಪ್ ಪೂಜಾರಿ ಕೂಡ ಹಿರಿಯಡಕ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದ ಎನ್ನಲಾಗಿದೆ.
ಹಲ್ಲೆಯಿಂದ ತೀವ್ರ ಗಾಯಗೊಂಡಿದ್ದ ಪ್ರದೀಪ್ಗೆ ಉಡುಪಿಯ ಅಜ್ಜರಕಾಡು ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಶುಕ್ರವಾರ ಸಂಜೆ ಆಸ್ಪತ್ರೆಯ ಶೌಚಾಲಯದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ತಿಳಿದುಬಂದಿದೆ.

ಘಟನೆ ತಿಳಿಯುತ್ತಿದ್ದಂತೆ ಹಿಂದೂ ಪರ ಸಂಘಟನೆಗಳ ಕಾರ್ಯಕರ್ತರು ಹಾಗೂ ಗ್ರಾಮಸ್ಥರು ಉಡುಪಿ ನಗರ ಪೊಲೀಸ್ ಠಾಣೆಯ ಎದುರು ಜಮಾಯಿಸಿ, ಯುವಕನ ಸಾವಿಗೆ ಕಾರಣರಾದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.
ಘಟನೆಗೆ ಸಂಬಂಧಿಸಿದಂತೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.















