ಉಡುಪಿ ಮೇ 23: ಜಿಲ್ಲೆಯಲ್ಲಿ ಪ್ರಸಕ್ತ ಮುಂಗಾರು ಮಳೆಯ ಸಮಯದಲ್ಲಿ ಪ್ರಾಕೃತಿಕ ವಿಕೋಪಗಳಿಂದ ಮಾನವ ಜೀವ ಹಾನಿ, ಜಾನುವಾರು ಹಾಗೂ ಆಸ್ತಿ ಹಾನಿಗಳನ್ನು ತಡೆಯಲು ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಮತ್ತು ವಿಕೋಪ ಸಂಭವಿಸಿದ ಸಮಯದಲ್ಲಿ ಸಾರ್ವಜನಿಕರ ರಕ್ಷಣೆಗೆ ತುರ್ತಾಗಿ ಸ್ಪಂದಿಸುವಂತೆ ಎಲ್ಲಾ ಇಲಾಖೆಗಳ ಅಧಿಕಾರಿಗಳಿಗೆ ಅಪರ ಜಿಲ್ಲಾಧಿಕಾರಿ ಬಿ.ಸದಾಶಿವ ಪ್ರಭು ಸೂಚಿಸಿದ್ದಾರೆ.
ಅವರು ಶುಕ್ರವಾರ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ, ಮುಂಗಾರು ಮಳೆ ವಿಪತ್ತು ನಿರ್ವಹಣೆ ಸಂದರ್ಭವನ್ನು ಸಮರ್ಥವಾಗಿ ನಿಭಾಯಿಸುವ ಕುರಿತು ಕೈಗೊಳ್ಳಬೇಕಾದ ಕ್ರಮಗಳ ಕುರಿತ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಉಡುಪಿ ನಗರಸಭೆ ಸೇರಿದಂತೆ ಜಿಲ್ಲೆಯ ಎಲ್ಲಾ ನಗರ ಸ್ಥಳೀಯ ಸಂಸ್ಥೆಗಳು ತಮ್ಮ ವ್ಯಾಪ್ತಿಯಲ್ಲಿನ ಚರಂಡಿಗಳಲ್ಲಿನ ಹೂಳು ತೆಗೆದು, ಮಳೆ ನೀರು ಸರಾಗವಾಗಿ ಹರಿದು ಹೋಗುಲು ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಮತ್ತು ತಮ್ಮ ವ್ಯಾಪ್ತಿಯಲ್ಲಿರುವ ಅಪಾಯಕಾರಿ ಮರಗಳ ಕುರಿತು ಸಂಬಂದಪಟ್ಟ ವಲಯ ಅರಣ್ಯಾಧಿಕಾರಿಗಳಿಗೆ ಮಾಹಿತಿ ನೀಡಿ ಅವುಗಳನ್ನು ತೆರವುಗೊಳಸಲು ಕ್ರಮ ಕೈಗೊಳ್ಳುವಂತೆ ಸೂಚಿಸಿದ ಅಪರ ಜಿಲ್ಲಾಧಿಕಾರಿ, ಪ್ರಾಕೃತಿಕ ವಿಕೋಪ ನಿಧಿಯಿಂದ ಎಲ್ಲಾ ನಗರ ಸ್ಥಳೀಯ ಸಂಸ್ಥೆಗಳಿಗೆ ಮರ ಕತ್ತರಿಸುವ ಯಂತ್ರಗಳನ್ನು ಒದಗಿಸಲಾಗುವುದು ಎಂದರು.
ಜಿಲ್ಲೆಯ ಎಲ್ಲಾ ತಹಸೀಲ್ದಾರ್ ಗಳು ತಮ್ಮ ತಾಲೂಕು ವ್ಯಾಪ್ತಿಯ ಸಂಬಂದಪಟ್ಟ ಅಧಿಕಾರಿಗಳೊಂದಿಗೆ ಕೂಡಲೇ ಸಭೆ ನಡೆಸಿ, ಸೂಕ್ತ ನಿರ್ದೇಶನಗಳನ್ನು ನೀಡುವಂತೆ ಮತ್ತು ಸ್ಥಳೀಯ ನುರಿತ ಈಜುಗಾರರು, ಮುಳುಗು ತಜ್ಞರ ಪಟ್ಟಿಯನ್ನು ಸರಿಯಾದ ಮೊಬೈಲ್ ಸಂಖ್ಯೆಯೊಂದಿಗೆ ಸಿದ್ದವಾಗಿಟ್ಟುಕೊಂಡು, ತುರ್ತು ಸಂದರ್ಭಗಳಿಗಾಗಿ ಬೋಟುಗಳನ್ನು ಸಿದ್ದವಾಗಿಟ್ಟುಕೊಳ್ಳುವಂತೆ ಮತ್ತು ಹಾಗೂ ವಿಕೋಪ ಸಂದರ್ಭದಲ್ಲಿ ಹಾನಿಯಾದ ಪ್ರದೇಶಗಳಿಗೆ ತಕ್ಷಣ ಭೇಟಿ ನೀಡಿ, ನಷ್ಠದ ವರದಿ ಸಿದ್ದಪಡಿಸಿ , ಸಂತ್ರಸ್ಥರಿಗೆ ನಿಗಧಿತ ಅವಧಿಯೊಳಗೆ ಆದಷ್ಟು ಶೀಘ್ರದಲ್ಲಿ ಪರಿಹಾರ ನೀಡಲು ಅಗತ್ಯ ಕ್ರಮ ಕೈಗೊಳ್ಳುವಂತೆ ಅಪರ ಜಿಲ್ಲಾಧಿಕಾರಿ ಬಿ.ಸದಾಶಿವ ಪ್ರಭು ಸೂಚಿಸಿದರು.
ಕಡಲಕೊರೆತ ಸಂಭವಿಸುವ ಪ್ರದೇಶಗಳಲ್ಲಿ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಬಂದರು ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದ ಅಪರ ಜಿಲ್ಲಾಧಿಕಾರಿ ಈ ಕುರಿತಂತೆ ನಡೆಯುತ್ತಿರುವ ಕಾಮಗಾರಿಗಳ ಕುರಿತು ಎಡಿಬಿ ಮತ್ತು ಬಂದರು ಇಲಾಖೆ ಅಧಿಕಾರಿಗಳು ಪರಿಶೀಲಿಸಿ ಅತ್ಯಗತ್ಯವಾದ ಕ್ರಮ ಕೈಗೊಂಡು ಸಮಸ್ಯೆಗಳು ಬಾರದಂತೆ ಎಚ್ಚರವಹಿಸಿಬೇಕು ಹಾಗೂ ಕಿಂಡಿ ಅಣೆಕಟ್ಟುಗಳಿಗೆ ಅಳವಡಿಸಿರುವ ಹಲಗೆಗಳನ್ನು ತೆಗೆಯುವಂತೆ ಸಣ್ಣ ನೀರಾವರಿ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲೆಯಲ್ಲಿನ ಸ್ಥಗಿತಗೊಂಡಿರುವ ಮತ್ತು ಕಾರ್ಯ ನಿರ್ವಹಿಸುತ್ತಿರುವ ಕಲ್ಲುಕೋರೆಗಳಿಗೆ ಸೂಕ್ತ ತಡೆ ಬೇಲಿ ಹಾಕಿ, ಸೂಚನಾ ಫಲಕ ಹಾಕಿರುವ ಕುರಿತಂತೆ ಪರಿಶೀಲಿಸುವಂತೆ ಗಣಿ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದ ಅಪರ ಜಿಲ್ಲಾಧಿಕಾರಿ, ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳದ ಕೋರೆಗಳ ಲೈಸೆನ್ಸ್ ರದ್ದುಗೊಳಿಸಿ, ಮಾಲೀಕರ ವಿರುದ್ದ ಕ್ರಿಮಿನಲ್ ಮೊಕದ್ದಮೆ ದಾಖಲಿಸುವಂತೆ ಸೂಚನೆ ನೀಡಿದರು.
ಪ್ರಾಕೃತಿಕ ವಿಕೋಪ ಸಂದರ್ಭದಲ್ಲಿ ತುರ್ತಾಗಿ ಸ್ಪಂದಿಸುವ ಕುರಿತಂತೆ ಎಲ್ಲಾ ಹೋಬಳಿಗಳಿಗೆ ನೋಡೆಲ್ ಅಧಿಕಾರಿಗಳನ್ನು ನೇಮಿಸಲಾಗುವುದು ಹಾಗೂ ಗ್ರಾಮ ಮಟ್ಟದಲ್ಲಿ ಸಹ ತುರ್ತು ಕಾರ್ಯಪಡೆ ರಚಿಸಲಾಗುವುದು ಎಂದು ಬಿ.ಸದಾಶಿವ ಪ್ರಭು, ಎಲ್ಲಾ ಅಧಿಕಾರಿಗಳು ಪರಸ್ಪರ ಸಮನ್ವಯದಿಂದ ಕಾರ್ಯ ನಿರ್ವಹಿಸಿ, ವಿಕೋಪ ಸಂದರ್ಭದಲ್ಲಿ ಜಿಲ್ಲೆಯ ಸಾರ್ವಜನಿಕರಿಗೆ ಅಗತ್ಯ ನೆರವು ಮತ್ತು ಸೌಲಭ್ಯಗಳನ್ನು ಒದಗಿಸುವಂತೆ ತಿಳಿಸಿದರು.
ಕಳೆದ ವರ್ಷ ಜಿಲ್ಲೆಯ ವಾಡಿಕೆ ಮಳೆ 4039 ಮಿಮೀ ಆಗಿದ್ದು, 4637 ಮಿ.ಮೀ ಮಳೆ ಆಗಿದೆ, ಈ ವರ್ಷ ಇಂದಿನವರೆಗೆ 57.8 ಮಿಮೀ ಮಳೆ ಆಗಿದ್ದು, 37 ವಿವಿಧ ಹಾನಿ ಪ್ರಕರಣಗಳಲ್ಲಿ 11.32 ಲಕ್ಷ ಹಾನಿ ಸಂಭವಿಸಿದೆ ಎಂದು ಅಪರ ಜಿಲ್ಲಾಧಿಕಾರಿ ತಿಳಿಸಿದರು.
ಸಭೆಯಲ್ಲಿ ವಿವಿಧ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.