ಉಡುಪಿ: ಜಿಲ್ಲೆಯಲ್ಲಿ ಕೋವಿಡ್ ಸೋಂಕು ದಿನೇ ದಿನೇ ಹೆಚ್ಚುತ್ತಿದ್ದು, ಮೂರನೇ ಅಲೆಯ ಭೀತಿ ಶುರುವಾಗಿದೆ. ಈ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಕೋವಿಡ್ ನಿಯಮಗಳನ್ನು ಕಟ್ಟುನಿಟ್ಟಾಗಿ ಜಾರಿಮಾಡುವಂತೆ ಅಪರ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.
ಜಿಲ್ಲೆಯಲ್ಲಿ ಕೋವಿಡ್ ನಿಯಮಗಳನ್ನು ಗಾಳಿತೂರಿ ಸಾರ್ವಜನಿಕ ಸ್ಥಳಗಳಲ್ಲಿ ಓಡಾಡುವುದು ಹಾಗೂ ಮಾಸ್ಕ್, ಸಾಮಾಜಿಕ ಅಂತರ ಕಾಪಾಡದೇ ಇರುವುದು ಕಂಡುಬಂದಿದೆ. ಹೀಗಾಗಿ ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಧರಿಸದೆ, ಸಾಮಾಜಿಕ ಅಂತರ ಕಾಪಾಡದೇ, ಕೊರೋನಾ ಸಂಬಂಧಿತ ಸರಕಾರದ ಮಾರ್ಗ ಸೂಚಿಗಳನ್ನು ಉಲ್ಲಂಘಿಸುವವರಿಗೆ ದಂಡ ವಿಧಿಸಿ ಕಾನೂನು ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಜಿಲ್ಲೆಯಲ್ಲಿ ಕೋವಿಡ್ ಪಾಸಿಟಿವಿಟಿ ದರ ನಿಧನವಾಗಿ ಏರಿಕೆಯಾಗುತ್ತಿದ್ದು, ಕೋವಿಡ್ ಪಾಸಿಟಿವ್ ಸಂಖ್ಯೆ ಪ್ರತಿದಿನ ನೂರಕ್ಕಿಂತ ಅಧಿಕ ದಾಖಲಾಗುತ್ತಿದೆ. ಅಲ್ಲದೆ, ಕೋವಿಡ್ ಮೂರನೇ ಅಲೆಯ ಭೀತಿಯೂ ಶುರುವಾಗಿದೆ. ಸಾರ್ವಜನಿಕ ಸಭೆ, ಸಮಾರಂಭ, ಸಮುದ್ರ ತೀರ, ಪಾರ್ಕ್ ಹಾಗೂ ಇತರ ಪ್ರದೇಶಗಳಲ್ಲಿ ನಿಯಮಗಳನ್ನು ಉಲ್ಲಂಘಿಸುವವರ ವಿರುದ್ಧ ಯಾವುದೇ ದಂಡನಾತ್ಮಕ ಕ್ರಮ ಕೈಗೊಳ್ಳದೇ ಇರುವುದು ಕಂಡುಬಂದಿರುತ್ತಿದೆ. ಇದೇ ಕೊರೊನಾ ಸೋಂಕು ಹೆಚ್ಚಾಗಲು ಕಾರಣವಾಗಿದೆ.
ಹೀಗಾಗಿ ತಮ್ಮ ತಮ್ಮ ವ್ಯಾಪ್ತಿಯಡಿ ಸಾರ್ವಜನಿಕ ಸ್ಥಳಗಳಲ್ಲಿ ಕೋವಿಡ್-19 ಸಂಬಂಧಿತ ನಿಯಮಗಳಾದ ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರವನ್ನು ಪಾಲಿಸದೇ ಇರುವುದು, ಹಾಗೂ ಇತರೆ ಸರಕಾರದ ಆದೇಶಗಳನ್ವಯ ಪಾರ್ವಜನಿಕ ಸ್ಥಳಗಳಲ್ಲಿ ಕೋವಿಡ್-19 ಸಮೂಚಿತ ವರ್ತನೆಗಳನ್ನು ಉಲ್ಲಂಘಿಸುವವರ ವಿರುದ್ಧ ನಿರ್ದಾಕ್ಷಿಣ್ಯ ದಂಡನಾತ್ಮಕ ಕ್ರಮವನ್ನು ಕೈಗೊಳ್ಳಬೇಕು ಹಾಗೂ ಈ ಬಗ್ಗೆ ಕ್ರೋಢೀಕೃತ ಮಾಹಿತಿಯನ್ನು ಮಣಿಪಾಲದ ಸಮಾಜ ಕಲ್ಯಾಣ ಇಲಾಖೆಯ ಕಚೇರಿ ಅಧೀಕ್ಷಕ ರಾಘವೇಂದ್ರ ಪ್ರಭು (ಮೊಬೈಲ್ 8861577724) (email-udupid [email protected]) ಇವರಿಗೆ ನೀಡುವಂತೆ ಅಪರ ಜಿಲ್ಲಾಧಿಕಾರಿ ಸೂಚನೆ ನೀಡಿದ್ದಾರೆ.