ಉಡುಪಿ: ಉಡುಪಿ ಜಿಲ್ಲಾ ಅಮೆಚೂರ್ ಅಥ್ಲೆಟಿಕ್ ಸಂಸ್ಥೆ ಮತ್ತು ಕರ್ನಾಟಕ ರಾಜ್ಯದ ಸಂಸ್ಥೆಯ ಜಂಟಿ ಆಶ್ರಯದಲ್ಲಿ “ಕರ್ನಾಟಕ ರಾಜ್ಯ ಕಿರಿಯರ ಮತ್ತು ಅಂಡರ್ 23ರ ವಯೋಮಿತಿ ಕ್ರೀಡಾಕೂಟವು ಆ. 23 ರಿಂದ 25ರವರೆಗೆ ಉಡುಪಿ ಅಜ್ಜರಕಾಡಿನ ಮಹಾತ್ಮ ಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯಲಿದೆ ಎಂದು ಮಾಜಿ ಶಾಸಕರು ಹಾಗೂ ಕ್ರೀಡಾಕೂಟ ಸಂಘಟನಾ ಸಮಿತಿ ಅಧ್ಯಕ್ಷರಾದ ಕೆ ರಘುಪತಿ ಭಟ್ ಹೇಳಿದರು.
ಈ ಕುರಿತು ಸುದ್ದಿಗೋಷ್ಠೀಯಲ್ಲಿ ಮಾತನಾಡಿ ಅವರು, ಈ ಕ್ರೀಡಾಕೂಟದಲ್ಲಿ ಪುದುಚೇರಿಯಲ್ಲಿ ನಡೆಯುವ ಅಖಿಲ ಭಾರತ ದಕ್ಷಿಣ ವಲಯ ಕ್ರೀಡಾಕೂಟ ಮತ್ತು ಭುವನೇಶ್ವರ್ ನಡೆಯುವ ರಾಷ್ಟ್ರೀಯ ಕಿರಿಯರ ಕ್ರೀಡಾಕೂಟಕ್ಕೆ ಕರ್ನಾಟಕ ತಂಡದ ಆಯ್ಕೆ ಮಾಡಲಾಗುವುದು. ಮೂರು ದಿನಗಳ ಕಾಲ ನಡೆಯುವ ಈ ಕ್ರೀಡಾಕೂಟದಲ್ಲಿ ಸುಮಾರು 10 ವಿಭಾಗಗಳಲ್ಲಿ 150 ಕ್ರೀಡಾ ಸ್ಪರ್ಧೆಗಳು ನಡೆಯಲಿವೆ. ಕ್ರೀಡಾಕೂಟವು ಅಥ್ಲೆಟಿಕ್ ಫೆಡರೇಶನ್ ಆಫ್ ಇಂಡಿಯಾದ ನಿಯಮದ ಪ್ರಕಾರ ನಡೆಯಲಿದ್ದು, ಫೋಟೋ Finish ಸಿಸ್ಟಮ್ ಕೂಡ ಅಳವಡಿಸಲಾಗುವುದು ಎಂದರು.
ಆ.23ರಂದು ಬೆಳಿಗ್ಗೆ 10ಗಂಟೆಗೆ ಗೃಹ ಸಚಿವ ಹಾಗೂ ಕರ್ನಾಟಕ ರಾಜ್ಯ ಅಮೆಚೂರ್ ಅಥ್ಲೆಟಿಕ್ ಸಂಸ್ಥೆಯ ಅಧ್ಯಕ್ಷರಾದ ಡಾ. ಜಿ. ಪರಮೇಶ್ವರ್ ಕ್ರೀಡಾಕೂಟಕ್ಕೆ ಚಾಲನೆ ನೀಡಲಿದ್ದಾರೆ. ಮಣಿಪಾಲ ವಿಶ್ವವಿದ್ಯಾನಿಲಯದ ಸಹ ಕುಲಾಧಿಪತಿ ಡಾ. ಎಚ್.ಎಸ್. ಬಳ್ಳಾಲ್ ಅಧ್ಯಕ್ಷತೆ ವಹಿಸಲಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಪಥ ಸಂಚಲನದ ವಂದನೆ ಸ್ವೀಕಾರ ಮಾಡಲಿದ್ದಾರೆ. ಶಾಸಕ ಯಶಪಾಲ್ ಎ. ಸುವರ್ಣ ಧ್ವಜಾರೋಹಣ ನೆರವೇರಿಸಲಿದ್ದಾರೆ ಎಂದು ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಸಂಸ್ಥೆಯ ರಾಜ್ಯ ಉಪಾಧ್ಯಕ್ಷ ಮಹೇಶ್ ಠಾಕೂರ್, ಜಿಲ್ಲಾ ಅಥ್ಲೆಟಿಕ್ಸ್ ಸಂಸ್ಥೆಯ ಅಧ್ಯಕ್ಷ ಹರಿಪ್ರಸಾದ್ ರೈ, ಚಂದ್ರಶೇಖರ್ ಹೆಗ್ಡೆ, ದಿನೇಶ್ ಕುಮಾರ್ ಎ. ಉಪಸ್ಥಿತರಿದ್ದರು.












